ನಗರ 'ಕೈ'ಗೆ ಬಂಡಾಯದ ಬಿಸಿ
ಕನ್ನಡಪ್ರಭ ವಾರ್ತೆ , ರಾಯಚೂರು , ಏ.13
ಟಿಕೆಟ್ ಹಂಚಿಕೆಯ ಅಸಮಾಧಾನ ಬಹುತೇಕ ಎಲ್ಲ ಪಕ್ಷಗಳಿಗೆ ಇದೀಗ ಸಂಕಷ್ಟ ತಂದಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚುರುಕುಗೊಂಡಿದೆ. ಸಾಮಾನ್ಯರಿಗೆ ಮೀಸಲಾಗಿರುವ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಅದರ ಬಂಡಾಯ ಅಭ್ಯರ್ಥಿ ಕಣಕ್ಕಿಳಿಯುವ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ.
ಇತ್ತೀಚೆಗೆ ನಡೆದ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿನ ಭರ್ಜರಿ ಗೆಲವಿನ ಹುಮ್ಮಸ್ಸಿನಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಗೊಂದಲ ಸೃಷ್ಟಿಯಾಗಿದೆ. ಜಿಪಂ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ನ ಪ್ರಮುಖ ನಾಯಕರಲ್ಲಿ ಒಬ್ಬರಾದ ಬಷೀರುದ್ದೀನ್ ಅವರು ನಗರ ವಿಧಾನಸಭೆ ಕ್ಷೇತ್ರಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಇರುಸುಮುರುಸು ಉಂಟು ಮಾಡಿದೆ.
ಹಾಲಿ ಶಾಸಕರಿಗೆ ಮಣೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಯಚೂರು ನಗರ, ರಾಯಚೂರು ಗ್ರಾಮೀಣ ಹಾಗೂ ಮಾನವಿಯಲ್ಲಿ ತನ್ನ ಶಾಸಕರನ್ನು ಹೊಂದಿತ್ತು. ಈ ಬಾರಿಯ ಚುನಾವಣೆಯಲ್ಲಿ ಈ ಕ್ಷೇತ್ರಗಳ ಪೈಕಿ ರಾಯಚೂರು ನಗರಕ್ಕೆ ಹಾಲಿ ಶಾಸಕ ಸೈಯದ್ ಯಾಸೀನ್ ಅವರನ್ನೇ ಕಣಕ್ಕಿಳಿಸಿದೆ.
ಇನ್ನುಳಿದಂತೆ ಮಾನವಿ ಮತ್ತು ರಾಯಚೂರು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬೇಕಿದ್ದು, ಬಹುತೇಕ ಅಲ್ಲಿಯೂ ಹಾಲಿ ಶಾಸಕರಿಗೆ ಮಣೆ ಹಾಕುವ ಸಾಧ್ಯತೆಯಿದೆ. ಮಾನವಿ ಮತ್ತು ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಗೆ ಯಾವುದೇ ರೀತಿಯ ಪೈಪೋಟಿಯಿಲ್ಲ.
ವರಿಷ್ಠರಿಗೆ ಬಷೀರುದ್ದೀನ್ ಸೆಡ್ಡು: ಆದರೆ ರಾಯಚೂರು ನಗರ ಕ್ಷೇತ್ರದಲ್ಲಿ ಕಳೆದ ಬಾರಿ ಸ್ಪರ್ಧಿಸಲು ಮುಂದಾಗಿದ್ದ ಜಿಪಂ ಮಾಜಿ ಸದಸ್ಯ ಬಷೀರುದ್ದೀನ್ ಪ್ರಸಕ್ತ ಬಾರಿ ಈಗಾಗಲೇ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವೇ ಕಣಕ್ಕಿಳಿಯುವ ನಿಟ್ಟಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಅವರು ಪಕ್ಷದ ವರಿಷ್ಠರಿಗೆ ಸೆಡ್ಡು ಹೊಡೆದಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆಯ ವೇಳೆ ಸ್ಪರ್ಧೆಗೆ ಮುಂದಾಗಿದ್ದ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರಾದ ಧರಂಸಿಂಗ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವುದಾಗಿ ಹೇಳಿ ಸ್ಪರ್ಧೆಯಿಂದ ದೂರ ಸರಿಸಿದ್ದರು. ಆದರೆ ಪ್ರಸಕ್ತ ಬಾರಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸೈಯದ್ ಯಾಸೀನ್ ವಿರುದ್ಧವೇ ಅವರು ಕಣಕ್ಕಿಳಿಯುವ ಮೂಲಕ ಪೈಪೋಟಿ ನೀಡಲು ಮುಂದಾಗಿದ್ದಾರೆ.
ನಾಮಪತ್ರ ಹಿಂಪಡೆಯುವುದಿಲ್ಲ: ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸೈಯದ್ ಯಾಸೀನ್ ಅವರು ಈ ಬೆಳವಣಿಗೆಯಿಂದ ವಿಚಲಿತರಾಗಿದ್ದರೂ ಪಕ್ಷದ ವರಿಷ್ಠರು ಬಷೀರುದ್ದೀನ್ ಅವರನ್ನು ಮನವೊಲಿಸಲಿದ್ದಾರೆಂದು ನಂಬಿದ್ದಾರೆ. ಆದರೆ ಈ ಕುರಿತು 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಬಷೀರುದ್ದೀನ್ ಅವರು, ಈಗಾಗಲೇ ತಾವು ನಾಮಪತ್ರ ಸಲ್ಲಿಸಿದ್ದು, ಯಾವುದೇ ಕಾರಣಕ್ಕೆ ಹಿಂಪಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದಿಂದ ಯಾರೇ ಮಾತುಕತೆಗೆ ಬಂದರೂ ಚರ್ಚೆಗೆ ಸಿದ್ಧ. ಆದರೆ ತಮ್ಮ ಸ್ಪರ್ಧೆಯ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಅಸಾಧ್ಯ ಎಂದಿದ್ದಾರೆ.
ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಣೆಯಿಂದ ಬಿಜೆಪಿಯ ಮಾಜಿ ಶಾಸಕ ಪಾಪಾರೆಡ್ಡಿ ಅವರು ಕಾಂಗ್ರೆಸ್ ಸೇರುವುದರೊಂದಿಗೆ ಆ ಪಕ್ಷಕ್ಕೆ ಬಲ ಬಂದಿತೆಂದುಕೊಂಡವರಿಗೆ ಈಗ ಬಷೀರುದ್ದೀನ್ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಿದ್ದಂತೂ ನಿಜ.
- ವಿಶೇಷ ವರದಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

