ರಾಯಚೂರು

ಬ್ಯಾಂಕ್ ಖಾತೆಗೆ ಹದ್ದಿನ ಕಣ್ಣು

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಏ.5
ಚುನಾವಣೆಯ ಹಿನ್ನೆಲೆಯಲ್ಲಿ ಬ್ಯಾಂಕುಗಳ ಖಾತೆಯಿಂದ 1 ಲಕ್ಷಕ್ಕೂ ಮೀರಿ ಹಣ ನಗದೀಕರಿಸುವ ಗ್ರಾಹಕರ ಮಾಹಿತಿ ಒದಗಿಸುವಂತೆ ಜಿಲ್ಲೆಯ ಎಲ್ಲ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ವೇಳೆ ಹಣ ಹಂಚಿಕೆಯನ್ನು ತಡೆಯುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಳ್ಳಲಾಗಿದ್ದು, ಖಾತೆಗಳಿಂದ 1 ಲಕ್ಷಕ್ಕೂ ಹೆಚ್ಚಿನ ಹಣ ಪಡೆಯುವ ವ್ಯಕ್ತಿಗಳ ಮೇಲೆ ನಿಗಾಯಿರಿಸಲಾಗುತ್ತಿದೆ ಎಂದು ಹೇಳಿದರು.
ರಾಜಕೀಯ ವ್ಯಕ್ತಿಗಳೊಂದಿಗೆ ಸಂಬಂಧ- ತನಿಖೆ: ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಹಣ ಪಡೆಯುವವರು ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳೊಂದಿಗೆ ಸಂಬಂಧವಿರಿಸಿಕೊಂಡಿದ್ದರೆ ಆ ಬಗ್ಗೆ ಸಮರ್ಪಕ ತನಿಖೆ ನಡೆಸಿ ಅಂಥವರಿಗೆ ಕಾನೂನಿನಂತೆ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ತುಂಗಭದ್ರಾ ಎಡದಂಡೆ ಕಾಲುವೆಯ ಆಧುನೀಕರಣ ಕಾರ್ಯಕ್ಕೆ ನೀತಿ ಸಂಹಿತೆಯ ಅಡ್ಡಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಲುವೆಯ ಶಾಶ್ವತ ದುರಸ್ತಿಗೆಯ ಭಾಗವಾಗಿರುವ 342 ಕೋಟಿ ವೆಚ್ಚದ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿ ಚುನಾವಣೆ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
5 ಕೋಟಿ ವೆಚ್ಚದ ಕ್ರಿಯಾಯೋಜನೆ: ತುಂಗಭದ್ರಾ ಎಡದಂಡೆ ಆಧುನೀಕರಣ ಕಾರ್ಯಕ್ಕೆ ಪೂರಕವಾಗಿ ಜಿಲ್ಲಾಡಳಿತ ಮಾಹಿತಿ ಒದಗಿಸಿದೆ ಎಂದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ 5 ಕೋಟಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಗೊಳಿಸಲಾಗಿದೆ ಎಂದು ಹೇಳಿದರು.
ಪ್ರತಿ ತಾಲೂಕಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ 60 ಲಕ್ಷ ವೆಚ್ಚದ ಕ್ರಿಯಾಯೋಜನೆ ತಯಾರಿಸಿದ್ದು, ಸಮರ್ಪಕ ಕುಡಿಯುವ ನೀರೊದಗಿಸುವ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತಾಲೂಕು ಮಟ್ಟದಲ್ಲಿ ಎಲ್ಲ ಅಧಿಕಾರಿಗಳನ್ನು ಈ ನಿಟ್ಟಿನಲ್ಲಿ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
2 ಕಡೆ 3 ಸಾವಿರ ಮತದಾರರ ನೋಂದಣಿ: ಜಿಲ್ಲೆಯಲ್ಲಿ ಇದುವರೆಗೆ 3 ಸಾವಿರ ಮತದಾರರು ಎರಡು ಕಡೆ ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ತೆಗೆದು ಹಾಕುವಂತೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಏ.7ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಮತದಾರರು ನಿರ್ಲಕ್ಷ್ಯ ತೋರಿದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಮದ್ಯ ಮಾರಾಟದ ಮೇಲೆ ನಿರಂತರ ನಿಗಾಯಿರಿಸಲಾಗುತ್ತಿದೆ. ಪ್ರತಿ ತಿಂಗಳು ನಿಗದಿಪಡಿಸಿದ ಮಿತಿಯಲ್ಲಿಯೇ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘಿಸಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ದಿನಸಿ ಮತ್ತು ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಸಾರ್ವಜನಿಕರು ತಮಗೆ ಮಾಹಿತಿ ಒದಗಿಸಿದಲ್ಲಿ ಅಂಥವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಘೋಷ್ ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.