ರಾಯಚೂರು

'ನೀರಾವರಿ, ವಿದ್ಯುತ್ ಉತ್ಪಾದನೆ ಹೆಚ್ಚಳ ಗುರಿ'

Published On :

ಕ.ಪ್ರ.ವಾರ್ತೆ  ರಾಯಚೂರು  ಆ.25
ರಾಜ್ಯದಲ್ಲಿ ನೀರಾವರಿ ಸೌಲಭ್ಯ ಹೆಚ್ಚಳಕ್ಕೆ 50 ಸಾವಿರ ಕೋಟಿ ವೆಚ್ಚ ಮಾಡಲು ಸರ್ಕಾರ ಬದ್ಧವಾಗಿದೆ. ವಿದ್ಯುತ್ ಸಮಸ್ಯೆ ನೀಗಿಸಲು ಮುಂದಿನ 3 ವರ್ಷಗಳಲ್ಲಿ 5 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿಂಧನೂರಿನಲ್ಲಿ ಭಾನುವಾರ ಆಯೋಜಿಸಿದ್ದ 343 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಕೃಷ್ಣಾ, ಕಾವೇರಿ ಮತ್ತಿತರೆ ನೀರಾವರಿ ಯೋಜನೆಗಳಡಿ ಲಭ್ಯವಿರುವ ನೀರಿನ ಸಂಪೂರ್ಣ ಬಳಕೆಗೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮುಂದಿನ 5 ವರ್ಷಗಳಲ್ಲಿ ಸರ್ಕಾರ 50 ಸಾವಿರ ಕೋಟಿ ವೆಚ್ಚ ಮಾಡಲಿದೆ ಎಂದು ಹೇಳಿದರು.
ತುಂಗಭದ್ರಾ ನದಿಯಲ್ಲಿ ಪ್ರವಾಹ ಸಂದರ್ಭ ವ್ಯರ್ಥವಾಗುವ ನೀರಿನ ಸದ್ಬಳಕೆಗೆ ಸರ್ಕಾರ ಶೀಘ್ರದಲ್ಲಿಯೇ ತಜ್ಞರೊಂದಿಗೆ ಸಮಾಲೋಚಿಸಿ ಸಮಗ್ರ ವರದಿ ಪಡೆದು ಆಂಧ್ರ ಸರ್ಕಾರದ ಜತೆ ಚರ್ಚಿಸಿ ಹೆಚ್ಚುವರಿ ನೀರಿನ ಬಳಕೆಗೆ ಪ್ರತ್ಯೇಕ ಕಾಲುವೆ ನಿರ್ಮಿಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಕಳೆದ ಅವಧಿಗೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳದ್ದರಿಂದ ಸದ್ಯ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಗಮನಹರಿಸಿದೆ. ಉದ್ದೇಶಿತ ಥರ್ಮಲ್ ವಿದ್ಯುತ್ ಘಟಕಗಳಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ 3823 ಮಿಲಿಯನ್ ಟನ್ ಕಲ್ಲಿದ್ದಲು ಹಂಚಿಕೆಯಾಗಿದೆ. ಈಗಾಗಲೇ ಜಾರಿಯಲ್ಲಿರುವ ವಿದ್ಯುತ್ ನಿರ್ಮಾಣ ಕಾಮಗಾರಿ ಚುರುಕುಗೊಳಿಸಲು ಸೂಚಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ವಿಚಾರ ತಮಗೆ ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹಸಿವು ಮುಕ್ತ, ಅಪೌಷ್ಟಿಕತೆಯಿಂದ ದೂರವಾದ ರಾಜ್ಯ ನಿರ್ಮಾಣ ತಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಶೀಘ್ರದಲ್ಲಿಯೇ ಬಡವರಿಗೆ ಅಕ್ಕಿಯ ಜತೆಗೆ ಗೋಧಿ, ಜೋಳವನ್ನು 1 ಕೆಜಿ ದರದಲ್ಲಿ ನೀಡಲಾಗುತ್ತದೆ ಎಂದು ಹೇಳಿದರು.
ಬಿಪಿಎಲ್ ಕಾರ್ಡುದಾರರಿಗೆ ಜೋಳ, ಗೋಧಿ ವಿತರಣೆಯಿಂದ ಅಂಥ ಆಹಾರ ಧಾನ್ಯಗಳ ದರವೂ ಹೆಚ್ಚಳವಾಗಲಿದೆ. ರೈತರಿಗೆ ಅನುಕೂಲವಾಗಲಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಹೆಚ್ಚಳದಿಂದ ಪ್ರತಿ ದಿನ ಸದ್ಯ 55 ಲಕ್ಷ ಲೀಟರ್ ಹಾಲು ಉತ್ಪಾದಿಸಲಾಗುತ್ತಿದೆ. ಬಡವರ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಅಡಿ ಹಾಲು ಒದಗಿಸುವ ಮೂಲಕ ಅವರ ಆರೋಗ್ಯ ಕಾಪಾಡುವ ಕಾರ್ಯ ಸರ್ಕಾರ ಮಾಡುತ್ತಿದೆ ಎಂದರು.
ತಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದ ಸಿದ್ದರಾಮಯ್ಯ, ತಾವು ಪ್ರಮಾಣ ವಚನ ಸ್ವೀಕರಿಸಿದ ಅರ್ಧಗಂಟೆಯಲ್ಲಿಯೇ ಚುನಾವಣೆ ಪೂರ್ವದಲ್ಲಿ ಪಕ್ಷ ನೀಡಿದ 6 ರಿಂದ 7 ಭರವಸೆಗಳನ್ನು ಈಡೇರಿಸುವ ಕಾರ್ಯ ಮಾಡಿದ್ದು, ಇಂಥ ಕಾರ್ಯ ಇದುವರೆಗೆ ಯಾವುದೇ ಸರ್ಕಾರದ ಸಿಎಂ ಮಾಡಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಜಾರಿಯಲ್ಲಿರುವ ಉದ್ದೇಶಿತ ರೇಲ್ವೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಯೋಜನೆಗಳಿಗೆ ಅಗತ್ಯವಿರುವ ಶೇ.50ರ ಹಣವನ್ನು ಕೇಂದ್ರಕ್ಕೆ ಭರಿಸಲು ಸದಾ ಸಿದ್ಧ ಎಂದ ಅವರು, ಈಗಾಗಲೇ ರಾಜ್ಯ ಸರ್ಕಾರವು ಜಾರಿಯಲ್ಲಿರುವ ರೇಲ್ವೆ ಯೋಜನೆಗಳಿಗೆ ಕೇಂದ್ರಕ್ಕೆ 7 ಸಾವಿರ ಕೋಟಿ ಪಾವತಿಸಬೇಕಿದೆ.  ಆ ಪೈಕಿ 343 ಕೋಟಿಗಳನ್ನು ಈ ನಿಟ್ಟಿನಲ್ಲಿ ಬಜೆಟ್ ನಲ್ಲಿಮೀಸಲಿಡಲಾಗಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ ಸ್ಥಿರ ಸರ್ಕಾರ ನೀಡಲಿದೆ. ರಾಜ್ಯದ ಸಮಗ್ರ ಅಭಿವೃದ್ಧಿ ಸರ್ಕಾರದ ಗುರಿಯಾಗಿದೆ. ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ದೊರಕಿಸುವುದಕ್ಕೆ ಸರ್ಕಾರ ಮೊದಲಾದ್ಯತೆ ನೀಡಲಿದೆ ಎಂದರು.
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ತುಂಗಭದ್ರಾ ಎಡದಂಡೆ ಕಾಲುವೆಯ ರೈತರ ಸಮಸ್ಯೆ ಪರಿಹಾರ, ಮುನಿರಾಬಾದ್-ಮಹೆಬೂಬ್ ನಗರ ಉದ್ದೇಶಿತ ರೇಲ್ವೆ ಯೋಜನೆಯ ಕಾಮಗಾರಿ ಚುರುಕುಗೊಳಿಸುವುದು ಸೇರಿ ಸಿಂಧನೂರು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಕೊಪ್ಪಳ ಸಂಸದ ಶಿವರಾಮಗೌಡ ಮಾತನಾಡಿದರು. ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ಹಂಪಯ್ಯ ನಾಯಕ, ವೆಂಕಟೇಶ ನಾಯಕ, ಪ್ರತಾಪಗೌಡ ಪಾಟೀಲ್, ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು, ಜಿಪಂ ಸಿಇಒ ಡಾ.ಮುದ್ದುಮೋಹನ್, ಎಸ್ಪಿ ಎಸ್.ಬಿ. ಬಿಸನಳ್ಳಿ ಸೇರಿ ಅನೇಕರಿದ್ದರು.
ಸಮಾರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ತೆರೆದ ವಾಹನದಲ್ಲಿ ಸಿಂಧನೂರಿನ ಎಪಿಎಂಸಿ ಆವರಣದಿಂದ ಕಾರ್ಯಕ್ರಮ ಸ್ಥಳದವರೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.
ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮತ್ತು ಜನತೆ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.