ರಾಯಚೂರು

ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ; ಪ್ರತಿಭಟನೆ

Published On :

ರಾಜ್ಯ ವಿಕಲಚೇತನರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ಆರೋಪ
ಕನ್ನಡಪ್ರಭ ವಾರ್ತೆ ರಾಯಚೂರು ಆ.12
ಜಿಲ್ಲೆಯಲ್ಲಿ ವಿಕಲಚೇತನರಿಗೆ ಶೇ.3ರಷ್ಟು ಮೀಸಲಿಟ್ಟ ಅನುದಾನದ ಬಳಕೆಯಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸೋಮವಾರ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಸಂಘಟನೆ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಿಲ್ಲೆಯ ಜಿಲ್ಲಾ ಪಂಚಾಯ್ತಿ, ತಾಪಂ ಮತ್ತು ಗ್ರಾಪಂ ಸೇರಿ ಎಲ್ಲ ಇಲಾಖೆಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಆದರೆ ಅವುಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆಂದು ಟೀಕಿಸಿದರು.
ಅನುದಾನ ಬಳಕೆ ಅಸಡ್ಡೆ: ವಿವಿಧ ಯೋಜನೆಗಳಡಿ ವಿಕಲಚೇತನರಿಗೆ ಒಟ್ಟು ಅನುದಾನದ ಶೇ.3ರಷ್ಟು ಹಣವನ್ನು ಮೀಸಲಿಡಬೇಕು. ಅದಕ್ಕೆ ಪ್ರತ್ಯೇಕವಾಗಿ ಕ್ರಿಯಾ ಯೋಜನೆ ರೂಪಿಸಿ ಸರ್ಕಾರದಿಂದ ಅನುಮೋದನೆ ಪಡೆದು ಯೋಜನೆಗಳ ಲಾಭ ದೊರಕಿಸಿಕೊಡಬೇಕೆಂದಿದೆ. ಆದರೆ ಅಧಿಕಾರಿಗಳು ಶೇ.3ರಷ್ಟು ಅನುದಾನದ ಬಳಕೆಯಲ್ಲಿ ಅಸಡ್ಡೆ ತೋರುತ್ತಿದ್ದಾರೆ. ಅದರಿಂದಾಗಿ ವಿಕಲಚೇತನರ ಬದುಕು ಸಂಕಷ್ಟದಲ್ಲಿದೆ ಎಂದು ಆರೋಪಿಸಿದರು.
ಜಿಲ್ಲೆಯ ಐದು ತಾಲೂಕುಗಳು ವ್ಯಾಪ್ತಿಯ ಗ್ರಾಪಂ.ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಗ್ರಾಪಂ.ನಲ್ಲಿ ಪೀಠೋಪಕರಣ ಹಾಗೂ ದಾಖಲೆಗಳನ್ನಿರಿಸಲು ಅಗತ್ಯ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು.
ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ: ಜಿಲ್ಲಾ ಮತ್ತು ತಾಲೂಕುಗಳಲ್ಲಿ ಶೇ.3ರ ಹಣವನ್ನು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆದು ಅದರಲ್ಲಿರಿಸುವ ಮೂಲಕ ವಿಕಲಚೇತನರಿಗೆ ವೆಚ್ಚ ಮಾಡುವ ಕುರಿತು ಎಲ್ಲ ಗ್ರಾಪಂ, ತಾಪಂ ಮತ್ತು ಜಿಪಂ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
ವಿವಿಧೆಡೆ 2009ರಿಂದ ಇದುವರೆಗೆ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ವಿವಿಧ ಇಲಾಖೆಗಳಿಗೆ ಭೇಟಿ ನೀಡುವ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿಕಲಚೇತನರ ಹಕ್ಕುಗಳ ಬಗ್ಗೆ ಮಾಹಿತಿ ಕೇಳಿದರೆ ಹಾಗೂ ಅವುಗಳ ಜಾರಿಗೆ ಒತ್ತಾಯಿಸಿದರೆ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ದೂರಿದರು.
ಮಾಸಾಶನ ವಿಳಂಬ: ಜಿಪಂ ಮತ್ತು ತಾಪಂ.ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಪ್ರವಾಸ ಮತ್ತು ನಿರ್ವಹಣೆ ಭತ್ಯೆ ನೀಡಬೇಕು. ಈ ಕುರಿತು ಆಯಾ ಗ್ರಾಪಂ ಪಿಡಿಒಗಳಿಗೆ ಕೂಡಲೇ ಆದೇಶ ನೀಡುವಂತೆ ಆಗ್ರಹಿಸಿದ ಹೋರಾಟಗಾರರು, ವಿಕಲಚೇತನರ ಅನುಷ್ಠಾನ ಸಮಿತಿಯ ಸಭೆ ಪ್ರತಿ ತಿಂಗಳು ನಡೆಸುತ್ತಿಲ್ಲ ಎಂದು ಟೀಕಿಸಿದರು.
ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಕರೆಯುವಲ್ಲಿ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ವಿಕಲಚೇತನರಿಗೆ ಪ್ರತಿ ತಿಂಗಳು ಸರ್ಕಾರದಿಂದ ಮಂಜೂರಾಗಿರುವ ಮಾಸಾಶನವು ವಿಳಂಬವಾಗುತ್ತಿದ್ದು, ಪ್ರತಿ ತಿಂಗಳು ಪಾವತಿಸುವಂತೆ ಜಿಲ್ಲಾ ಖಜಾನೆ ಅಧಿಕಾರಿಗಳಿಗೆ ಸೂಚಿಸಬೇಕೆಂದು ಆಗ್ರಹಿಸಿದರು.
ಕಚೇರಿ ಸ್ಥಳಾಂತರಿಸಿ: ತಾಲೂಕು ಮಟ್ಟದಲ್ಲಿ ವಿಕಲಚೇತನರಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳ ನಿರ್ವಹಣೆಗೆ ಅನುಮತಿ ನೀಡಬೇಕು. ವಿವಿಧ ವಸತಿ ಯೋಜನೆ ಹಾಗೂ ಶೇ.3ರ ಅನುದಾನ ಬಳಕೆ ನಿಟ್ಟಿನಲ್ಲಿ ಜಿಪಂ ಸಿಇಒ ನಿರಂತರ ನಿಗಾಯಿರಿಸಿ ವಿಕಲಚೇತನರಿಗೆ ಸೌಲಭ್ಯಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿಗಳನ್ನು ಪ್ರತ್ಯೇಕವಾಗಿ ನೇಮಕ ಮಾಡಬೇಕು. ಸಬಲೀಕರಣ ಅಧಿಕಾರಿಗಳ ಕಚೇರಿಯನ್ನು ಸದ್ಯದ ಸ್ಥಳದಿಂದ ಅನುಕೂಲಕರ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಹ್ಮದ್ ಹುಸೇನಸಾಬ್, ಜಿಲ್ಲಾ ಕಾರ್ಯದರ್ಶಿ ಅಮರೇಶ್ ಯಾದವ್, ದೇಸಾಯಿ ಧೋತರಬಂಡಿ, ತಿಮ್ಮಣ್ಣ ಹೇಮನಾಳ, ನಾಗರಾಜ್ ನಾಡಗೌಡ್ರು, ಗೋವಿಂದ ನಾಯಕ, ಹನುಮಂತ, ಮಹ್ಮದ್ ಅಲಿ ಮಟಮಾರಿ, ನಾಗರಾಜ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.