ಕ್ರಿಯಾ ಯೋಜನೆ ಸಲ್ಲಿಕೆ ವಿಳಂಬ ಸಲ್ಲ
ಕನ್ನಡಪ್ರಭ ವಾರ್ತೆ, ರಾಯಚೂರು, ಆ.13
ಗ್ರಾಪಂ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಿಯಾ ಯೋಜನೆಯನ್ನು ಜಿಪಂ ಗೆ ಸಲ್ಲಿಸದಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಜಿಪಂ ಸಿಇಒ ಮುದ್ದುಮೋಹನ್, ಕರ್ತವ್ಯಲೋಪವನ್ನು ಸಹಿಸಲಾಗದು. ತಪ್ಪೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.
ಅವರು ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ತಾಪಂ ಮತ್ತು ಗ್ರಾಪಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಪಂ ಕಾರ್ಯನಿರ್ವಾಹಕಾಧಿಕಾರಿಗಳು ಪ್ರತಿ ತಿಂಗಳು 10 ಗ್ರಾಪಂಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು. ಭೇಟಿ ನೀಡಿದ ಅಲ್ಲಿನ ಪ್ರಗತಿಯ ಬಗ್ಗೆ ಜಿಪಂ ಗೆ ವರದಿ ಸಲ್ಲಿಸಬೇಕು. ಪೂರ್ವ ಅನುಮತಿಯಿಲ್ಲದೇ ಕೇಂದ್ರ ಸ್ಥಾನವನ್ನು ಬಿಡದಂತೆ ತಾಪಂ ಅಧಿಕಾರಿಗಳಿಗೆ ಸೂಚಿಸಿದರು.
ನಿರ್ಲಕ್ಷ್ಯ: ಗ್ರಾಪಂ ಮಟ್ಟದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕ್ರಿಯಾ ಯೋಜನೆಯು ಈಗಾಗಲೇ ಜಿಪಂ ಗೆ ಸಲ್ಲಿಕೆಯಾಗಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅದು ಸಾಧ್ಯವಾಗಿಲ್ಲ. ಸರ್ಕಾರದಿಂದ ಗ್ರಾಪಂ ಗಳಿಗೆ ಒದಗಿಸಿದ ಅನುದಾನದ ಪೂರ್ಣ ಹಾಗೂ ಸಮರ್ಪಕ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ವಾರದೊಳಗೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸುವಂತೆ ಆದೇಶಿಸಿದರು.
ತಾಪಂ ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿಯೇ ಬಿಡಾರ ಹೂಡುತ್ತಿದ್ದು, ಗ್ರಾಮಗಳಿಗೆ ತೆರಳಿ ಅಭಿವೃದ್ಧಿ ಪರಿಶೀಲಿಸುತ್ತಿಲ್ಲ. ಅದರಿಂದ ಗ್ರಾಪಂ ಗಳ ಕಾರ್ಯನಿರ್ವಹಣೆ ಬಗ್ಗೆ ಬೇಸರ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ತಾಪಂ ಇಒಗಳು ಪ್ರತಿ ತಿಂಗಳು 10 ಗ್ರಾಪಂಗಳಿಗೆ ಭೇಟಿ ನೀಡಿ ಅಲ್ಲಿನ ಪ್ರಗತಿ ಬಗ್ಗೆ ತಮಗೆ ವರದಿ ಸಲ್ಲಿಸಲು ಆದೇಶಿಸಿದರು.
ಶಿಸ್ತುಕ್ರಮ: ಸರ್ಕಾರದ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಪೂರಕವಾಗಿ ಜಿಪಂ ನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು.ಯೋಜನೆಗಳ ಜಾರಿಯಲ್ಲಿನ ವೈಫಲ್ಯವನ್ನು ಯಾವುದೇ ಕಾರಣಕ್ಕೆ ಸಹಿಸಲಾಗದು ಎಂದು ಎಚ್ಚರಿಸಿ, ಕರ್ತವ್ಯ ಲೋಪಕ್ಕೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ತಾಲೂಕು ಮಟ್ಟದಲ್ಲಿನ ಪ್ರಗತಿ ಪರಿಶೀಲನೆ ಸಭೆಗಳನ್ನು ಕಾಲದಿಂದ ಕಾಲಕ್ಕೆ ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದರು.
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅನುದಾನ ಮಂಜೂರಾಗಿದ್ದರೂ, ಗ್ರಾಪಂ ಮಟ್ಟದಲ್ಲಿ ಕ್ರಿಯಾ ಯೋಜನೆ ಸಲ್ಲಿಕೆ ಯಾಗಿಲ್ಲ. ಅದರಿಂದ ಯೋಜನೆಯ ಜಾರಿಯಲ್ಲಿ ವಿಳಂಬವಾಗುತ್ತದೆ. ಹಾಗೆಯೇ ನಿಗದಿತ ಗುರಿ ತಲುಪಲು ಸಾಧ್ಯವಾಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ತೊಂದರೆ: ಉದ್ಯೋಗ ಖಾತ್ರಿ ಯೋಜನೆಯ ಅನುದಾನ ದೊರೆತು ನಾಲ್ಕು ತಿಂಗಳಾದರೂ ಇದುವರೆಗೆ ಕ್ರಿಯಾ ಯೋಜನೆ ಸಲ್ಲಿಕೆಯಾಗದಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕೂಲಿಕಾರ್ಮಿಕರಿಗೆ ತೊಂದರೆಯಾಗುತ್ತದೆ.
ಕಾರಣ ವಾರದೊಳಗೆ ಕ್ರಿಯಾ ಯೋಜನೆ ಸಲ್ಲಿಸುವ ಮೂಲಕ ಅನುದಾನ ಬಳಕೆಗೆ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು. ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಎಂಡಿ ಯುಸೂಫ್, ಯೋಜನಾಧಿಕಾರಿ ಡಾ.ಟಿ. ರೋಣಿ, ಯೋಜನಾ ನಿರ್ದೇಶಕ ಶರಣಬಸವ ಉಪಸ್ಥಿತರಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ತಾಪಂ ಮತ್ತು ಗ್ರಾಪಂ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.13ಕೆ.ಎಸ್.ಎನ್.ಡಿ.3ಬಸವಣ್ಣ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

