ರಾಯಚೂರು

ಒಪೆಕ್ ಸಿಬ್ಬಂದಿ ಪುನಾ ನೇಮಕ: ಕಾನೂನಿನಂತೆ ಕ್ರಮ- ಸಚಿವರ ಭರವಸೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಆ.15
ಒಪೆಕ್ ಆಸ್ಪತ್ರೆ ಪುನಾರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಮೊದಲು ಅಪೋಲೋ ಸಂಸ್ಥೆಯಡಿ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 286 ಸಿಬ್ಬಂದಿಯನ್ನು ಕಾನೂನಿನ ಚೌಕಟ್ಟಿನೊಳಗೆ ಪುನಾ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಪೋಲೋ ಸಂಸ್ಥೆಯು ಹೊರಗುತ್ತಿಗೆ ಮೂಲಕ 286 ಸಿಬ್ಬಂದಿಯನ್ನು ನೇಮಿಸಿತ್ತು. ಹಾಗಾಗಿ ರಾಜ್ಯ ಸರ್ಕಾರ ಸದ್ಯ ಕಾನೂನಿನಲ್ಲಿ ಈ ಸಿಬ್ಬಂದಿಯ ಪುನಾ ನೇಮಕಕ್ಕೆ ಇರುವ ತೊಡಕುಗಳನ್ನು ಪರಿಗಣಿಸಿ ನೇಮಕಾತಿಗೆ ಅವಕಾಶ ಕಲ್ಪಿಸುತ್ತಿದೆ ಎಂದು ಹೇಳಿದರು.
ಒಪೆಕ್ ಆಸ್ಪತ್ರೆಯಲ್ಲಿ ಸದ್ಯ ಲಭ್ಯವಿರುವ ವೈದ್ಯಕೀಯ ಯಂತ್ರೋಪಕರಣಗಳ ವಾಸ್ತವಸ್ಥಿತಿಯ ಬಗ್ಗೆ ವಿಶೇಷಾಧಿಕಾರಿ ಮತ್ತು ತಂಡದವರು ಪರಿಶೀಲಿಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ. ಅದನ್ನು ಆಧರಿಸಿ ಮುಂದಿನ ದಿನಗಳಲ್ಲಿ ವೈದ್ಯಕೀಯ ಯಂತ್ರೋಪಕರಣಗಳ ಖರೀದಿಗೆ ಬಗ್ಗೆ ಯೋಜಿಸಲಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಕ್ರಮ: ಜಿಲ್ಲಾ ಕ್ರೀಡಾಂಗಣದ ದುಸ್ಥಿತಿಯ ಬಗ್ಗೆ ಸರ್ಕಾರದ ಗಮನಕ್ಕಿದೆ. ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಬದ್ಧ. ಆದರೆ ಕ್ರೀಡಾ ಸಚಿವಾಲಯದಲ್ಲಿ ಸಂಪನ್ಮೂಲಗಳ ಲಭ್ಯತೆಯಾಧರಿಸಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ರೈತರಿಗೆ ನೀರು: ತುಂಗಭದ್ರಾ ಎಡದಂಡೆ ಕಾಲುವೆಯ ಕಡೆಯ ಭಾಗದಲ್ಲಿ ರೈತರು ನೀರಿನ ಅಭಾವ ಎದುರಿಸುತ್ತಿರುವ ಬಗ್ಗೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಚರ್ಚಿಸಿದ್ದು, ಅವರು ತುಂಗಭದ್ರಾ ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಅವರಿಗೆ ಕಾಲುವೆಯ ಕಡೆಯ ರೈತರಿಗೆ ನೀರು ದೊರಕಿಸಿಕೊಡುವ ಹೊಣೆ ಒಪ್ಪಿಸಿದ್ದಾರೆ. ಅದೇ ರೀತಿ ತಾವೂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜಿಲ್ಲಾಡಳಿತದ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆಂದು ಹೇಳಿದರು.
ಅಕ್ರಮವಾಗಿ ಜಿಲ್ಲೆಯಲ್ಲಿ ಜಲ್ಲಿ ಕ್ರಷರ್ ಸೇರಿ ವಿವಿಧ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದ ಬೆಂಬಲಿಗರು ಅಕ್ರಮಗಳಲ್ಲಿ ತೊಡಗಿದರೆ ಸರ್ಕಾರ ಸಹಿಸುವುದಿಲ್ಲ. ಅಕ್ರಮಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಗೆ ಭರವಸೆ ನೀಡಿದಂತೆ ಪಾರದರ್ಶಕ ಹಾಗೂ ಉತ್ತಮ ಆಡಳಿತ ನೀಡಲಿದೆ. ಅದಕ್ಕೆ ಪೂರಕವಾಗಿ ಅಧಿಕಾರಿಗಳೂ ಸಹ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಿದೆ ಎಂದರು.
ಜಿಪಂ ಅಧ್ಯಕ್ಷೆ ಲಲಿತಮ್ಮ, ಶಾಸಕ ಡಾ. ಶಿವರಾಜ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.