ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ನ್ಯಾ. ಪಾಟೀಲ್ ಚಾಲನೆ
ರಾಯಚೂರು: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡಾಕೂಟ ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿ.ಜಿ.ಎಂ. ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಸಮಾಜದ ಹಿತ ಕಾಯುವಲ್ಲಿ ಸತತ ದುಡಿಯುವ ಪೊಲೀಸ್ ಸಿಬ್ಬಂದಿಗೆ ತಮ್ಮ ದೈಹಿಕ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಲು ಕ್ರೀಡಾಕೂಟಗಳ ಅವಕಾಶ ಕಲ್ಪಿಸಲಿವೆ ಎಂದು ತಿಳಿಸಿದರು.
ಕ್ರೀಡಾ ಮನೋಭಾವ: ಕ್ರೀಡಾಕೂಟಗಳ ಮೂಲಕ ಪ್ರತಿಭೆ ಹೊರಹಾಕಲು ಸಾಧ್ಯವಾಗುತ್ತದೆ. ಜತೆಗೆ ಕ್ರೀಡಾ ಮನೋಭಾವ, ತಾಳ್ಮೆ ಬೆಳೆಸಿಕೊಂಡು ವೃತ್ತಿಯಲ್ಲಿಯೂ ಅಳವಡಿಸಿಕೊಂಡಲ್ಲಿ ನ್ಯಾಯಕೋರಿ ಪೊಲೀಸ್ ಠಾಣೆಗಳಿಗೆ ಆಗಮಿಸುವವರಿಗೆ ಸಮರ್ಪಕ ಸೇವೆ ಒದಗಿಸುವತ್ತ ಸಿಬ್ಬಂದಿ ಗಮನಹರಿಸಬೇಕೆಂದು ಹೇಳಿದರು.
ಮತ್ತೊಬ್ಬ ಜಿಲ್ಲಾ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ಮಾತನಾಡಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಪೊಲೀಸ್ ಸಿಬ್ಬಂದಿ ನಿರಂತರ ಶ್ರಮಿಸುತ್ತಾರೆ. ದೇಶದ ಗಡಿಯನ್ನು ಸೈನಿಕರು ಕಾಯುವ ಮೂಲಕ ಸುರಕ್ಷತೆಯನ್ನು ಒದಗಿಸಿದರೆ ದೇಶದ ಒಳಗೆ ಪೊಲೀಸ್ ಸಿಬ್ಬಂದಿ ನಿವಾಸಿಗಳಿಗೆ ಸುರಕ್ಷತೆ ನೀಡುವ ಮೂಲಕ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆತ್ಮಸ್ಥೈರ್ಯ: ಕ್ರೀಡೆಗಳಲ್ಲಿ ಎಲ್ಲ ಪೊಲೀಸ್ ಸಿಬ್ಬಂದಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಂಡು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು, ಅಳವಡಿಸಿಕೊಂಡಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗಲಿದೆ ಎಂದು ಸತೀಶ್ ಸಿಂಗ್ ಹೇಳಿದರು.
ಜಿಲ್ಲಾ ನ್ಯಾಯಾಧೀಶ ಕಾಡ್ಲೂರು ಸತ್ಯನಾರಾಯಣಾಚಾರ್ಯ, ಪೊಲೀಸ್ ಸಿಬ್ಬಂದಿಯ ಕಾರ್ಯನಿರ್ವಹಣೆಯ ವೇಳೆ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ತಾಳ್ಮೆ ಮತ್ತು ಸಹನೆ ಬಹಳ ಅವಶ್ಯಕ. ಈ ನಿಟ್ಟಿನಲ್ಲಿ ಕ್ರೀಡಾಕೂಟಗಳು ಪೊಲೀಸ್ ಸಿಬ್ಬಂದಿಗೆ ನೆರವಾಗಲಿವೆ ಎಂದು ಹೇಳಿದರು. ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್, ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ 6 ವಿವಿಧ ವಿಭಾಗಗಳ ಪೊಲೀಸ್ ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಈ ವೇಳೆ ಕ್ರೀಡಾಳುಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಕಳೆದ ಬಾರಿಯ ಕ್ರೀಡಾಕೂಟದ ಚಾಂಪಿಯನ್ ವೀರೇಶ್ ಕ್ರೀಡಾಜ್ಯೋತಿ ಬೆಳಗಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

