ರಾಯಚೂರು

'ಚುನಾವಣೆ ಲಾಭಕ್ಕೆ ಗೋಹತ್ಯೆ ನಿಷೇಧ ಕಾಯಿದೆ ಹಿಂತೆಗೆತ'

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಆ.28
ಬಿಜೆಪಿ ಸರ್ಕಾರ ಜಾರಿಗೆ ತರುವ ಉದ್ದೇಶದಿಂದ ರೂಪಿಸಿ ಅಂಗೀಕರಿಸಿ ರಾಜ್ಯಪಾಲರ ಅಂಕಿತಕ್ಕೆ ಕಳಿಸಿದ್ದ ಗೋಹತ್ಯೆ ನಿಷೇಧ ಕಾಯಿದೆಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದ ಕ್ರಮವನ್ನು ಖಂಡಿಸಿ ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕಳೆದ ಅವಧಿಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸುವ ನಿಟ್ಟಿನಲ್ಲಿ ಕಾಯಿದೆ ಜಾರಿಗೆ ನಿರ್ಧರಿಸಿತ್ತು. ಅದರಂತೆ ಕಾಯಿದೆಯನ್ನು ರೂಪಿಸಿ ವಿಧಾನಸಭೆಯಲ್ಲಿ ಅನುಮೋದಿಸಿ ರಾಜ್ಯಪಾಲರ ಅಂಕಿತಕ್ಕೆ ಕಳಿಸಿತ್ತು. ಆದರೆ ರಾಜ್ಯಪಾಲರು ಗೋಹತ್ಯೆ ನಿಷೇಧ ಕಾಯಿದೆಗೆ ಅಂಕಿತ ಹಾಕಿರಲಿಲ್ಲ ಎಂದು ಆರೋಪಿಸಿದರು.
ಭಾವನೆಗಳಿಗೆ ಧಕ್ಕೆ: ರಾಜ್ಯಪಾಲರು ಅಂಕಿತ ಹಾಕದೇ ಬಿಟ್ಟಿದ್ದ ಗೋಹತ್ಯೆ ನಿಷೇಧ ಕಾಯಿದೆಯನ್ನು ಈಚೆಗೆ ಅಧಿಕಾರಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ಭೂ ಮತ್ತು ಪ್ರಕೃತಿ ಪ್ರೇಮಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಬ್ಯಾಂಕ್ ಆಕರ್ಷಣೆಗೆ ಗೋಹತ್ಯೆ ನಿಷೇಧ ಕಾಯಿದೆ ಹಿಂಪಡೆದಿದೆ. ರಾಜ್ಯ ಸರ್ಕಾರದ ಗೋಹತ್ಯೆ ನಿಷೇಧ ಕಾಯಿದೆ ವಾಪಸಿನ ನಿರ್ಧಾರದಿಂದ ಕೃಷಿಕರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ಬಲವಾದ ಪೆಟ್ಟು ಬೀಳಲಿದೆ ಎಂದು ದೂರಿದರು.
ಗೋವುಗಳು ಹಾಗೂ ಎತ್ತುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದರಿಂದ ರೈತರು ರಸಗೊಬ್ಬರಗಳ ಮೇಲೆಯೇ ನಿರ್ಭರ ವಾಗುವಂತೆ ಮಾಡಲಿದೆ. ಹೆಚ್ಚೆಚ್ಚು ರಸಾಯನಿಕ ಗೊಬ್ಬರಗಳ ಬಳಕೆಯಿಂದ ಕೃಷಿ ಕ್ಷೇತ್ರಕ್ಕೆ ಆರ್ಥಿಕ ಹೊರೆ ಹೆಚ್ಚಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಹಾಸ್ಯಾಸ್ಪದ: ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಹೆಚ್ಚಳದ ಮೂಲಕ ಹಾಲು ಉತ್ಪಾದನೆಗೆ ಉತ್ತೇಜನ ನೀಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತೊಂದೆಡೆ ಹಾಲು ಕೊಡುವ ಗೋವುಗಳ ಹತ್ಯೆಗೆ ಅವಕಾಶ ಕಲ್ಪಿಸುವ ಕಾರ್ಯ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿರುವ ದೇವಸ್ಥಾನ ಸಮಿತಿಗಳಿಗೆ ನೇಮಕವಾಗಿದ್ದ ದೇವಸ್ಥಾನ ವ್ಯವಸ್ಥಾಪನಾ ಮಂಡಳಿಗಳ ಸದಸ್ಯತ್ವ ರದ್ದುಗೊಳಿಸಿ ದೇವಸ್ಥಾನಗಳನ್ನು ಕಾಂಗ್ರೆಸ್ಸೀಕರಣಗೊಳಿಸಲು ಹುನ್ನಾರ ನಡೆಸಿದೆ. ದೇವಸ್ಥಾನ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸುವ ಕುತಂತ್ರ ಇದಾಗಿದೆ ಎಂದು ದೂರಿದರು.
ರಾಜ್ಯ ಸರ್ಕಾರ ಕೂಡಲೇ ಗೋ ಹತ್ಯೆ ನಿಷೇಧ ಕಾಯಿದೆ ತಿರಸ್ಕರಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್, ತ್ರಿವಿಕ್ರಮ್ ಜೋಷಿ, ಆರ್.ತಿಮ್ಮಯ್ಯ, ಜಗದೀಶ್ ವಕೀಲರು, ಬಂಡೇಶ್ ವಲ್ಕಂದಿನ್ನಿ, ದೇವಿಸಿಂಗ್ ಠಾಕೂರ್, ಕಡಗೋಳು ರಾಮಚಂದ್ರ, ಸಿದ್ದಲಿಂಗಯ್ಯಸ್ವಾಮಿ, ಅಕ್ಬರ್ ಪಾಷಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.