ರಾಯಚೂರು

ರೈತ ಸಂಘ ರಾಜ್ಯಾಧ್ಯಕ್ಷರ ಬಂಧನಕ್ಕೆ ಖಂಡನೆ: ಸಿಎಂ ಪ್ರತಿಕೃತಿ ದಹನ

Published On :

ರಾಯಚೂರು: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ತಡೆಯಲು ಯೋಜಿಸಿದ್ದ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಆರ್. ಮಾನಸಯ್ಯ ಮತ್ತಿತರರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿ ನಗರದಲ್ಲಿ ಭಾನುವಾರ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಹಿಳಾ ಸಮಾಜದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು, ಅಂಬೇಡ್ಕರ್ ವೃತ್ತದಲ್ಲಿ ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಇಲಾಖೆಯ ವರ್ತನೆಯನ್ನು ಖಂಡಿಸಿ ಘೋಷಣೆ ಕೂಗಿದರು.
ಸಿಎಂ ಕಚೇರಿ ಹಸ್ತಕ್ಷೇಪ: ಮಾನವಿ ಹೊರವಲಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಕಾನೂನು ಕ್ರಮ ಕೈಗೊಳ್ಳಲು ಸಿಎಂ ಕಚೇರಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರೈತ ಸಂಘವು ಸಿಂಧನೂರಿನಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ ಭೇಟಿ ಸಂದರ್ಭ ಮುತ್ತಿಗೆ ಹಾಕುವುದಾಗಿ ತಿಳಿಸಿತ್ತು. ಆದರೆ ಅಂಥ ಪ್ರತಿಭಟನೆ ತಡೆಗೆ ಪೊಲೀಸರು ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಮತ್ತಿತರರನ್ನು ಬಂಧಿಸಿರುವುದನ್ನು ಖಂಡಿಸಿದರು.
ಜಿಲ್ಲೆಯ ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್ ಸರ್ಕಾರ ಬೆಂಬಲಿಸುತ್ತಿದೆ. ಅದಕ್ಕೆ ಪೂರಕವಾಗಿ ಅಧಿಕಾರಿಗಳು ಹಾಗೂ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆಂದು ಆರೋಪಿಸಿದ ಕಾರ್ಯಕರ್ತರು, ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಹೋರಾಟಕ್ಕೆ ಮುಂದಾಗುವ ಸಂಘಟನೆಗಳ ಪ್ರಮುಖರನ್ನು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಕಾರ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಮಾಡುತ್ತಿದೆ ಎಂದು ಟೀಕಿಸಿದರು.
ವಿವಿಧ ಬೇಡಿಕೆ: ಒಪೆಕ್ ಆಸ್ಪತ್ರೆ ಪುನಾರಂಭ ಮತ್ತು ಸಿಬ್ಬಂದಿಯ ಪುನಾ ನೇಮಕ ಮಾಡಿಕೊಳ್ಳಬೇಕು. ಪಿಜಿ ಸೆಂಟರ್ ಸ್ಥಾಪನೆಗೆ ರೈತರಿಂದ ವಶಪಡಿಸಿಕೊಂಡು ಬಳಕೆ ಮಾಡದೇ ಬಿಟ್ಟ ಜಮೀನು ರೈತರಿಗೆ ಮರಳಿಸಬೇಕು. ಹೋರಾಟ ಹತ್ತಿಕ್ಕಲು ಬಂಧಿಸಿರುವ ರೈತರ ಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಪ್ರತಿಭಟನಾ ನಿರತರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಬ್ಬಾಸ್ ಅಲಿ, ರುದ್ರಯ್ಯ, ಬಸವರಾಜ ಬಾಗಲವಾಡ, ನೂರ ಜಹಾನ್,ಮಲ್ಲೇಶಕುಮಾರ್, ಹುಚ್ಚರೆಡ್ಡಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.