ರಾಯಚೂರು

ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ಜಿಲ್ಲಾಡಳಿತಕ್ಕೆ ಮನವಿ

Published On :

ರಾಯಚೂರು: ನಿರುದ್ಯೋಗ ಸಮಸ್ಯೆ ಪರಿಹಾರ ಸೇರಿದಂತೆ ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಐಡಿವೈಒ ಸಂಘಟನೆಯ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಿಲ್ಲೆಯ ವಿವಿಧೆಡೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ವಸತಿ ನಿಲಯಗಳು ಸದ್ಯ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಗೆ ಸ್ವಂತ ಕಟ್ಟಡ ಒದಗಿಸಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಒದಗಿಸಬೇಕು. ಸ್ವಚ್ಛತೆ ಕಾಪಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಮತ್ತು ವಿಶೇಷ ಸಾರಿಗೆ ಸೌಲಭ್ಯ ಕೈಗೊಳ್ಳಬೇಕು. ಆರ್ಸೆನಿಕ್ ಯುಕ್ತ ಸಮಸ್ಯಾತ್ಮಕ ಗ್ರಾಮಗಳಿಗೆ ಶುದ್ಧ ಕುಡಿವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಗರ ಸೇರಿ ಜಿಲ್ಲಾದ್ಯಂತ ರಸ್ತೆಗಳು ಹದಗೆಟ್ಟಿದ್ದು, ರಸ್ತೆ ದುರಸ್ತಿ ಮೂಲಕ ಸಂಚಾರ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕ್ರೀಡಾಂಗಣ ದುರಸ್ತಿ, ವಿವಿಧ ಪ್ರಮಾಣ ಪತ್ರಗಳ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಉದ್ಯೋಗ ಖಾತ್ರಿ ಯೋಜನೆ ಅಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವುದು, ವೃತ್ತಿಪರ ಕಾಲೇಜುಗಳಿಗೆ ಸ್ವಂತ ಕಟ್ಟಡ, ಬೋಧಕ ಸಿಬ್ಬಂದಿ ಸೇರಿ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಸಿನಿಮಾಗಳ ಭಿತ್ತಿಪತ್ರ ನಿಷೇಧಗೊಳಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಶರಣಪ್ಪ ಉದ್ಬಾಳ್, ಚನ್ನಬಸವ ಜಾನೇಕಲ್, ಅನಿಲ್ ಜಾಧವ್, ಹನುಮಂತ, ಚನ್ನಬಸವ, ಗೋಪಾಲ್, ಇರ್ಫಾನ್, ಮಲ್ಲಿಕಾರ್ಜುನ್, ಧನಂಜಯ, ಹನುಮಂತ, ಸದ್ದಾಂ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.