ಅಭಿವೃದ್ಧಿ ಕುಂಠಿತ, ಹೋರಾಟದ ಎಚ್ಚರಿಕೆ
ಯಾದಗಿರಿ: ಜಿಲ್ಲೆಯಾಗಿ 3 ವರ್ಷ ಕಳೆದರೂ ಅಭಿವೃದ್ಧಿ ಎನ್ನುವುದು ಇನ್ನೂ ಮರೀಚಿಕೆಯಾಗಿದೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಹಾಗೂ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. 15 ದಿನದೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲೆಯ ಅಭಿವೃದ್ಧಿಪರ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ.
ವ್ಯವಸ್ಥೆಯಿಲ್ಲ: ಇಲ್ಲಿಯ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಡಳಿತವನ್ನು ತರಾಟೆಗೆ ತೆಗೆದುಕೊಂಡರು. ಡಾ.ನಾಗರಾಜ ವಾರದ್ ಮಾತನಾಡಿ, ಜಿಲ್ಲೆಯಾದ ನಂತರ ಅಭಿವೃದ್ಧಿ ಹೆಚ್ಚುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಕೇವಲ ರೂಪುರೇಷೆ ಹಾಕಿಕೊಂಡಿದ್ದೇ ಸಾಧನೆ ಎಂಬಂತಾಗಿದೆ. ರಸ್ತೆ ಅಗಲೀಕರಣ ಸರ್ವೇ ಆಗಿದ್ದರೂ ಇನ್ನೂ ಅತಿಕ್ರಮಣ ತೆರವುಗೊಳಿಸಿ ರಸ್ತೆ ಅಗಲೀಕರಣ ಕಾರ್ಯ ಕೈಗೊಂಡಿಲ್ಲ. ಜಿಲ್ಲಾಧಿಕಾರಿಯವರೂ ಈ ನಿಟ್ಟಿನಲ್ಲಿ ಸುಮ್ಮನಿರುವುದನ್ನು ನೋಡಿದರೆ ಇದರಲ್ಲಿ ಯಾರ ಹಿತಾಸಕ್ತಿ ಅಡಗಿದೆ ಎನ್ನುವುದು ಗೊತ್ತಾಗುತ್ತಿಲ್ಲ. ನಗರದಲ್ಲಿ ಎಲ್ಲಿಯೂ ಸಾರ್ವಜನಿಕ ಶೌಚಾಲಯ ವ್ಯವಸ್ಥೆಯಿಲ್ಲ. ತರಕಾರಿ ಹಾಗೂ ಮಾಂಸದ ಮಾರುಕಟ್ಟೆ ಪ್ರತ್ಯೇಕಗೊಳಿಸಿಲ್ಲ. ನಗರದ ರಸ್ತೆಗಳು ತೀವ್ರ ಹದಗೆಟ್ಟಿದ್ದರೂ ಕಾಮಗಾರಿ ಕೈಗೊಳ್ಳುತ್ತಿಲ್ಲ. ಕೆರೆ ಅಭಿವೃದ್ಧಿ ಕಾರ್ಯ ಆರಂಭಿಸಿ ಅರ್ಧದಲ್ಲೇ ಬಿಡಲಾಗಿದೆ. ಇದಕ್ಕೆಲ್ಲ ಸರ್ಕಾರ ಅನುದಾನ ನೀಡುತ್ತಿಲ್ಲವೋ ಅಥವಾ ಬೇರೆ ಏನಾದರೂ ಕಾರಣವಿದೆಯೇ ಎನ್ನುವುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕು ಎಂದು ಡಾ.ವಾರದ್ ತಾಕೀತು ಮಾಡಿದರು.
ಭ್ರಷ್ಟಾಚಾರ: ಜಿಲ್ಲಾ ಉಸ್ತುವಾರಿ ಸಚಿವರೂ ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಕಿಂಚಿತ್ತೂ ಗಮನ ನೀಡುತ್ತಿಲ್ಲ. ಹೆಚ್ಚಿನ ಇಲಾಖೆಗಳಲ್ಲಿ ಪ್ರಭಾರಿ ಅಧಿಕಾರಿಗಳೇ ಇದ್ದು, ಅವರಿಂದ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ. ಅಲ್ಲದೇ ಎಲ್ಲ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಯಾವ ಕಡತವೂ ಲಂಚ ನೀಡದೇ ಕದಲುವುದಿಲ್ಲ. ಜಿಲ್ಲಾಧಿಕಾರಿ ಕಚೇರಿಯೂ ಭ್ರಷ್ಟಾಚಾರ ತಡೆಯುವಲ್ಲಿ ವಿಫಲವಾಗಿದೆ. ಸಿಬ್ಬಂದಿ ಕೊರತೆ ಹಾಗೂ ಅನನುಭವಿ ನೌಕರರಿಂದಾಗಿ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಕಚೇರಿಗೆ ಬೆಳಗ್ಗೆ 11 ಗಂಟೆಗೆ ಬಂದು ಸಂಜೆ 4 ಗಂಟೆಗೆ ಹೋಗುತ್ತಾರೆ. ಈ ಮಧ್ಯೆ ಶ್ರೀಸಾಮಾನ್ಯರಿಗೆ ಅಧಿಕಾರಿಗಳನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ನಗರದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಹದಗೆಟ್ಟಿದೆ. ಪೌರಾಯುಕ್ತರು ಕಚೇರಿ ಬಿಟ್ಟು ಎಲ್ಲ ವಾರ್ಡುಗಳನ್ನು ಒಮ್ಮೆ ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲೆ ಕಡೆಗಣನೆ: ವೈಜನಾಥ ಹಿರೇಮಠ, ಅಬ್ದುಲ್ ಗಫಾರ್ ವರ್ಚಸ್ ಮಾತನಾಡಿ, ಜಿಲ್ಲೆಯಾದ ನಂತರ ಎಲ್ಲ ಕ್ಷೇತ್ರಗಳಲ್ಲಿ ಜಿಲ್ಲೆ ಹಿಂದುಳಿಯುವಂತಾಗಿದೆ. ಇದರಿಂದ ಜನತೆ ರೋಸಿ ಹೋಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಅಧಿಕಾರಿಗಳು ಹಾಗೂ ಸಚಿವರಿಂದ ಜಿಲ್ಲೆ ಕಡೆಗಣನೆಯಾಗುತ್ತಿದೆ. ಇದರಿಂದ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ನಡೆಯುತ್ತಿದೆ. ಕಚೇರಿಗಳಲ್ಲಿ ಶೀಘ್ರದಲ್ಲಿ ಕೆಲಸವಾಗುತ್ತಿಲ್ಲ. ಜನರು ಸಮಸ್ಯೆ ತಂದರೂ ಅಧಿಕಾರಿಗಳು ಅದಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

