ರಾಯಚೂರು

ಮಾರ್ಚ್‌ನಲ್ಲಿ ಗ್ರಾಮೀಣ ಅಂಚೆ ನೌಕರರಿಂದ ಚಳವಳಿ

Published On :

ರಾಯಚೂರು: ಕಳೆದ ಅನೇಕ ದಶಕಗಳಿಂದ ದೇಶದ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಚೆ ಇಲಾಖೆಯ ನೌಕರರ ಸೇವೆ ಕಾಯಮಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್‌ನಲ್ಲಿ ವಿವಿಧ ಟ್ರೇಡ್ ಯೂನಿಯನ್‌ಗಳ ಜತೆಗೂಡಿ ಚಳವಳಿ ನಡೆಸಲಾಗುತ್ತದೆ ಎಂದು ಅಂಚೆ ಇಲಾಖೆಯ 3ನೇ ದರ್ಜೆ ನೌಕರರ ಸಂಘದ ಗೌರವಾಧ್ಯಕ್ಷ ಸದಾಶಿವಪ್ಪ ಹೇಳಿದರು.
ಅವರು ನಗರದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ದೇಶದ ವಿವಿಧೆಡೆ 3 ಲಕ್ಷ ಸಿಬ್ಬಂದಿ ಕಡಿಮೆ ವೇತನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಕಳೆದ ಅನೇಕ ಸಂದರ್ಭದಲ್ಲಿ ಹೋರಾಟ ನಡೆಸಿದಾಗಲೆಲ್ಲ ಈ ಸಿಬ್ಬಂದಿಯ ಸೇವೆ ಕಾಯಂಗೊಳಿಸಬೇಕು. ಎಲ್ಲ ಅಂಚೆ ನೌಕರರಂತೆ ವೇತನ ನೀಡುವಂತೆ ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲಿ ಹೋರಾಟ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಸೇವೆ ಕಾಯಂಗೆ ಒತ್ತಾಯ: ಅಂಚೆ ಇಲಾಖೆಯ ಮೂರನೇ ದರ್ಜೆಯ ಸಿಬ್ಬಂದಿಗೆ ವೇತನ ಪರಿಷ್ಕರಿಸುವತ್ತ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತಾಳಿದೆ. ಸಿಬ್ಬಂದಿಗೆ ಸಮವಸ್ತ್ರ ನೀಡುತ್ತಿಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಯಾವುದೇ ರೀತಿಯ ಸವಲತ್ತು ನೀಡುತ್ತಿಲ್ಲ ಎಂದು ಟೀಕಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಪ್ರತಿ ತಿಂಗಳು ಸಮರ್ಪಕ ವೇತನ ನೀಡುತ್ತಿಲ್ಲ. ವಿವಿಧ ಸವಲತ್ತು ನೀಡುತ್ತಿಲ್ಲ. ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ವರದಿಯನ್ನು ಪರಿಗಣಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಸೇವೆ ಕಾಯಮಾತಿಗೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇಂದು ಸಮ್ಮೇಳನ: ಅಂಚೆ ನೌಕರರ ಸಮಸ್ಯೆಗಳ ಕುರಿತು ಚರ್ಚಿಸಲು ಪ್ರತಿ ಎರಡು ವರ್ಷಗಳಿಗೊಮ್ಮೆ ಸಂಘದ ದ್ವೈವಾರ್ಷಿಕ ಸಮ್ಮೇಳನ ಆಯೋಜಿಸಲಾಗುತ್ತದೆ. ನಗರದಲ್ಲಿ ಡಿ.23ರಂದು ಇಂಥ ಸಮ್ಮೇಳನ ಆಯೋಜಿಸಿದ್ದು, ನಗರದ ವಿಠ್ಠಲ ರುಕ್ಮಿಣಿ ಕೃಷ್ಣ ಮಂದಿರದಲ್ಲಿ ಬೆಳಗ್ಗೆ 11ಕ್ಕೆ ಸಮ್ಮೇಳನ ನಡೆಯಲಿದೆ ಎಂದು ಹೇಳಿದರು.
ಸಮ್ಮೇಳನದ ಸಾನ್ನಿಧ್ಯವನ್ನು ವೀರಭದ್ರ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ. ಈರಣ್ಣ, ಪ್ರಮುಖರಾದ ಬಿ.ವಿ. ನಾಯಕ, ಕಡಗೋಲ ಶರಣಪ್ಪ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಅಂಚೆ ನೌಕರರ ಸಂಘದ ವಿವಿಧ ದರ್ಜೆಯ ಸಂಘಗಳ ಅಧ್ಯಕ್ಷರೂ ಸಹ ಸಮ್ಮೇಳನದಲ್ಲಿ ಭಾಗವಹಿಸಿ ನೌಕರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಹೋರಾಟದ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುತ್ತದೆ. ಈ ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲ ನೌಕರರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಆರ್. ಈರಣ್ಣ, ಭೀಮಸೇನ್, ತಿಪ್ಪಣ್ಣ, ಲಿಂಗಣ್ಣ, ಶಿವಾನಂದ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.