ರಾಯಚೂರು

ಮಾನವ ಹಕ್ಕು ಸಂರಕ್ಷಣೆಯಲ್ಲಿ ವಿಫಲ

Published On :

ಕ.ಪ್ರ.ವಾರ್ತೆ  ರಾಯಚೂರು  ಡಿ. 10 ದೇಶದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಪೂರಕವಾಗಿ ಅನೇಕ ಕಾಯಿದೆಗಳನ್ನು ರೂಪಿಸಲಾಗಿದೆ. ಆದರೆ ಅವುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವಿನ ಕೊರತೆಯಿದೆ. ಅದರಿಂದಾಗಿಯೇ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ನಿಯಂತ್ರಣದಲ್ಲಿ ಹಿನ್ನಡೆಯಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿಜಿಎಂ ಪಾಟೀಲ್ ಕಳವಳ ವ್ಯಕ್ತಪಡಿಸಿದರು.
ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆದಳ ಪ್ರಾಧಿಕಾರದಿಂದ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ, ಸಮಾಜದಲ್ಲಿ ನೆಲೆಸಿರುವ ಎಲ್ಲರೂ ಮಾನವ ಹಕ್ಕುಗಳ ಅರಿಯುವುದು ಅವಶ್ಯ ಎಂದು ಹೇಳಿದರು.
ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗಿ: ದೇಶದಲ್ಲಿ ಅನೇಕ ಕಾನೂನುಗಳಿದ್ದು, ಅವುಗಳ ಬಗ್ಗೆ ತಿಳಿವಳಿಕೆಯ ಕೊರತೆಯಿದೆ. ಅನಕ್ಷರತೆ, ಬಡತನದಂಥ ಸಮಸ್ಯೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಅನೇಕ ಸಂದರ್ಭದಲ್ಲಿ ದಾರಿ ಮಾಡುತ್ತಿರುವುದು ಕಂಡುಬಂದಿದೆ. ಮಾನವ ಹಕ್ಕುಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕಿದೆ ಎಂದು ತಿಳಿಸಿದರು.
ಮತ್ತೊಬ್ಬ ನ್ಯಾಯಾಧೀಶರಾದ ಮಹಮದ್ ಮುಜಾಹಿದ್ ಉಲ್ಲಾ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಂಥ ಘಟನೆಗಳನ್ನು ಎಲ್ಲರೂ ಒಗ್ಗೂಡಿ ವಿರೋಧಿಸುವ ಗುಣ ಬೆಳೆಸಿಕೊಳ್ಳಬೇಕು. ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಮಾಜದಲ್ಲಿ ಬದುಕು ಕಟ್ಟಿಕೊಳ್ಳುವ ಕಾರ್ಯ ಮಾಡುವ ಮೂಲಕ ಹಕ್ಕುಗಳನ್ನು ಗೌರವಿಸುವ ಕಾರ್ಯ ಮಾಡಬೇಕೆಂದು ಸಲಹೆ ನೀಡಿದರು.
ಶೈಕ್ಷಣಿಕ ಪ್ರಗತಿಯಾಗಲಿ: ಶೈಕ್ಷಣಿಕ ಪ್ರಗತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಜತೆಗೆ ಶೈಕ್ಷಣಿಕ ಪ್ರಗತಿಯು ದೇಶದ ನಿವಾಸಿಗಳಲ್ಲಿ ರೂಪಿಸಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಾಲಕರು ತಮ್ಮ ಶಿಕ್ಷಣ ಕೊಡಿಸುವ ಮೂಲಕ ಮಾನವ ಹಕ್ಕುಗಳ ರಕ್ಷಣೆಗೆ ಪೂರಕವಾಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.
ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಅವರ ಬದುಕು ಉತ್ತಮಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು. ಅದರ ಬದಲಿಗೆ ಬಾಲಕಾರ್ಮಿಕ ಪದ್ಧತಿಗೆ ಮಕ್ಕಳನ್ನೂ ದೂಡುವುದು ಅಪರಾಧ. ಬಾಲಕಾರ್ಮಿಕ ಪದ್ಧತಿಗೆ ಪ್ರೋತ್ಸಾಹಿಸುವುದು ಶಿಕ್ಷಾರ್ಹವಾಗಿದ್ದು, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದರು.
ಕಾನೂನು ಅರಿವು ಇಂದಿಗೂ ವಿರಳ: ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಮಾತನಾಡಿ, ಜನರಿಂದ ಜನರ ಮೇಲಾಗುತ್ತಿರುವ ದೌರ್ಜನ್ಯ ತಡೆಯುವುದು ಎಲ್ಲರ ಉದ್ದೇಶವಾಗಬೇಕು. ದೇಶದಲ್ಲಿ ರೂಪಿಸಿದ ಕಾಯಿದೆಗಳಿಂದಾಗಿಯೇ ಎಲ್ಲೆಡೆ ಸುಭಿಕ್ಷೆ ಎಂದಿದೆ. ಆದರೆ ಕಾಯಿದೆಗಳ ಬಗ್ಗೆ ಅನೇಕರಿಗೆ ಈಗಲೂ ಅರಿವಿಲ್ಲದಿರುವುದು ಸಮಸ್ಯೆಗಳನ್ನು ಹಾಗೆಯೇ ಉಳಿಯುಂತೆ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಮಾಜದ ವಿಕಾಸದೊಂದಿಗೆ ದೌರ್ಜನ್ಯದ ಪ್ರಕರಣಗಳಲ್ಲೂ ಗಣನೀಯ ಏರಿಕೆಯಾಗುತ್ತಿರುವುದು ವಿಷಾದಕರ ಸಂಗತಿ. ಜಾತಿ- ಮತ- ಪಂಥದ ಹೆಸರಿನಲ್ಲಿ ಸಮಾಜದ ವಿಗಂಡಣೆ ಸರಿಯಲ್ಲ.
ಸಮಾನತೆ ಎಲ್ಲರ ಆಶಯವಾಗಬೇಕು ಎಂದ ಅವರು, ಮುಂದುವರಿದ ದೇಶದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಅಲ್ಲಿನ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತವೆ ಎಂದು ಹೇಳಿದರು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್, ಅಪರ ಜಿಲ್ಲಾಧಿಕಾರಿ ತಿಮ್ಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಡಿಡಿಪಿಯು ಪ್ರೊ. ಸಿ.ಟಿ. ಕಲ್ಲಯ್ಯ, ಬಸವರಾಜ ಬೋರೆಡ್ಡಿ, ಯುನಿಸೆಫ್‌ನ ರಾಘವೇಂದ್ರ ಭಟ್ ಸೇರಿ ಅನೇಕರಿದ್ದರು.
ವಿವಿಧೆಡೆಯಿಂದ ಆಗಮಿಸಿದ್ದ ಶಾಲಾ ಮಕ್ಕಳು ಹಾಗೂ ಜನತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ರಂಗಮಂದಿರದವರೆಗೆ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.