ರಾಯಚೂರು

ಭರಾಟೆ ಮುಂದುವರಿಕೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಏ.16
ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ನಾಮಪತ್ರಗಳ ಸಲ್ಲಿಕೆಯ ಗಡುವು ಸಮೀಪಿಸುತ್ತಿದ್ದಂತೆಯೇ ಚುನಾವಣೆಯ ಭರಾಟೆ ಹೆಚ್ಚಿದ್ದು, ಮಂಗಳವಾರ ನಗರದ ಸೇರಿದಂತೆ ಜಿಲ್ಲಾದ್ಯಂತ 22 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಗರದಲ್ಲಿ ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಯಾಸೀನ್ ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಂತರ ಜೆಡಿಯು ಅಭ್ಯರ್ಥಿ ನೂರ್ ಮಹಮದ್, ಸಿಪಿಎಂ ಅಭ್ಯರ್ಥಿ ನೂರ್ ಜಹಾನ್ ಸೇರಿದಂತೆ ಒಟ್ಟು 12 ನಾಮಪತ್ರಗಳು ನಗರ ಕ್ಷೇತ್ರದಲ್ಲಿ ಸಲ್ಲಿಕೆಯಾಗಿವೆ.
ರಾಯಚೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತಿಪ್ಪರಾಜು ಅವರು ನಗರದ ಆರ್ಟಿಒ ವೃತ್ತದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಮುಖ್ಯ ರಸ್ತೆಯಲ್ಲಿ ಬೃಹತ್ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ತಲುಪಿ ಅಲ್ಲಿ ಚುನಾವಣಾಧಿಕಾರಿ ಎಂ.ಡಿ. ಯುಸೂಫ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ: ಈ ವೇಳೆ ಮೆರವಣಿಗೆಯ ಮಾರ್ಗದುದ್ದಕ್ಕೂ ಕಾರ್ಯಕರ್ತರ ಸಂಭ್ರಮ ಕಂಡುಬಂದಿತು. ಕಲಾ ತಂಡಗಳು, ವಿವಿಧ ವೇಷಭೂಷಣ ತೊಟ್ಟಿದ್ದ ಬೆಂಬಲಿಗರು ಪಾಲ್ಗೊಂಡಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದ ರಾಯಚೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತಿಪ್ಪರಾಜು ಹಾಗೂ ಅವರ ರಾಜಕೀಯ ಗುರು ದೇವದುರ್ಗದ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ, ರಾಯಚೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮೆರವಣಿಗೆಯಲ್ಲಿದ್ದರು.
ಒಟ್ಟು 22 ನಾಮಪತ್ರ ಸಲ್ಲಿಕೆ: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದ್ದು, ರಾಯಚೂರು ನಗರ ಕ್ಷೇತ್ರಕ್ಕೆ- 12, ರಾಯಚೂರು ಗ್ರಾಮೀಣ- 3, ಮಾನವಿ- 1, ಲಿಂಗಸ್ಗೂರು-2, ಸಿಂಧನೂರು-2 ಮತ್ತು ಮಸ್ಕಿ ಕ್ಷೇತ್ರಕ್ಕೆ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು ದೇವದುರ್ಗದಲ್ಲಿ ಮಂಗಳವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ವಿಭಾಗವು ತಿಳಿಸಿದೆ.
ಸಂಚಾರ ಅಸ್ತವ್ಯಸ್ತ: ನಗರದಲ್ಲಿ ಮಂಗಳವಾರ ಬಿಜೆಪಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ತಿಪ್ಪರಾಜು ನಾಮಪತ್ರ ಸಲ್ಲಿಕೆಗೆ ಮುನ್ನ ಆಯೋಜಿಸಿದ್ದ ಬೃಹತ್ ಮೆರವಣಿಗೆಯು ನಗರದಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳಲು ದಾರಿಯಾಗಿ ವಾಹನಗಳ ಸವಾರರು ಹಿಡಿಶಾಪ ಹಾಕುತ್ತಲೇ ಸಾಗುವಂತಾಯಿತು.
ನಗರದ ಆರ್ಟಿಒ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ನಗರದ ಬಿಆರ್ಬಿ ವೃತ್ತ, ಹನುಮಾನ್ ಚಿತ್ರಮಂದಿರ, ಶೆಟ್ಟಿಭಾವಿ ಚೌಕ್ ಮೂಲಕ ಮುಖ್ಯ ರಸ್ತೆಯಲ್ಲಿ ಸಾಗಿದ್ದರಿಂದ ಪ್ರಮುಖ ಮಾರುಕಟ್ಟೆ ಸೇರಿದಂತೆ ನಗರದ ಬಹುತೇಕ ಕಡೆ ವಾಹನಗಳ ಸಂಚಾರಕ್ಕೆ ಭಾರೀ ಅಡಚಣೆಯಾಯಿತು.
ನಾಗರಿಕರಿಗೆ ಬೇಸರ: ವಿವಿಧ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದ ನಾಗರಿಕರು ಮೆರವಣಿಗೆಯಿಂದಾದ ವಿಳಂಬದಿಂದ ಬೇಸತ್ತು ಆಡಳಿತ ಮೆರವಣಿಗೆಗೆ ನಗರದ ಮುಖ್ಯ ರಸ್ತೆಯಲ್ಲಿ ತೆರಳಲು ಅವಕಾಶ ಮಾಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದು ಕಂಡುಬಂದಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.