ಚುನಾವಣೆ ಪ್ರಚಾರಕ್ಕೆ ಪಕ್ಷಗಳಲ್ಲಿ ಸಂಚಲನ
ವಿಶೇಷ ವರದಿ
ಕನ್ನಡಪ್ರಭ ವಾರ್ತೆ ರಾಯಚೂರು ಏ.22
ಜಿಲ್ಲೆಯಲ್ಲಿ ವಿಧಾನಸಭೆ ಚುನಾಣೆಯಲ್ಲಿ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ಪ್ರಮುಖರು ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲು ಧಾವಿಸುವ ಮೂಲಕ ರಾಜಕೀಯ ಚುರುಕುಗೊಳ್ಳುತ್ತಿದೆ. ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗುತ್ತಿವೆ.
ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಮೇ 5ರಂದು ನಡೆಯುವ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಾಯಕರನ್ನು ಕರೆಯಿಸುವ ಕಾರ್ಯದಲ್ಲಿ ತೊಡಗಿವೆ. ಈಗಾಗಲೇ ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಜಿಲ್ಲೆಯಲ್ಲಿ ಎರಡು ಬಾರಿ ಚುನಾವಣೆ ಪ್ರಚಾರ ಸಭೆಗಳನ್ನು ನಡೆಸುವ ಮೂಲಕ ಇನ್ನುಳಿದ ಪಕ್ಷಗಳಿಗೆ ಸವಾಲು ಹಾಕಿದ್ದಾರೆ.
ಬಿಗಿ ಭದ್ರತೆ: ಸದ್ಯ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯವರೂ ತಾವೇನೂ ಕಮ್ಮಿಯಿಲ್ಲ ಎಂಬಂತೆ ಪ್ರಚಾರದ ಅಖಾಡಕ್ಕೆ ಧುಮುಕುತ್ತಿದ್ದಾರೆ. ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಸಿಂಧನೂರಿನಲ್ಲಿ ಏ.23ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಕಾಂಗ್ರೆಸ್ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಈಗಾಗಲೇ ಸಿಂಧನೂರಿನಲ್ಲಿ ರಾಹುಲ್ ಗಾಂಧಿ ಅವರ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಅಗತ್ಯ ಸಿದ್ಧತೆ ನಡೆಸಿದ್ದಾರೆ.
ಅಷ್ಟೇ ಅಲ್ಲ ರಾಹುಲ್ ಗಾಂಧಿ ಅವರಿಗೆ ಭಾರಿ ಬಿಗಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ವಿಶೇಷ ಪಡೆಯನ್ನು ಸಿಂಧನೂರಿನಲ್ಲಿ ನಿಯೋಜಿಸಲಾಗಿದೆ. ರಾಹುಲ್ ಗಾಂಧಿ ಅವರ ಆಗಮನ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಹುಮ್ಮಸ್ಸು ಇಮ್ಮಡಿಗೊಳಿಸಿದೆ.
ನಾಯಕರ ದಂಡು: ಈ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಏ.23ರಂದು ಜಿಲ್ಲೆಯ ವಿವಿಧೆಡೆ ಚುನಾವಣೆ ಪ್ರಚಾರ ಸಭೆಗಳನ್ನು ನಡೆಸಲಿದ್ದಾರೆ. ಜೆಡಿಎಸ್ ಟಿಕೆಟ್ ಹಂಚಿಕೆಯಲ್ಲಿ ಉಂಟಾಗಿದ್ದ ಗೊಂದಲ, ಅಸಮಾಧಾನ ತೊಲಗಿಸುವಲ್ಲಿ ಕುಮಾರಸ್ವಾಮಿ ಅವರ ಭೇಟಿ ನೆರವಾಗಲಿದೆ ಎಂಬ ವಿಶ್ವಾಸ ಪಕ್ಷದಲ್ಲಿ ವ್ಯಕ್ತವಾಗಿದೆ. ಜೆಡಿಎಸ್ ಅಭ್ಯರ್ಥಿಗಳ ಪರ ಅವರು ಲಿಂಗಸ್ಗೂರು ಮತ್ತು ರಾಯಚೂರಿನಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ಹೇಳಿವೆ.
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ನಾಯಕ ಅನಂತಕುಮಾರ್ ಅವರೂ ಏ.23ರಂದೇ ನಗರಕ್ಕೆ ಸಂಜೆ ಆಗಮಿಸಿ ರಾಯಚೂರು ನಗರ ಬಿಜೆಪಿ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ ಹಾಗೂ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಒಂದೆಡೆ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದಂತೆಯೇ ಜಿಲ್ಲೆಯಲ್ಲಿ ರಾಜಕೀಯ ಕಣ ರಂಗೇರುತ್ತಿದೆ. ಸ್ಟಾರ್ ಕ್ಯಾಂಪೇನರ್ಗಳ ಆಗಮನ ಅಭ್ಯರ್ಥಿಗಳಲ್ಲಿ ಹೋರಾಟದ ಸ್ಫೂರ್ತಿ ಹೆಚ್ಚಿಸಲಿದೆ. ಜತೆಗೆ ಕಣದಲ್ಲಿ ಜಿದ್ದಾಜಿದ್ದಿಗೂ ಕಾರಣವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

