15 ದಿನದೊಳಗೆ ಅರ್ಜಿ ಇತ್ಯರ್ಥಗೊಳಿಸಿ
ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮೇ 22
ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳನ್ನು 15 ದಿನಗಳೊಳಗಾಗಿ ಇತ್ಯರ್ಥಪಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು, ನಿರ್ಲಕ್ಷಿಸಿದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಗುರುವಾರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಬೆಂಗಳೂರಿನಲ್ಲಿ ಹಾಗೂ ಮೈಸೂರಿಗೆ ಭೇಟಿ ನೀಡಿದಾಗ ಹಲವಾರು ಜನ ನನಗೆ ಅಹವಾಲು ನೀಡುತ್ತಾರೆ. ಇವುಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಲಾಗುತ್ತಿದ್ದು, ಅವುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕೆಂದು ಆದೇಶಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕ ಅಹವಾಲು ಕೇಳುವ ಮನಸ್ಥಿತಿ ರೂಢಿಸಿಕೊಳ್ಳಬೇಕು. ನಿಮ್ಮ ಹಂತದಲ್ಲಿಯೇ ಸಮಸ್ಯೆ ಇತ್ಯರ್ಥವಾದರೆ ಸಾರ್ವಜನಿಕರು ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುವುದು ತಪ್ಪುತ್ತದೆ. ಮುಂದಿನ ತಿಂಗಳ 20 ರೊಳಗಾಗಿ ತ್ರೈಮಾಸಿಕ ಕೆಡಿಪಿ ಸಭೆ ಕರೆದು ವಿವರವಾಗಿ ಪ್ರಗತಿ ಪರಿಶೀಲನೆ ಮಾಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಈಗ ನೀಡಲಾದ ಸೂಚನೆಗಳ ಬಗ್ಗೆ ಕ್ರಮ ವಹಿಸಲು ತಿಳಿಸಿದರು.
ಕುಡಿಯುವ ನೀರಿಗೆ 117 ಕೋಟಿ: ಕುಡಿಯುವ ನೀರು ಪೂರೈಕೆಗಾಗಿ 117 ಕೋಟಿ ಕ್ರಿಯಾ ಯೋಜನೆ ರೂಪಿಸಲಾಗಿದ್ದು, 65 ಕೋಟಿ ಬಿಡುಗಡೆ ಆಗಿದೆ. ಜತೆಗೆ ಪೂರ್ಣ ವೆಚ್ಚ ಮಾಡಲಾಗಿದೆ. ಜಿಲ್ಲೆಯ 21 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇವುಗಳನ್ನು ಹೊರತುಪಡಿಸಿ ಇನ್ನಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಪಂ ಸಿಇಒ ಪಿ.ಎ. ಗೋಪಾಲ್ ಸಭೆಗೆ ಮಾಹಿತಿ ನೀಡಿದರು.
ಅಂತರ್ಜಲ ವೃದ್ಧಿಗೆ ವಿವಿಧ ಇಲಾಖೆಗಳ ಜೊತೆಗೂಡಿ ಕ್ರಮ ವಹಿಸುವಂತೆ ಹಾಗೂ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಕೈಗೊಳ್ಳಲಾಗಿರುವ 30 ಬಹುಗ್ರಾಮ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ. ಇದರಿಂದ 857 ಗ್ರಾಮಗಳಿಗೆ ಪ್ರಯೋಜನ ದೊರೆಯಲಿದೆ. ಹೊಸದಾಗಿ 12 ಯೋಜನೆಗಳನ್ನು ಪ್ರಸ್ತಾಪಿಸಲಾಗಿದ್ದು, ಒಟ್ಟಾರೆ 230 ಕೋಟಿ ವೆಚ್ಚವಾಗಲಿದೆ. ಈಗಾಗಲೇ 6 ಯೋಜನೆಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ. 16 ಯೋಜನೆಗಳು ಅನುಮೋದನೆಯಾಗಿದ್ದು, ಟೆಂಡರ್ ಕರೆಯಲಾಗಿದೆ. 5 ಯೋಜನೆಗಳಿಗೆ ವಿವರ ಯೋಜನಾ ವರದಿ ತಯಾರಿಸಲಾಗಿದೆ ಎಂದು ಅಧೀಕ್ಷಕ ಎಂಜಿನಿಯರ್ ಪ್ರಭಾಕರ್ ಹೆಮ್ಮಿಗೆ ವಿವರಿಸಿದರು.
