ಅಭಿವೃದ್ಧಿಯಲ್ಲಿ ಎಲ್ಲ ಶಾಸಕರು ವಿಫಲ
ಕನ್ನಡಪ್ರಭ ವಾರ್ತೆ, ರಾಯಚೂರು, ಏ.30
ರಾಯಚೂರು ನಗರ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸಿದ ಶಾಸಕರು ಜನತೆಗೆ ಸಮರ್ಪಕ ಸೇವೆ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಮೂಲ ಸೌಲಭ್ಯಗಳ ಕೊರತೆಯಿಂದಾಗಿ ಜನತೆ ತೊಂದರೆಯಲ್ಲಿದ್ದು, ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ತಿರಸ್ಕರಿಸಿ ಪಕ್ಷೇತರರಾಗಿ ಕಣದಲ್ಲಿರುವ ತಮಗೆ ಬೆಂಬಲಿಸುವಂತೆ ಪಕ್ಷೇತರ ಅಭ್ಯರ್ಥಿ ಜಫರ್ ಮೊಯಿನುದ್ದೀನ್ ಮನವಿ ಮಾಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ಕಳೆದ ಅನೇಕ ದಶಕಗಳಿಂದ ಜನತೆ ಮೂಲ ಸೌಲಭ್ಯಗಳ ಕೊರತೆಯ ಮಧ್ಯೆಯೇ ಜೀವನ ನಡೆಸುತ್ತಿದ್ದಾರೆ. ಜನತೆ ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಶಾಸಕರಾಗಿ ಅಧಿಕಾರ ನಡೆಸಿದವರು ಮಾಡಿಲ್ಲ ಎಂದು ಟೀಕಿಸಿದರು.
ಮೂಲ ಸೌಲಭ್ಯ ಮರೀಚಿಕೆ: ಒಳಚರಂಡಿ ವ್ಯವಸ್ಥೆ, ಸಮರ್ಪಕ ರಸ್ತೆ ಸಂಪರ್ಕ, ಸ್ವಚ್ಛತೆ, ಶುದ್ಧ ಕುಡಿವ ನೀರು ಜನತೆಗೆ ಮರೀಚಿಕೆಯಾಗಿದೆ. ಹದಗೆಟ್ಟಿರುವ ರಸ್ತೆಗಳು, ರಸ್ತೆಗೆ ನುಗ್ಗುವ ಚರಂಡಿ ನೀರಿನಿಂದಾಗಿ ನಗರದಲ್ಲಿ ಅನಾರೋಗ್ಯಕರ ಪರಿಸ್ಥಿತಿಯಿದೆ. ಇಂಥ ಸಮಸ್ಯೆಗಳ ಅರಿವಿದ್ದರೂ ಅಧಿಕಾರ ನಡೆಸಿದವರು ಜನರ ಸಮಸ್ಯೆ ಪರಿಹಾರಕ್ಕೆ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿದರು.
ಸದ್ಯದ ಚುನಾವಣೆಯಲ್ಲಿಯೂ ಕಳೆದ ಅನೇಕ ವರ್ಷಗಳಿಂದ ಜಾರಿಯಲ್ಲಿರುವ ಸಮಸ್ಯೆಗಳ ಬಗ್ಗೆಯೇ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಭರವಸೆ ನೀಡುತ್ತಿದ್ದಾರೆ. ಆದರೆ ಕಳೆದ ಬಾರಿ ನೀಡಿದ್ದ ಭರವಸೆಗಳೇ ಈಗಲೂ ಈಡೇರದೇ ಉಳಿದಿವೆ ಎಂದು ದೂರಿದರು.
ಮತದಾರರ ಬೆಂಬಲ: ಈ ಹಿನ್ನೆಲೆಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ತಮಗೆ ಮತದಾರರು ಬೆಂಬಲ ನೀಡಬೇಕೆಂದು ಮನವಿ ಮಾಡಿದ ಅವರು, ಈಗಾಗಲೇ ನಗರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧೆಡೆ ಪ್ರಚಾರ ಕೈಗೊಂಡ ವೇಳೆ ಮತದಾರರ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.
ಹಣ ಬಲದಿಂದಲೇ ಕಣದಲ್ಲಿ ಅನೇಕರಿದ್ದಾರೆ. ಆದರೆ ತಾವು ಕೇವಲ 1 ಲಕ್ಷ ವೆಚ್ಚದಲ್ಲಿಯೇ ಪ್ರಚಾರ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ ಅವರು, ಮತದಾರರು ತಮಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅವರ ಬೆಂಬಲಿಗರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

