ನಗರ ಕ್ಷೇತ್ರದಲ್ಲಿ ಎಸ್ಯುಸಿಐಸಿ ಪ್ರಚಾರ
ರಾಯಚೂರು: ನಗರ ವಿಧಾನಸಭೆ ಕ್ಷೇತ್ರದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಅಪರ್ಣಾ ಬಿ.ಆರ್. ಅವರು ಇತ್ತೀಚೆಗೆ ನಗರ ಕ್ಷೇತ್ರದ ವ್ಯಾಪ್ತಿಯ ಬೀಜನಗೇರಾ, ಸಿದ್ರಾಂಪುರ ಮತ್ತಿತರ ಗ್ರಾಮಗಳಲ್ಲಿ ಜೀಪ್ ಜಾಥಾ ನಡೆಸಿ ಮತ ಯಾಚಿಸಿದರು. ಪಕ್ಷದ ಜಿಲ್ಲಾ ಸಮಿತಿ ಸದಸ್ಯರು ಪ್ರಚಾರ ಕೈಗೊಂಡು ಇದುವರೆಗೆ ಅಧಿಕಾರ ನಡೆಸಿದ ಎಲ್ಲ ಪಕ್ಷಗಳ ನಾಯಕರು ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ. ಜನರು ಎದುರಿಸುತ್ತಿರುವ ಸಮಸ್ಯೆಗಳ ಪರಿಹರಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳವರನ್ನು ಸೋಲಿಸುವಂತೆ ಮನವಿ ಮಾಡಿದರು. ಬೆಲೆಯೇರಿಕೆ, ನಿರುದ್ಯೋಗ ಸಮಸ್ಯೆ, ಕೃಷಿಕರಿಗೆ ಸಮರ್ಪಕ ಬೆಂಬಲ ಬೆಲೆ ದೊರೆಯದಿರುವುದು, ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ದೊರೆಯುತ್ತಿಲ್ಲ. ಇಂಥ ಸಮಸ್ಯೆಗಳ ಪರಿಹಾರಕ್ಕೆ ಇದುವರೆಗೆ ಆಯ್ಕೆಯಾದವರು ಕ್ರಮ ಕೈಗೊಂಡಿಲ್ಲ ಎಂದು ಅಭ್ಯರ್ಥಿ ಅಪರ್ಣಾ ಅವರು ಆರೋಪಿಸಿದರು. ಅಧಿಕಾರದಲ್ಲಿದ್ದಾಗ ಅಭಿ ವೃದ್ಧಿ ಕಾರ್ಯ ಹಾಗೂ ಜನರ ಆಶೋತ್ತರಗಳಿಗೆ ಸ್ಪಂದಿಸದ ನಾಯಕರು ಈ ಬಾರಿಯ ಚುನಾವಣೆಯಲ್ಲಿ ಚಿತ್ರ ತಾರೆಯರ ಮೂಲಕ ಪ್ರಚಾರ ಮಾಡಿ ಮತ ಯಾಚಿಸುತ್ತಿದ್ದಾರೆ. ಇಂಥ ಎಲ್ಲ ಜನ ವಿರೋಧಿಗಳನ್ನು ಪ್ರಸಕ್ತ ಚುನಾವಣೆಯಲ್ಲಿ ಸೋಲಿಸುವಂತೆ ಮನವಿ ಮಾಡಿದರು. ಪಕ್ಷದ ಪ್ರಮುಖರಾದ ಡಾ. ಸುನೀತ್ಕುಮಾರ್, ವೀರೇಶ್ ಎನ್.ಎಸ್., ಶರಣಪ್ಪ ಉದ್ಬಾಳ್, ಚನ್ನಬಸವ ಜಾನೇಕಲ್, ಮಹೇಶ್ ಚೀಕಲಪರ್ವಿ ಮತ್ತಿತರರು ಇದ್ದರು.
ಅಕ್ರಮ ಮದ್ಯ;
ಒಬ್ಬನ ಬಂಧನ
ರಾಯಚೂರು: ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿನ ತನ್ನ ಪಾನ್ ಶಾಪ್ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ವಿವಿಧ ಕಂಪನಿಗಳ 1,581 ಬೆಲೆಯ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ
ಸಂಗ್ರಹ; ಸೆರೆ
ರಾಯಚೂರು: ಸಿಂಧನೂರು ತಾಲೂಕಿನ ಅತ್ತನೂರು ಗ್ರಾಮದಲ್ಲಿ ಅಕ್ರಮ ಮದ್ಯ ಸಂಗ್ರಹಣೆ ಮೇಲೆ ದಾಳಿ ಮಾಡಿದ ಅಬಕಾರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಪಾಂಡುರಂಗ ಎಂದು ಗುರುತಿಸಲಾಗಿದೆ. ಈತ ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿರುವ ಬಗ್ಗೆ ಮಾಹಿತಿ ಪಡೆದು ದಾಳಿ ಮಾಡಿದ ಅಬಕಾರಿ ದಳದವರು ಆರೋಪಿಯನ್ನು ಬಂಧಿಸಿ ಅವನಿಂದ 6,352 ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಈ ಕುರಿತು ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

