ರಾಯಚೂರು

ಕೈ' ನಾಯಕರಿಂದ ರಾಜ್ಯಕ್ಕೆ ಕಳಂಕ

Published On :

ಕನ್ನಡಪ್ರಭ ವಾರ್ತೆ   ರಾಯಚೂರು   ಏ.26
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕದ ಚುನಾವಣೆಯ ಪ್ರಚಾರದ ವೇಳೆ ರಾಜ್ಯಕ್ಕೆ ಕಳಂಕ ತರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆಂದು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ರಾಜ್ಯ ಕಳೆದ 50 ವರ್ಷಗಳಲ್ಲಿ ಕಾಣದಂಥ ಅಭಿವೃದ್ಧಿಯನ್ನು ಬಿಜೆಪಿ ಅಧಿಕಾರದಲ್ಲಿ ಕಂಡಿದೆ ಎಂದು ಹೇಳಿದರು.
ನಗರದ ಮಹಿಳಾ ಸಮಾಜದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ನಗರ ಕ್ಷೇತ್ರದ ಅಭ್ಯರ್ಥಿ ತ್ರಿವಿಕ್ರಮ್ ಜೋಶಿ ಪರ ಪ್ರಚಾರ ಭಾಷಣ ಮಾಡಿ, ರಾಜ್ಯದಲ್ಲಿ ಬಿಜೆಪಿ ಚುನಾವಣೆಗೂ ಮುನ್ನವೇ ಸಿಎಂ ಶೆಟ್ಟರ್ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಪ್ರಕಟಿಸಿದೆ. ಆದರೆ ಕಾಂಗ್ರೆಸ್ ಹಾಗೆ ಹೆಸರು ಪ್ರಕಟಿಸುವ ಧೈರ್ಯ ಮಾಡಿಲ್ಲ ಎಂದು ಲೇವಡಿ ಮಾಡಿದರು.
10 ಲಕ್ಷ ಕೋಟಿ ಅಕ್ರಮದಲ್ಲಿ ಕೇಂದ್ರ ಸರ್ಕಾರ: ಕಾಂಗ್ರೆಸ್‌ನಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಳೆದ 9 ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ 10 ಲಕ್ಷ ಕೋಟಿ ಅಕ್ರಮಗಳಲ್ಲಿ ಭಾಗಿಯಾಗಿದೆ. ಆದರೆ ಚುನಾವಣೆಯ ಹಿನ್ನೆಲೆಯಲ್ಲಿ ಹೈ.ಕ. ಭಾಗಕ್ಕೆ 371ನೇ ಕಲಂ ಜಾರಿಗೆ ತರುವ ಕಾರ್ಯ ತಮ್ಮಿಂದಾಗಿದೆ ಎಂದು ಕಾಂಗ್ರೆಸ್ ನಾಯಕರು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರ ನಿರಂತರ ಒತ್ತಾಯದ ಹೇರದಿದ್ದಲ್ಲಿ ವಿಶೇಷ ಸ್ಥಾನಮಾನ ನೀಡಿಕೆ ಸಾಧ್ಯವಾಗಿರುತ್ತಿರಲಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಹಾಗೂ ಇನ್ನಿತರರಿಗೆ ಮುಂದಿನ ಸಿಎಂ ಯಾರಾಗುತ್ತಾರೆಂಬುದು ಗೊತ್ತಿಲ್ಲ. ಅವರಿಗೆ ಕಾಂಗ್ರೆಸ್ ಸಿಎಂ ಹುದ್ದೆ ಕರುಣಿಸುತ್ತದೆ ಎಂಬ ನಂಬಿಕೆ ಉಳಿದಿಲ್ಲ. ಆದರೆ ಬಿಜೆಪಿಯಲ್ಲಿ ಅಂಥ ಅವ್ಯವಸ್ಥೆಯಿಲ್ಲ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ವಿಫಲ: ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಾಧ್ಯವಾದಂಥ ಅಭಿವೃದ್ಧಿ ಕಾರ್ಯಗಳು ಸದ್ಯದ ಕೇಂದ್ರ ಸರ್ಕಾರದ ಕಳೆದ 9 ವರ್ಷದ ಅವಧಿಯಲ್ಲಿ ಹೇಳಿಕೊಳ್ಳುವಂಥ ಅಭಿವೃದ್ಧಿ ಸಾಧ್ಯವಾಗಿಲ್ಲ. ರಸ್ತೆ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಎಲ್ಲ ಹಂತದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಯಾಸೀನ್ ಸ್ಥಳೀಯರಲ್ಲ. ಅವರು ಬೆಂಗಳೂರಿನಲ್ಲಿ ವಾಸವಾಗಿದ್ದು, ಆಗೊಮ್ಮೆ ಈಗೊಮ್ಮೆ ನಗರಕ್ಕೆ ಬಂದು ಹೋಗುತ್ತಾರೆ. ಅಂಥವರಿಂದ ಜನತೆಗೆ ಪ್ರಯೋಜನವಿಲ್ಲ. ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿದರು.
ರೋಡ್ ಶೋ: ಇದಕ್ಕೂ ಮುನ್ನ ನಗರದ ಎಪಿಎಂಸಿ ಗಂಜ್ ಸರ್ಕಲ್ ನಿಂದ ರೋಡ್ ಶೋದಲ್ಲಿ ಅನಂತಕುಮಾರ್ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.