ರಾಯಚೂರು

ದೌರ್ಜನ್ಯ ತಡೆ ಕಾಯಿದೆ ಅಂಗೀಕಾರಕ್ಕೆ ಒತ್ತಾಯ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಡಿ.5
ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ 1989ರ ತಿದ್ದುಪಡಿಗಳನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿ, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ 1989ಕ್ಕೆ ತಿದ್ದುಪಡಿ ತರಬೇಕು. ಕಾಯಿದೆಯಲ್ಲಿ ಇದುವರೆಗೆ ಗುರುತಿಸದ ಹೊಸ ಅಪರಾಧಗಳನ್ನು ಸೇರ್ಪಡೆಗೊಳಿಸಬೇಕು, ದೌರ್ಜನ್ಯಕ್ಕೆ ಮತ್ತಷ್ಟು ಶಿಕ್ಷಣೆ ಕಠಿಣಗೊಳಿಸಬೇಕು ಎಂದು ಆಗ್ರಹಿಸಿದರು.
ಕಾಲಮಿತಿಯಲ್ಲಿ ವಿಚಾರಣೆ ಪೂರ್ಣಗೊಳ್ಳಬೇಕು: ದೌರ್ಜನ್ಯಕ್ಕೊಳಗಾದ ಎಸ್ಸಿ, ಎಸ್ಟಿ ಜನಾಂಗದವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಬೇಕು. ಘಟನೆ ನಡೆದ ಕೂಡಲೇ ದೌರ್ಜನ್ಯಕ್ಕೆ ಒಳಗಾದಂಥವರಿಗೆ ಪುನಾ ವಸತಿಗೆ ಕ್ರಮ ಕೈಗೊಳ್ಳಬೇಕು. ಹೆಚ್ಚುವರಿ ತ್ವರಿತ ವಿಲೇವಾರಿ ನ್ಯಾಯಾಲಯಗಳನ್ನು ಸ್ಥಾಪಿಸಿ ಅವುಗಳ ಮೂಲಕ ಎಸ್ಸಿ, ಎಸ್ಟಿಗಳ ಮೇಲಿನ ದೌರ್ಜನ್ಯದ ಪ್ರಕರಣಗಳ ವಿಚಾರಣೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಶಿಕ್ಷೆಯ ಪ್ರಮಾಣ ಪ್ರಕಟಿಸುವಂತಾಗಬೇಕೆಂದು ಒತ್ತಾಯಿಸಿದರು.
ದೌರ್ಜನ್ಯಕ್ಕೆ ಒಳಗಾದವರು ಮತ್ತು ಸಾಕ್ಷಿದಾರರ ಹಕ್ಕುಗಳನ್ನು ಕಾಯಿದೆಯಲ್ಲಿ ವಿವರಿಸಬೇಕು. ಜಾತಿ ತಾರತಮ್ಯ ಮಾಡುವ ಎಲ್ಲ ಆಚರಣೆಗಳನ್ನು ಅಪರಾಧಗಳೆಂದು ಪರಿಗಣಿಸಬೇಕು. ಮತ್ತು ವಿಚಾರಣೆಗೆ ಒಳಪಡಿಸಬೇಕು ಎಂಬುದು ಸೇರಿ 13 ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೋರಾಟಗಾರರು ಆಗ್ರಹಿಸಿದರು.
'ಶಾದಿಭಾಗ್ಯ' ವಿಸ್ತರಿಸಿ: ರಾಜ್ಯ ಸರ್ಕಾರ ಶಾದಿಭಾಗ್ಯ ಯೋಜನೆಯಡಿ ದೇವದಾಸಿ ಮಹಿಳೆಯರ ಮಕ್ಕಳ ಮದುವೆಗಳಿಗೂ ಸಹಾಯಧನ ನೀಡುವ ಮೂಲಕ ಸಮಾಜದ ಎಲ್ಲ ವರ್ಗಗಳ ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯ ಮಾಡಬೇಕು. ಮೂಢನಂಬಿಕೆ ಮತ್ತು ಮೌಢದ ಆಚರಣೆ ನಿಷೇಧಿಸಿ ಕಾಯಿದೆ ಜಾರಿಗೆ ತರುವ ಮೊದಲು ಸಾರ್ವಜನಿಕವಾಗಿ ಅಂಥ ಕಾಯಿದೆಯ ಸಾಧಕ- ಬಾಧಕಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ ನಂತರ ಜಾರಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ 2011- 12ನೇ ಸಾಲಿಗೆ 90 ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿದ್ದು, ಫಲಾನುಭವಿಗಳ ಹೆಸರಿನಲ್ಲಿರುವ ಪಿತ್ರಾರ್ಜಿತ ಆಸ್ತಿಯ ವರ್ಗಾವಣೆಗೆ ನಗರಸಭೆಗೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ಈ ನಿಟ್ಟಿನಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದು, ಕೂಡಲೇ ವರ್ಗಾವಣೆ ದಾಖಲೆ ಒದಗಿಸುವಂತೆ ಸೂಚಿಸಲು ಮನವಿ ಮಾಡಿದರು.
ಒತ್ತಾಯ: ನಿವೇಶನ ಹೊಂದಿಲ್ಲದ ದೇವದಾಸಿ ಮಹಿಳೆಯರಿಗೆ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಬೇಕು. ಎಲ್ಲ ದೇವದಾಸಿ ಮಹಿಳೆಯರಿಗೆ ಅಂತ್ಯೋದಯ ಪಡಿತರ ಚೀಟಿಗಳನ್ನು ಕೂಡಲೇ ನೀಡುವತ್ತ ಹಾಗೂ ವಿವಿಧ ಆಹಾರಧಾನ್ಯಗಳ ಪೂರೈಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ದೌರವಾಧ್ಯಕ್ಷ ಕೆ.ಜಿ.ವೀರೇಶ್, ಸಂತೋಷಮ್ಮ, ಈರಮ್ಮ, ತಾಯಮ್ಮ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.