ರಾಯಚೂರು

ಜಿಪಂ ಉಪ ಕಾರ್ಯದರ್ಶಿ ವರ್ಗಾವಣೆಗೆ ವ್ಯಾಪಕ ವಿರೋಧ

Published On :

ಕ.ಪ್ರ. ವಾರ್ತೆ ,  ರಾಯಚೂರು ,  ಡಿ.24
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಅವರ ವರ್ಗಾವಣೆ ಮಾಡಿ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಈ ಕುರಿತು ರಾಜ್ಯ ಗ್ರಾಪಂ ನೌಕರರ ಸಂಘವು ಜಿಲ್ಲಾಡಳಿತದ ಮೂಲಕ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿ, ಮುಕ್ಕಣ್ಣ ಕರಿಗಾರ್ ಅವರು ನಿಷ್ಠಾವಂತ ಅಧಿಕಾರಿಯಾಗಿದ್ದು ಅವರು ಜಿಲ್ಲೆಗೆ ವರ್ಗಾವಾಗಿ ಕೆಲವೇ ತಿಂಗಳಾಗಿದ್ದು ಕಡಿಮೆ ಅವಧಿಯಲ್ಲಿ ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದರು. ಕಾರಣ ಸರ್ಕಾರ ಕೂಡಲೇ ಮಕ್ಕಣ್ಣ ಕರಿಗಾರ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡದೇ ಇಲ್ಲಿಯೇ ಮುಂದುವರಿಸಬೇಕು. ತಪ್ಪಿದಲ್ಲಿ ಜಿಲ್ಲೆಯ ