ರಾಯಚೂರು

ವೇದಿಕೆ ಸಜ್ಜು

Published On :

ಕನ್ನಡಪ್ರಭ ವಾರ್ತೆ,ರಾಯಚೂರು,ಏ.10
ಟಿಕೆಟ್ ಹಂಚಿಕೆಯಲ್ಲಿನ ಅಸಮಾಧಾನದಿಂದ ಪಕ್ಷ ತೊರೆಯುವ ನಿರ್ಧಾರ ಮಾಡಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪಾಪಾರೆಡ್ಡಿ ಅವರ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ. ಈಗಾಗಲೇ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಏ.12ರಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಪಾಪಾರೆಡ್ಡಿ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ್ದು, ಮತ್ತೊಬ್ಬ ಮುಖಂಡ ತ್ರಿವಿಕ್ರಮ್ ಜೋಷಿ ಅವರಿಗೆ ಟಿಕೆಟ್ ನೀಡಿದ್ದು ರೆಡ್ಡಿ ಬಣದಲ್ಲಿ ತೀವ್ರ ಆಕ್ರೋಶಕ್ಕೆ ದಾರಿ ಮಾಡಿದೆ.
ಬೆಂಬಲಿಗರ ಸಭೆ: ಈಗಾಗಲೇ ಮಾಜಿ ಶಾಸಕ ಪಾಪಾರೆಡ್ಡಿ ಅವರು ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಅನೇಕ ಸಭೆಗಳನ್ನು ನಡೆಸಿದ್ದಾರೆ. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಹಿನ್ನೆಲೆ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿರುವುದಾಗಿ ಪ್ರಕಟಿಸಿದ್ದರು.
ಅದರಂತೆ ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ವೆಂಕಟೇಶ್ ನಾಯಕ ಅವರನ್ನು ಕಂಡು ಸಮಾಲೋಚನೆ ನಡೆಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಸಮ್ಮುಖದಲ್ಲಿ ಮಾತುಕತೆ ನಡೆದಿದೆ.
ಹಾಗೆಯೇ ನಗರದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಹಾಗೂ ಶಾಸಕ ಎನ್.ಎಸ್. ಬೋಸರಾಜು ಅವರೊಂದಿಗೂ ಮಾಜಿ ಶಾಸಕ ಪಾಪಾರೆಡ್ಡಿ ಪಕ್ಷ ಸೇರ್ಪಡೆ ಸೇರಿದಂತೆ ಚುನಾವಣೆ ಸಂಬಂಧಿ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಇಂದು ರಾಜಿನಾಮೆ: ಈ ಕುರಿತು 'ಕನ್ನಡಪ್ರಭ'ದೊಂದಿಗೆ ಬುಧವಾರ ಮಾತನಾಡಿದ ಮಾಜಿ ಶಾಸಕ ಪಾಪಾರೆಡ್ಡಿ ಅವರು, ಏ.11ರಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ಫ್ಯಾಕ್ಸ್ ಮೂಲಕ ಸಲ್ಲಿಸುವುದಾಗಿ ಹಾಗೂ ಏ.12ರಂದು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಅಧಿಕೃತವಾಗಿ ಘೋಷಿಸುವುದಾಗಿ ತಿಳಿಸಿದರು.
ಒಂದೆಡೆ ಚುನಾವಣೆಯ ದಿನ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯ ಪ್ರಮುಖ ನಾಯಕರೆಂದು ಕರೆಯಿಸಿಕೊಂಡಿದ್ದ ಮಾಜಿ ಶಾಸಕ ಪಾಪಾರೆಡ್ಡಿ ನಿರ್ಗಮನ ಆ ಪಕ್ಷಕ್ಕೆ ಸಂಕಷ್ಟ ತಂದಿದೆ. ಅಷ್ಟೇ ಅಲ್ಲ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ದುಡಿಯುವುದಾಗಿ ಪಾಪಾರೆಡ್ಡಿ ಅವರು ಘೋಷಿಸಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.
ಬಿಜೆಪಿಗೆ ಹಿನ್ನಡೆ?: ಈ ಮಧ್ಯೆ ಮಾಜಿ ಶಾಸಕ ಪಾಪಾರೆಡ್ಡಿ ಅವರು ಪಕ್ಷ ತೊರೆಯುವ ನಿರ್ಧಾರ ಕೈಗೊಂಡ ಬಗ್ಗೆ ಹೈಕಮಾಂಡ್ ಅಷ್ಟಾಗಿ ತೀಕ್ಷ್ಣವಾಗಿ ಪರಿಗಣಿಸಿದಂತೆ ಕಂಡುಬಂದಿಲ್ಲ. ಟಿಕೆಟ್ ಹಂಚಿಕೆಯಾದ ಮರುದಿನವೇ ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಅವರು ರೆಡ್ಡಿ ನಿವಾಸಕ್ಕೆ ತೆರಳಿ ಸಮಾಧಾನಪಡಿಸಲು ಯತ್ನಿಸಿದ್ದರು.
ಆ ವೇಳೆ ರೆಡ್ಡಿ ಬೆಂಬಲಿಗರು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಆನಂತರದಲ್ಲಿ ಬಿಜೆಪಿಯ ಯಾವೊಬ್ಬರೂ ಪಾಪಾರೆಡ್ಡಿ ಅವರ ಮನವೊಲಿಕೆ ಕಾರ್ಯಕ್ಕೆ ಮುಂದಾದಂತಿಲ್ಲ. ಹೀಗಾಗಿ ಅವರು ಪಕ್ಷ ತೊರೆಯುವುದು ಸ್ಪಷ್ಟವಾಗಿದೆ. ಅಷ್ಟೇ ಅಲ್ಲ ಅವರೊಂದಿಗೆ ವಿವಿಧ ಹುದ್ದೆಗಳಲ್ಲಿರುವ ಅವರ ಬೆಂಬಲಿಗರೂ ಪಕ್ಷ ತೊರೆಯಲಿರುವುದು ಬಿಜೆಪಿಗೆ ಹಿನ್ನಡೆಯುಂಟು ಮಾಡುವ ಸಾಧ್ಯತೆಯಿದೆ.

-ವಿಶೇಷ ವರದಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.