ಪೂರ್ಣಗೊಂಡಿರುವ ಯೋಜನೆಗಳಲ್ಲಿಯೂ ಹಲವಾರು ಲೋಪಗಳಿದ್ದು, ಇವುಗಳನ್ನು ಪರಿಹರಿಸಿ ಸಮರ್ಪಕ ನೀರು ಸರಬರಾಜು ಮಾಡಲು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಮೈಸೂರು ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆದರು.
ರಸ್ತೆ ನಿರ್ವಹಣೆಗೆ ಹಣ: ಮೈಸೂರಿನ ನಗರಭಾಗದಲ್ಲಿ ಲೋಕೋಪಯೋಗಿ ಇಲಾಖೆಯ 35 ಕಿ.ಮೀ. ರಸ್ತೆಯನ್ನು ನಗರಪಾಲಿಕೆಗೆ ವಹಿಸಿ ಕೊಡಲಾಗಿದೆ. ಆದರೆ ನಿರ್ವಹಣೆಗೆ ಹಣ ಇಲ್ಲ ಎಂಬ ವಿಷಯವನ್ನು ಶಾಸಕ ತನ್ವೀರ್ ಸೇಠ್ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆಯಿಂದಲೇ ಅಭಿವೃದ್ಧಿಪಡಿಸಲು ಆರ್ಥಿಕ ನೆರವು ಒದಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಮುಖ್ಯಮಂತ್ರಿಗಳ 100 ಕೋಟಿ ವಿಶೇಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಮಾಹಿತಿಯನ್ನು ನಗರಪಾಲಿಕೆ ಆಯುಕ್ತ ಪಿ.ಜಿ.ರಮೇಶ್ ನೀಡಿದರು. ದೇವರಾಜ ಮಾರುಕಟ್ಟೆ ನವೀಕರಣ, ಲಾನ್ಸ್ಡೌನ್ ಕಟ್ಟಡ ನವೀಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಹತ್ತು ವಾರಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹ ಇದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ದೇವದಾಸ್ ಮಾಹಿತಿ ನೀಡಿದರು. ಕಾಲುಬಾಯಿ ಜ್ವರ ರೋಗದ ಹಾವಳಿ ಸದ್ಯಕ್ಕೆ ಇಲ್ಲ. ಕಾಲುಬಾಯಿ ಜ್ವರದಿಂದ ಜಿಲ್ಲೆಯಲ್ಲಿ 720 ಜಾನುವಾರುಗಳು ಮೃತಪಟ್ಟಿದ್ದು, 1.71 ಕೋಟಿ ಪರಿಹಾರ ವಿತರಿಸಲಾಗಿದೆ. ಪರಿಹಾರ ವಿತರಣೆಯ ಯಾವುದೇ ಪ್ರಕರಣ ಬಾಕಿ ಇಲ್ಲ ಎಂದು ತಿಳಿಸಿದರು.
ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕಾದ ಪ್ರಕರಣಗಳು 2012-13ನೇ ಸಾಲಿಗೆ 132 ಹಾಗೂ 2013-14ನೇ ಸಾಲಿನ 203 ಬಾಕಿ ಇವೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ ದೇವರಾಜ ಅರಸು ನಿಗಮ, ವಾಲ್ಮೀಕಿ ನಿಗಮ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ಸಂಬಂಧಿಸಿದಂತೆ ಇವುಗಳು ಬಾಕಿ ಇದ್ದು ನೋಂದಣಿ, ಠೇವಣಿ ಪಾವತಿಯಂತಹ ಸಮಸ್ಯೆಗಳಿಂದ ಬಾಕಿ ಉಳಿದಿವೆ. ಇನ್ನು ಒಂದು ತಿಂಗಳ ಒಳಗಾಗಿ ಇವುಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸೆಸ್ಕ್ ಅಧಿಕಾರಿಗಳು ಹೇಳಿದರು.
ಕಾಲಕಾಲಕ್ಕೆ ಸಮನ್ವಯ ಸಭೆ ನಡೆಸುವ ಮೂಲಕ ಸಕಾಲದಲ್ಲಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕುಡಿಯುವ ನೀರಿನ ಯೋಜನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ತಡಮಾಡಬಾರದೆಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ವಸತಿ ಸಚಿವ ಎಂ.ಎಚ್. ಅಂಬರೀಷ್, ಶಾಸಕರಾದ ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ವಾಸು, ಜಿಪಂ ಅಧ್ಯಕ್ಷ ಮಹದೇವು, ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ, ಪ್ರಭಾರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ, ಎಂಡಿಎ ಆಯುಕ್ತ ಎಸ್.ಪಾಲಯ್ಯ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಎಂ. ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

