ಪೊಲೀಸ್ ಇಲಾಖೆಗೆ ಸೈಬರ್ ಕ್ರೈಂ ದೊಡ್ಡ ಸವಾಲು
ಕನ್ನಡಪ್ರಭ ವಾರ್ತೆ, ರಾಯಚೂರು, ಏ.2
ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ನಿರಂತರ ದುಡಿಯುವ ಪೊಲೀಸ್ ಸಿಬ್ಬಂದಿಗೆ ಇಂದು ಸೈಬರ್ ಕ್ರೈಮ್ ಬಹುದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಅಪರಾಧ ತಡೆಗೆ ಅಗತ್ಯ ತಂತ್ರ ಅನುಸರಿಸಬೇಕೆಂದು ನಿವೃತ್ತ ಪೊಲೀಸ್ ಅಧಿಕಾರಿ ವಿ.ಬಿ. ಬೆಳವಡಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಸಮಾಜದ ಎಲ್ಲ ರೀತಿಯ ಸುಧಾರಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ಅಪರಾಧ ತಡೆಯುವಲ್ಲಿ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆಂದು ಶ್ಲಾಘಿಸಿದರು.
ಕ್ಷೇಮಾಭಿವೃದ್ಧಿಗೆ ಕ್ರಮ: ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರ ಕ್ಷೇಮಾಭಿವೃದ್ಧಿಗೆ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಸಂಕಷ್ಟದಲ್ಲಿರುವ ಪೊಲೀಸರು ಮತ್ತು ಅವರ ಕುಟುಂಬದವರಿಗೆ ಸೂಕ್ತ ಸಂದರ್ಭದಲ್ಲಿ ಆರ್ಥಿಕವಾಗಿ ನೆರವಾಗುವ ಮೂಲಕ ಅವರ ಏಳಿಗೆಗೆ ಅಧಿಕಾರಿಗಳು ಮುಂದಾಗಬೇಕೆಂದು ಸಲಹೆ ನೀಡಿದರು.
ಸಮಾಜದ ಪ್ರಗತಿಗೆ ಶಾಂತಿ ಮತ್ತು ಸುವ್ಯವಸ್ಥೆಯೇ ಪೂರಕ ಅಂಶಗಳಾಗಿವೆ. ಶಾಂತಿ ಮತ್ತು ಸುವ್ಯವಸ್ಥೆಯ ಮೂಲಕವೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ಪೊಲೀಸರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ಎಲ್ಲರೂ ಪೊಲೀಸರಿಗೆ ಅಪರಾಧಗಳನ್ನು ತಡೆಯುವಲ್ಲಿ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಆರೋಗ್ಯ ಸಂಬಂಧಿ ನೆರವು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಬಿಸನಳ್ಳಿ ಮಾತನಾಡಿ, ಸಮಾಜವನ್ನು ಶಾಂತಿ ಮತ್ತು ಸುಸ್ಥಿತಿಯಲ್ಲಿಡಲು ದುಡಿಯುವ ಪೊಲೀಸ್ ಸಿಬ್ಬಂದಿ ಹಿತ ಕಾಯಲು ಜಿಲ್ಲಾ ಪೊಲೀಸ್ ಇಲಾಖೆ ಸದಾ ಸಿದ್ಧ. ಈ ನಿಟ್ಟಿನಲ್ಲಿ 2012-13ರಲ್ಲಿ 12ಜನ ನಿವೃತ್ತ ಪೊಲೀಸ್ ಸಿಬ್ಬಂದಿಗೆ 52500 ಆರೋಗ್ಯ ಸಂಬಂಧಿ ನೆರವು ನೀಡಲಾಗಿದೆ ಎಂದು ತಿಳಿಸಿದರು.
2012-13ರಲ್ಲಿ ಪೊಲೀಸ್ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕಾಗಿ 70,400, ವಿವಿಧ ರೀತಿಯ ಕಾರ್ಯಗಳಿಗೆ 2.91ಲಕ್ಷ ಸೇರಿದಂತೆ ಒಟ್ಟು 3.61 ಲಕ್ಷ ಆರ್ಥಿಕ ನೆರವು ನೀಡಲಾಗಿದೆ. ಪೊಲೀಸ್ ಸಿಬ್ಬಂದಿಗೆ ಯೋಗ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಅಕ್ಯುಪ್ರೆಶರ್ ಕಿಟ್: ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತಾಗಲು ಅಕ್ಯುಪ್ರೆಶರ್ ಕಿಟ್ ಒದಗಿಸಲಾಗಿದೆ. ಆಹಾರ ಪದ್ಧತಿಯ ಬಗ್ಗೆ ಮಾಹಿತಿ ನೀಡಿಕೆ ಶಿಬಿರ ಆಯೋಜಿಸಲಾಗಿದ್ದು, ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಶುದ್ಧ ಕುಡಿಯುವ ನೀರೊದಗಿಸುವ ನಿಟ್ಟಿನಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಉಜ್ವಲ್ಕುಮಾರ್ ಘೋಷ್ ಮಾತನಾಡಿ, ಪೊಲೀಸ್ ಸಿಬ್ಬಂದಿ ವಸತಿ ಸೌಲಭ್ಯ ಕಲ್ಪಿಸಲು ಪೊಲೀಸ್ ಇಲಾಖೆಯಲ್ಲಿ ವಸತಿ ವಿಭಾಗವಿದ್ದು, ನಿರಂತರ ಕಾರ್ಯನಿರ್ವಹಿಸುತ್ತಿದೆ. ಅದೇ ರೀತಿ ಪೊಲೀಸರ ಆರೋಗ್ಯ ರಕ್ಷಣೆಗೆ ಜಿಲ್ಲಾಡಳಿತ ಸ್ಪಂದಿಸಲಿದೆ ಎಂದರು.
ಮರುಪಾವತಿಗೆ ಕ್ರಮ: ವೈದ್ಯಕೀಯ ವೆಚ್ಚಗಳ ಪೂರ್ಣ ಪ್ರಮಾಣದ ಮರುಪಾವತಿಗೆ ಕ್ರಮ ಕೈಗೊಳ್ಳುವುದು ಅವಶ್ಯಕ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸದಾ ಪೊಲೀಸ್ ಸಿಬ್ಬಂದಿಯ ಬೆಂಬಲಕ್ಕಿರಲಿದೆ ಎಂದು ಭರವಸೆ ನೀಡಿದರು.
ಜಿಪಂ ಸಿಇಒ ಜ್ಞಾನಪ್ರಕಾಶ್ ಮಾತನಾಡಿದರು. ಇದಕ್ಕೂ ಮುನ್ನ ಪೊಲೀಸ್ ಸಿಬ್ಬಂದಿ ಆಕರ್ಷಕ ಪಥ ಸಂಚಲನ ನಡೆಸಿ ಮುಖ್ಯ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು.
ಪ್ರಮುಖರಾದ ಸಹಾಯಕ ಆಯುಕ್ತೆ ಮಂಜುಶ್ರೀ, ಡಿವೈಎಸ್ಪಿ ಡಾ.ದಿವ್ಯಾ ಗೋಪಿನಾಥ್ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಗಣ್ಯರು ಪಾಲ್ಗೊಂಡಿದ್ದರು.
ಈ ವೇಳೆ ಈಚೇಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಜಿಲ್ಲಾ ಪೊಲೀಸ್ ಹೆಚ್ಚುವರಿ ಎಸ್ಪಿ ಮಹಾಂತೇಶ್ ಅವರನ್ನು ಜಿಲ್ಲಾ ಇಲಾಖೆಯಿಂದ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

