ಸಿಂಧನೂರಿಗೆ ಇಂದು ರಾಹುಲ್
ಸಿಂಧನೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರಾಹುಲ್ ಗಾಂಧಿ ಏ. 23ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ವಿ. ಹನುಮಂತರಾವ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಚುನಾವಣಾ ಪ್ರಚಾರಾರ್ಥ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದು ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಸರ್ಕಾರಿ ಪಪೂ ಕಾಲೇಜಿನ ಬೃಹತ್ ಮೈದಾನದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ರಾಹುಲ್ ಗಾಂಧಿ ಅವರೊಂದಿಗೆ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ರಾಜ್ಯಾಧ್ಯಕ್ಷ ಜಿ.ಪರಮೇಶ್ವರ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಮದುಸೂಧನ್ ಮಿಸ್ತ್ರಿ, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಗಟ್ಟಿ ಮತ್ತಿತರ ಮುಖಂಡರು ಆಗಮಿಸುವರು. ಇದಲ್ಲದೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಪಾಲ್ಗೊಳ್ಳುವರು. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ವಿನಂತಿಸಿದ್ದಾರೆ. ಈ ವೇಳೆ ರಾಜ್ಯಸಭಾ ಸದಸ್ಯ ಹಾಗೂ ರಾಯಚೂರು ಜಿಲ್ಲಾ ವೀಕ್ಷಕ ಆನಂದ ಭಾಸ್ಕರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್. ಬೋಸರಾಜ, ಮಾಜಿ ಶಾಸಕ ಹಂಪನಗೌಡ ಬಾದಲರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಸಂತಕುಮಾರ ಮತ್ತಿತರರು ಇದ್ದರು.
ಇಂದು ನಗರಕ್ಕೆ ಅನಂತಕುಮಾರ್
ರಾಯಚೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಂತಕುಮಾರ್ ಅವರು ಏ.23 ರಂದು ಬಿಜೆಪಿ ಅಭ್ಯರ್ಥಿಗಳ ಚುನಾವಣೆ ಪ್ರಚಾರ ಸಭೆ ನಡೆಸಲಿದ್ದಾರೆ. ಅಂದು ಸಂಜೆ 5.30ಕ್ಕೆ ನಗರಕ್ಕೆ ಬಿಜಾಪುರದಿಂದ ಆಗಮಿಸುವ ಅವರು, ನಗರದ ಮಹಿಳಾ ಸಮಾಜದಲ್ಲಿ ನಡೆಯುವ ಬಿಜೆಪಿ ನಗರ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ ಪರ ಚುನಾವಣೆ ಪ್ರಚಾರ ಸಭೆ ನಡೆಸಲಿದ್ದಾರೆ. ನಂತರ ಅವರು ಬೆಂಗಳೂರಿಗೆ ತೆರಳಲಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.
ಅಭ್ಯರ್ಥಿಗಳ ಸಭೆ ಯಶಸ್ವಿ
ರಾಯಚೂರು: ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಪಾಲನೆ ಕುರಿತು ಇತ್ತೀಚೆಗೆ ಎಲ್ಲ ಪಕ್ಷಗಳ ಸಭೆ ಕರೆಯಲಾಗಿತ್ತು. ರಾಯಚೂರು ನಗರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಪಾಲನೆ ಹಾಗೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಸಭೆಯಲ್ಲಿ ಮತದಾರರು ಮತ ಚೀಟಿ ಪಡೆಯುವ ಬಗ್ಗೆ ಹಾಗೂ ಚುನಾವಣಾ ವೆಚ್ಚ ವರದಿ ತಯಾರಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಚುನಾವಣಾ ವೀಕ್ಷಕ ದೇವಶಿಶ್ ಬ್ಯಾನರ್ಜಿ, ಸಹಾಯಕ ವೀಕ್ಷಕ(ವೆಚ್ಚ) ಎನ್. ಜಗದೀಶ ಹಾಗೂ ವಿವಿಧ ಪಕ್ಷಗಳ ಅಭ್ಯರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

