ರಾಯಚೂರು

'ಕೈ' ಸರ್ಕಾರದ ತಾರತಮ್ಯ ನೀತಿ

Published On :

ಕ.ಪ್ರ. ವಾರ್ತೆ  ರಾಯಚೂರು  ಡಿ.23
ರಾಜ್ಯ ಸರ್ಕಾರ ಕೂಡಲೇ ಮುನಿರಾಬಾದ್- ಮಹೆಬೂಬ್‌ನಗರ ನೂತನ ರೈಲು ಮಾರ್ಗ ನಿರ್ಮಾಣ ಕಾರ್ಯದ ಭೂಸ್ವಾಧೀನ ಪ್ರಕ್ರಿಯೆಯನ್ನು ಮಾನವಿ ತಾಲೂಕಿನಲ್ಲಿ ಚುರುಕುಗೊಳಿಸಬೇಕು ಎಂದು ಒತ್ತಾಯಿಸಿರುವ ಬಿಜೆಪಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿದೆ.
ನಗರದಲ್ಲಿ ಸೋಮವಾರ ಜಿಲ್ಲಾ ಬಿಜೆಪಿಯಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಜಂಟಿಯಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್, ಶಾಸಕ ತಿಪ್ಪರಾಜು ಹವಾಲ್ದಾರ್, ತ್ರಿವಿಕ್ರಮ್ ಜೋಷಿ ಅವರು, ಸಿಂಧನೂರು ತಾಲೂಕಿನವರೆಗೆ ಮಾತ್ರ ಸದ್ಯ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಆದರೆ ಮಾನವಿ ತಾಲೂಕಿನಲ್ಲಿ ರೈಲು ಮಾರ್ಗಕ್ಕಾಗಿ ಪ್ರಕ್ರಿಯೆ ನಿಧಾನಗತಿಯಲ್ಲಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ: ಜಿಲ್ಲೆಯಲ್ಲಿ ಕಳೆದ ಸರ್ಕಾರದ ಅವಧಿಯಲ್ಲಿ ಐಟಿಐ ಸ್ಥಾಪನೆಗೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಹಾಗೆಯೇ ದೇವದುರ್ಗ ತಾಲೂಕಿನಲ್ಲಿ ಐದು ಕಡೆ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆ, ಡಿಪ್ಲೋಮಾ ಕಾಲೇಜು ಸ್ಥಾಪನೆ ಮತ್ತು ಎಂಜಿನಿಯರಿಂಗ್ ಕಾಲೇಜು ಆರಂಭಕ್ಕೆ ನಿರ್ಧರಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ದೂರಿದರು.
ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ 1,200 ಕೋಟಿ ಅನುದಾನ ನೀಡಲಾಗಿತ್ತು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಗಲೇ ಅನುಮೋದನೆ ನೀಡಿದ್ದು ಟೆಂಡರ್ ಪ್ರಕ್ರಿಯೆಯಲ್ಲಿರುವ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿಲ್ಲ. ಇದರಿಂದ ಜನತೆಗೆ ಲಾಭ ಸಿಗದಂತಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕಾರ್ಯ ಮರೆಮಾಚುವ ಯತ್ನ: ದೇವದುರ್ಗ ಪಟ್ಟಣಕ್ಕೆ 24್ಗ7 ಕುಡಿಯುವ ನೀರಿನ ಯೋಜನೆಯನ್ನು ಕಳೆದ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಕ್ರಮ ಕೈಗೊಳ್ಳಲಾಗಿತ್ತು. ಆ ಕಾಮಗಾರಿಗೆ ಕನಿಷ್ಠ ಅಡಿಗಲ್ಲು ನೆರವೇರಿಸದೆ ಕಾಮಗಾರಿ ಆರಂಭಿಸಲಾಗಿದೆ. ಆ ಮೂಲಕ ಬಿಜೆಪಿ ಅವಧಿಯ ಕಾಮಗಾರಿಗಳ ಬಗ್ಗೆ ಜನತೆಗೆ ತಿಳಿಯದಂತೆ ಮಾಡಲಾಗಿದೆ ಎಂದು ದೂರಿದರು.
ಬಿಜೆಪಿ ಸರ್ಕಾರವು ಗುಲ್ಬರ್ಗದಲ್ಲಿ ನಡೆಸಿದ ಸಚಿವ ಸಂಪುಟದ ಸಭೆಯಲ್ಲಿ ಅನೇಕ ಕೊಡುಗೆಗಳನ್ನು ನೀಡಿತ್ತು. ಆಗ ನಿರ್ಣಯಗಳ ಬಗ್ಗೆ ಉಡಾಫೆಯ ಮಾತನಾಡಿದ್ದ ಕಾಂಗ್ರೆಸ್, ಸದ್ಯ ಅವೇ ನಿರ್ಣಯಗಳನ್ನು ತಾನೇ ನೀಡಿದಂತೆ ಅಡಿಗಲ್ಲು ನೆರವೇರಿಸಲು ಮುಂದಾಗಿದೆ ಎಂದು ಟೀಕಿಸಿದರು.
ಸಿಎಂ ತಾರತಮ್ಯ ಧೋರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ತಮ್ಮ ಪಕ್ಷದ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಭೇಟಿ ನೀಡುತ್ತಿದ್ದಾರೆ. ಹಾಗೆಯೇ ಕಾಂಗ್ರೆಸ್ ಶಾಸಕರಿಗೆ ಮಾತ್ರ ಸಮರ್ಪಕ ಅನುದಾನ ಬಿಡುಗಡೆ ಮಾಡುತ್ತಿದ್ದಾರೆ. ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಇದುವರೆಗೆ 90 ಲಕ್ಷ ಅನುದಾನದ ಪೈಕಿ ಕೇವಲ 20 ಲಕ್ಷ ನೀಡಲಾಗಿದೆ ಎಂದು ಶಾಸಕ ತಿಪ್ಪರಾಜು ಹವಾಲ್ದಾರ್ ಆರೋಪಿಸಿದರು.
ಇಂಥ ತಾರತಮ್ಯ ಮಾಡುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಲ್ಲಿಸಬೇಕು. ಎಲ್ಲ ಕ್ಷೇತ್ರಗಳ ಶಾಸಕರಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಮರ್ಪಕ ಅನುದಾನ ಒದಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಆರ್.ತಿಮ್ಮಯ್ಯ, ಬಂಡೇಶ ವಲ್ಕಂದಿನ್ನಿ, ಅಚ್ಯುತರೆಡ್ಡಿ, ರಮಾನಂದ ಯಾದವ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.