ಶಾಸಕರಿಂದ ಅಭಿವೃದ್ಧಿ ಅನುದಾನ ದುರ್ಬಳಕೆ
ಕನ್ನಡಪ್ರಭ ವಾರ್ತೆ, ರಾಯಚೂರು, ಏ.8
ದೇವದುರ್ಗ ವಿಧಾನಸಭೆ ಕ್ಷೇತ್ರಕ್ಕೆ ಸರ್ಕಾರದಿಂದ 2 ಸಾವಿರ ಕೋಟಿ ಅಭಿವೃದ್ಧಿ ಅನುದಾನ ತಂದಿದ್ದಾಗಿ ಶಾಸಕ ಶಿವನಗೌಡ ನಾಯಕ ಹೇಳಿಕೊಂಡಿದ್ದಾರೆ. ಅಭಿವೃದ್ಧಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ. ಈ ವಿಚಾರವನ್ನು ಮುಂದಿರಿಸಿಕೊಂಡು ದೇವದುರ್ಗದಲ್ಲಿ ಮತಯಾಚಿಸುವುದಾಗಿ ಕೆಜೆಪಿ ದೇವದುರ್ಗ ಕ್ಷೇತ್ರದ ಅಭ್ಯರ್ಥಿ ಶಾಂತನಗೌಡ ಹೇಳಿದರು.
ನಗರದಲ್ಲಿ ಸೋಮವಾರ ಕೆಜೆಪಿ ಪಕ್ಷದಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವದುರ್ಗದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಸರ್ಕಾರದಿಂದ 2 ಸಾವಿರ ಕೋಟಿ ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ. ಆದರೆ ಅಭಿವೃದ್ಧಿಯನ್ನು ಗಮನಿಸಿದಾಗ ಬಹುಪಾಲು ಹಣ ಬಳಕೆಯಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದರು.
ಮತದಾರರ ಮೇಲೆ ದೌರ್ಜನ್ಯ- ಆರೋಪ: ದೇವದುರ್ಗದ ಶಾಸಕ ಶಿವನಗೌಡ ನಾಯಕ ಅವರು ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಅನುದಾನ ಎಲ್ಲಿ ಮತ್ತು ಎಷ್ಟು ವೆಚ್ಚ ಮಾಡಲಾಗಿದೆ ಎಂಬುದನ್ನು ಮತದಾರರಿಗೆ ತಿಳಿಸುವ ಕಾರ್ಯ ತಾವು ಮಾಡುವುದಾಗಿ ಹೇಳಿದ ಅವರು, ಮತದಾರರ ಮೇಲೆ ಅನಗತ್ಯವಾಗಿ ದೌರ್ಜನ್ಯ ನಡೆಸುತ್ತಿರುವ ಶಾಸಕರು, ಸುಳ್ಳು ಪ್ರಕರಣ ದಾಖಲಿಸುವ ಕಾರ್ಯ ಮಾಡಿದ್ದಾರೆಂದು ಆರೋಪಿಸಿದರು.
ವಸತಿ ಸೇರಿದಂತೆ ವಿವಿಧ ಯೋಜನೆಗಳಡಿ ಅಕ್ರಮಗಳು ನಡೆದಿವೆ. ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ನೀಡಿಕೆ ಸೇರಿದಂತೆ ವಿವಿಧ ಸರ್ಕಾರದ ಕಾರ್ಯಕ್ರಮಗಳಡಿ ಮೃತ ಫಲಾನುಭವಿಗಳ ಹೆಸರಿನಲ್ಲೂ ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ದೂರಿದರು.
ಅನುದಾನ ಕೊಳ್ಳೆ: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ದೇವದುರ್ಗದ ಅಭಿವೃದ್ಧಿಗೆ ಕೋಟ್ಯಂತರ ರು. ಒದಗಿಸಿದ್ದಾರೆ. ಅಷ್ಟೇ ಅಲ್ಲ ಶಾಸಕ ಶಿವನಗೌಡ ನಾಯಕರನ್ನು ಸಚಿವರಾಗಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದರು. ಆದರೆ ಕ್ಷೇತ್ರದ ಅಭಿವೃದ್ಧಿ ಹೆಸರಿನಲ್ಲಿ ಅನುದಾನ ಕೊಳ್ಳೆ ಹೊಡೆಯಲಾಗಿದೆ ಎಂದು ಆರೋಪಿಸಿದರು.
ತಾವು ಸುರಪುರ ತಾಲೂಕಿನವರಾಗಿದ್ದು, ದೇವದುರ್ಗದಲ್ಲಿ ಅನೇಕ ತಮ್ಮ ಸಂಬಂಧಿಕರಿದ್ದಾರೆ. ಈ ಮೊದಲು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಪ್ರಸಕ್ತ ಚುನಾವಣೆಗೆ ಜೆಡಿಎಸ್ ಟಿಕೆಟ್ ನೀಡುವ ಭರವಸೆ ಕೊಟ್ಟಿದ್ದರು. ಆದರೆ ಈ ನಿಟ್ಟಿನಲ್ಲಿ ಅವರು ವಿಳಂಬ ಮಾಡುತ್ತಿರುವುದು ತಮಗೆ ಟಿಕೆಟ್ ದೊರೆಯುವ ಬಗ್ಗೆಯೇ ಅನುಮಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಜೆಪಿ ಸೇರಿದ್ದಾಗಿ ತಿಳಿಸಿದ ಅವರು, ದೇವದುರ್ಗದಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿದರು.
ಇನ್ನೆರಡು ಮತ್ತೊಂದು ಪಟ್ಟಿ: ಈ ಸಂದರ್ಭದಲ್ಲಿ ಮಾತನಾಡಿದ ಕೆಜೆಪಿ ಜಿಲ್ಲಾಧ್ಯಕ್ಷ ವೆಂಕನಗೌಡ ಮಲ್ಕಾಪುರ, ಜಿಲ್ಲೆಯಲ್ಲಿ ಸದ್ಯ ಐದು ವಿಧಾನಸಭೆ ಕ್ಷೇತ್ರಗಳ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಬಿಡುಗಡೆಗೊಳಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಇನ್ನುಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಿದ್ದಾರೆಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿರಾಜ್ ಮಸ್ಕಿ, ಯುವ ಘಟಕದ ಮುಖಂಡ ಶಿವಕುಮಾರ್ ಪೊಲೀಸ್ ಪಾಟೀಲ್ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

