ಸಿಎಂಗೆ 25ರಂದು ಘೇರಾವ್
ಕ.ಪ್ರ.ವಾರ್ತೆ ರಾಯಚೂರು ಆ.18
ಮಾನವಿ ತಾಲೂಕಿನಲ್ಲಿ ಅಕ್ರಮ ಗಣಿ ಲೂಟಿಕೋರರನ್ನು ರಕ್ಷಿಸುತ್ತಿರುವ ಜಿಲ್ಲಾಡಳಿತ ಮತ್ತು ಸಿಎಂ ಸಿದ್ದರಾಮಯ್ಯನವರ ವರ್ತನೆ ಖಂಡಿಸಿ ಆ.25ರಂದು ಸಿಂಧನೂರಿಗೆ ಆಗಮಿಸುವ ಸಿಎಂ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಲಾಗುತ್ತದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಕೆ. ನಾಗಲಿಂಗಸ್ವಾಮಿ ಎಚ್ಚರಿಸಿದರು.
ನಗರದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾನವಿ ಪಟ್ಟಣದ ಸುತ್ತಲೂ ಸರ್ಕಾರಿ ಜಮೀನಿನಲ್ಲಿ ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು ದಾಖಲೆ ಸಹಿತ ಸಂಘಟನೆಯು ದೂರು ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ 13 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಮೇಲೆ ಒತ್ತಡ: ಆದರೆ ಸಿಎಂ ಕಚೇರಿಯಿಂದ ಜಿಲ್ಲಾಡಳಿತದ ಮೇಲೆ ನಿರಂತರ ಕೇಸ್ ದಾಖಲಿಸದಂತೆ ಒತ್ತಡ ಹೇರಲಾಗುತ್ತಿದೆ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿಗಳೇ ಸಂಘಕ್ಕೆ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಸಂಘಟನೆಯಿಂದ ಅನೇಕ ಬಾರಿ ಹೋರಾಟ ಮಾಡಲಾಗಿದೆ. ಆದರೂ ಯಾವುದೇ ಕ್ರಮ ಮಾತ್ರ ಜರುಗಿಲ್ಲ ಎಂದು ದೂರಿದರು. ರೈತರ ಬೆಳೆ ನಷ್ಟ, ಭಾರೀ ಸ್ಫೋಟಕಗಳ ಬಳಕೆ, ಅಕ್ರಮ ಕಲ್ಲು ಗಣಿಗಾರಿಕೆಯ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರು. ನಷ್ಟ ಆಗುತ್ತಿದ್ದರೂ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಎಂ. ಈರಣ್ಣ, ಅಕ್ಬರ್ ಪಾಷಾ, ಶ್ರೀನಿವಾಸರೆಡ್ಡಿ, ವೆಂಕಟರೆಡ್ಡಿ, ಫಾತಿಮಾ ಬೇಗಂ, ರಾಘವರೆಡ್ಡಿ ಸೇರಿ ಒಟ್ಟು 13 ಜನರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಆಡಳಿತರೂಢ ಕಾಂಗ್ರೆಸ್ ಪಕ್ಷದ ಬೆಂಬಲಿಗರನ್ನು ರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗ ತಾನೇ ಮುಂದಾಗಿದೆ. ಕೆಲವೇ ಕೆಲವರ ವಿರುದ್ಧ ಕ್ರಮ ಕೈಗೊಳ್ಳುವ ಕಾರ್ಯ ಜಿಲ್ಲಾಡಳಿತ ಮಾಡಿದೆ. ಕಳೆದ ಅನೇಕ ವರ್ಷಗಳಿಂದ ಕಾನೂನು ಉಲ್ಲಂಘಿಸಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಎಂ. ಈರಣ್ಣ ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೂ ಬೆಂಬಲಕ್ಕೆ ನಿಂತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.
ಅಧಿಕಾರಿ ವಜಾಗೊಳಿಸಿ: ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನದಂತೆ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಜಿಲ್ಲಾಧಿಕಾರಿಗಳು ಇತ್ತೀಚೆಗೆ ಆದೇಶಿಸಿದ್ದು, ಆ ಆದೇಶದಲ್ಲಿ ಮಾನವಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರಲ್ಲಿ ಪ್ರಮುಖರಾಗಿರುವ ಎಂ. ಈರಣ್ಣ ಅವರ ಹೆಸರು ಕೈಬಿಡಲಾಗಿದೆ. ಇದು ಜಿಲ್ಲಾಧಿಕಾರಿಗಳೂ ಅಕ್ರಮಕ್ಕೆ ಬೆಂಬಲಿಸಿರುವುದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಳನ್ನು ಕೂಡಲೇ ವರ್ಗಾಯಿಸುವಂತೆ ಒತ್ತಾಯಿಸಿದರು. ಜಲ್ಲಿ ಕಲ್ಲು, ಕ್ರಷರ್ ಯಂತ್ರಗಳನ್ನು ಜಪ್ತಿ ಮಾಡಿದ ಆಡಳಿತವು ಆನಂತರದಲ್ಲಿ ಅವುಗಳನ್ನು ನಿರ್ವಹಿಸುತ್ತಿದ್ದವರ ವಿರುದ್ಧ ಕೇಸ್ ದಾಖಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅಕ್ರಮದಲ್ಲಿ ಶಾಮೀಲಾಗಿರುವ ಎಂ. ಈರಣ್ಣ ಸೇರಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಅಕ್ರಮ ಗಣಿಗಾರಿಕೆಗೆ ಅವಕಾಶ ಮಾಡಿಕೊಟ್ಟ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಸಿಕಂದರ್ ಪಾಷಾ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ರಾಯಚೂರು ತಾಲೂಕಾಧ್ಯಕ್ಷ ರಾಜಶೇಖರ್, ಸೈಯದ್ ಅಬ್ಬಾಸ್ ಅಲಿ, ಮುದುಕಪ್ಪ ನಾಯಕ, ಮಲ್ಲಯ್ಯ ಕಟ್ಟಿಮನಿ, ರಮೇಶ್ ಪಾಟೀಲ್, ಬಸವರಾಜ ನಗನೂರು ಸೇರಿ ಅನೇಕರಿದ್ದರು.
25ರಂದು ಸಿಂಧನೂರಲ್ಲಿ ಘೇರಾವ್
ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದರೆ ಆ.25ರಂದು ಸಿಎಂ ಸಿದ್ದರಾಮಯ್ಯ ಅವರು ಸಿಂಧನೂರಿಗೆ ಭೇಟಿ ಕಾರ್ಯಕ್ರಮವಿದ್ದು, ಆ ವೇಳೆ ಅವರಿಗೆ ಕ್ರಮಕ್ಕೆ ಆಗ್ರಹಿಸಿ ಘೇರಾವ್ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

