'ಕೈ'ಗೆ ಬಹುಮತ ಖಚಿತ
ಕ.ಪ್ರ. ವಾರ್ತೆ, ರಾಯಚೂರು, ಏ.14
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸಮರ್ಪಕ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವುದು ನಿಶ್ಚಿತ ಎಂದು ಎಐಸಿಸಿ ವೀಕ್ಷಕ ಹಾಗೂ ಎಂಎಲ್ಸಿ ರುದ್ರರಾಜ್ ಪದ್ಮರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಲಿದೆ. ಆಡಳಿತ ನಿರ್ವಹಣೆಯಲ್ಲಿ ಬಿಜೆಪಿಗೆ ಅನುಭವದ ಕೊರತೆಯಿರುವುದು ಸಾಬೀತಾಗಿದೆ. ಅಷ್ಟೇ ಅಲ್ಲ ಜನತೆಯ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವಲ್ಲಿ ಸೋತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ನಿಂದ ಮಾತ್ರ ಸುಭದ್ರ ಸರ್ಕಾರ: ಕಾಂಗ್ರೆಸ್ ಪಕ್ಷದಿಂದ ಮಾತ್ರ ಸುಭದ್ರ ಸರ್ಕಾರ ನೀಡಲು ಸಾಧ್ಯ. ಜನತೆಗೆ ಸಮರ್ಪಕ ಆಡಳಿತವೂ ಕಾಂಗ್ರೆಸ್ನಿಂದ ಮಾತ್ರ ದೊರೆಯುತ್ತದೆ ಎಂಬುದು ಸಾಬೀತಾಗಿದೆ ಎಂದ ಅವರು, ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳೂ ಸೇರಿದಂತೆ ರಾಯಚೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಎಲ್ಲ ಕಡೆ ಗೆಲವು ಕಾಣಲಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ಪಕ್ಷದ ಗೆಲವಿಗೆ ಎಲ್ಲರೂ ಒಗ್ಗೂಡಿ ಶ್ರಮಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ ಕಾಂಗ್ರೆಸ್ ಕಾರ್ಯಕರ್ತರ ಮನವೊಲಿಕೆ ಮಾಡಲಾಗುತ್ತದೆ. ಅವರು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧದ ನಾಮಪತ್ರ ಹಿಂಪಡೆಯದಿದ್ದಲ್ಲಿ ಅಂಥವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು.
ಸಿಎಂ- ಹೈಕಮಾಂಡ್ ಅಂತಿಮ ನಿರ್ಧಾರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದಲ್ಲಿ ನಿರ್ಧರಿಸಲಾಗುತ್ತದೆ. ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾನವಿ ಶಾಸಕ ಹಂಪಯ್ಯ ನಾಯಕ ಸೇರಿದಂತೆ ಅನೇಕರಿದ್ದರು.
ಸಮಿತಿಗೆ ನೇಮಕ
ರಾಯಚೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಚುನಾವಣೆ ಪ್ರಚಾರ ಸಮಿತಿಯ ಸದಸ್ಯರಾಗಿ ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ವೆಂಕಣ್ಣ ಯಾದವ್ ನೇಮಕಗೊಂಡಿದ್ದಾರೆ.
ಈ ಕುರಿತು ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಅವರು ಆದೇಶ ಹೊರಡಿಸಿದ್ದು, ಭ್ರಷ್ಟ ಹಾಗೂ ಕೋಮುವಾದಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷಕ್ಕೆ ಗೆಲವು ತಂದುಕೊಡುವಲ್ಲಿ ಶ್ರಮಿಸುವಂತೆ ಕೋರಿರುವ ಅವರು, ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಅವರ ಒಪ್ಪಿಗೆ ಮೇರೆಗೆ ಈ ನೇಮಕಾತಿ ಮಾಡಿರುವುದಾಗಿ ತಿಳಿಸಿದ್ದಾರೆ.
ಕಾರ್ಯಕರ್ತರಲ್ಲಿ ಹರ್ಷ
ಮುದಗಲ್: ಲಿಂಗಸ್ಗೂರು ವಿಧಾನಸಭೆ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಿ ಫಾರಂಅನ್ನು ಡಿ.ಎಸ್. ಹೂಲಗೇರಿ ಅವರಿಗೆ ನೀಡಿದ್ದಕ್ಕೆ ಸ್ಥಳೀಯ ಮತ್ತು ಸುತ್ತಮುತ್ತಲಿನ ಗ್ರಾಮಗಳ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈ ಮೊದಲು ಜಿಪಂ ಮಾಜಿ ಉಪಾಧ್ಯಕ್ಷ ಪಾಮಯ್ಯ ಮುರಾರಿ ಅವರಿಗೆ ಟಿಕೆಟ್ ನೀಡು ವುದಾಗಿ ಮೊದಲ ಪಟ್ಟಿಯಲ್ಲಿ ಪ್ರಕಟಿಸಿತ್ತು. ಇದರಿಂದ ಹಲವು ಮುಖಂಡರು, ಕಾರ್ಯಕರ್ತರಿಗೆ ಅಸಮಾಧಾನ ಉಂಟು ಮಾಡಿತ್ತು. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ, ಗ್ರಾಪಂ, ತಾಪಂ, ಜಿಪಂ, ಪಪಂ, ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಕಾರಣರಾಗಿದ್ದ ಹೂಲಗೇರಿ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದರು. ಅಲ್ಲದೆ ಹೂಲಗೇರಿ ಅವರಿಗೆ ಬಂಡಾಯ ಅಭ್ಯಾರ್ಥಿಯಾಗಿ ಸ್ಪರ್ಧೆಗೆ ಇಳಿಯುವಂತೆ ಒತ್ತಡ ಹೇರಲಾಗಿತ್ತು.
ಹೂಲಗೇರಿಯವರೇ ಅಭ್ಯರ್ಥಿಯಾಗಲು ಸೂಕ್ತ ಎಂದು ಬಿ ಫಾರಂ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

