ರಾಯಚೂರು

ನೀರಾವರಿಗೆ 10 ಸಾವಿರ ಕೋಟಿ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಏ.23
ಯುವಕರಿಗೆ ಉದ್ಯೋಗವಕಾಶ, 10 ಸಾವಿರ ಕೋಟಿ ವೆಚ್ಚದಲ್ಲಿ ರೈತರಿಗೆ ನೀರಾವರಿ ಯೋಜನೆಗಳ ಪ್ರಯೋಜನ ದೊರೆಯುವಂತೆ ಮಾಡುವುದು ಕಾಂಗ್ರೆಸ್ ಮುಂದಿನ ಗುರಿ. ಸಮಗ್ರ ಅಭಿವೃದ್ಧಿಯ ಮೂಲಕ ಕರ್ನಾಟಕವನ್ನು ಪುನಾ ಜಾಗತಿಕ ಮಟ್ಟದಲ್ಲಿ ಕಂಗೊಳಿಸುವಂತೆ ಕಾಂಗ್ರೆಸ್ ಮಾಡಲಿದೆ ಎಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ಸಿಂಧನೂರಿನಲ್ಲಿ ಮಂಗಳವಾರ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಕಾಂಗ್ರೆಸ್ ಅಭ್ಯರ್ಥಿಗಳ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, 'ಕರ್ನಾಟಕವು ಹಿಂದೊಮ್ಮೆ ಇಲ್ಲಿನ ಉದ್ಯೋಗವಕಾಶಗಳಿಗೆ ಹೆಸರುವಾಸಿಯಾಗಿತ್ತು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ದುರಾಡಳಿತ ಮತ್ತು ಲೂಟಿಕೋರತನದಿಂದಾಗಿ ರಾಜ್ಯ ಭಾರೀ ನಷ್ಟ ಅನುಭವಿಸಿದೆ' ಎಂದು ಆರೋಪಿಸಿದರು.
ಬೆಂಗಳೂರಿಗೆ ವಿಶ್ವದರ್ಜೆಯ ಸ್ಥಾನಮಾನವಿತ್ತು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಮಾನ ಹರಾಜಾಗಿದೆ. ಉದ್ಯೋಗವಕಾಶಗಳಿಲ್ಲದೇ ಯುವಕರು ನಿರುದ್ಯೋಗಿಗಳಾಗಿದ್ದಾರೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಿ ವಿದೇಶಕ್ಕೆ ರಫ್ತು ಮಾಡುವ ಮೂಲಕ ಸ್ಥಳೀಯರನ್ನು ಉದ್ಯೋಗವಕಾಶದಿಂದ ವಂಚಿತರಾಗಿಸಲಾಗಿದೆ ಎಂದು ಟೀಕಿಸಿದರು.
ಬಿಜೆಪಿ ವಿರುದ್ಧ ವಾಗ್ದಾಳಿ: ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ, 'ಬಿಜೆಪಿ ತಾನೇ ನೀಡಿದ ನಿರಂತರ ವಿದ್ಯುತ್, ಸಮರ್ಪಕ ಕುಡಿಯುವ ನೀರು ಪೂರೈಕೆಯಂಥ ಭರವಸೆಗಳನ್ನು ಈಡೇರಿಸದೇ ಜನತೆಯನ್ನು ವಂಚಿಸಿದೆ. ಆದರೆ ಕಾಂಗ್ರೆಸ್ ತಾನು ನೀಡಿದ ವಾಗ್ದಾನದಂತೆ 371ನೇ ಕಲಂ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದೆ' ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕೃಷ್ಣಾ ಬಿ ಸ್ಕೀಂ ಅಡಿ ರಾಜ್ಯಕ್ಕೆ ಲಭ್ಯವಾಗಿರುವ ನೀರಿನ ಪೂರ್ಣ ಪ್ರಮಾಣದ ಬಳಕೆಗೆ ಅಗತ್ಯ ನೀರಾವರಿ ಯೋಜನೆಗಳ ಜಾರಿಗೆ 10 ಸಾವಿರ ಕೋಟಿ ನಿಗದಿ ಮಾಡುವುದಾಗಿ ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಬಿಜೆಪಿಯದ್ದು ಬೂಟಾಟಿಕೆ: ಬಿಜೆಪಿಯ ಹಿರಿಯ ನಾಯಕರು ಭ್ರಷ್ಟಾಚಾರ ವಿರೋಧಿಗಳೆಂದು ಬಿಂಬಿಸಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ ನೈಸರ್ಗಿಕ ಸಂಪತ್ತು ಲೂಟಿ ಮಾಡಿದ ಬಗ್ಗೆ ಮತ್ತು ವಿವಿಧ ಯೋಜನೆಗಳ ಅಡಿ ಅಕ್ರಮ ಎಸಗಿದ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕಿದೆ. ಅಭಿವೃದ್ಧಿ ವಿರೋಧಿ ಬಿಜೆಪಿಗೆ ರಾಜ್ಯದಲ್ಲಿ ಸೋಲಾಗಲಿದೆ. ಕಾಂಗ್ರೆಸ್ ಅಭಿವೃದ್ಧಿ ಪರ ಚಿಂತನೆಗೆ ಮತದಾರರು ಬೆಂಬಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಸೇರಿದಂತೆ ಕಾಂಗ್ರೆಸ್ ಅಭ್ಯರ್ಥಿಗಳು ಇದ್ದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಪರವಾಗಿ ಯುವನಾಯಕ ರಾಹುಲ್ ಗಾಂಧಿ ಅವರನ್ನು ಸನ್ಮಾನಿಸಲಾಯಿತು.
ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.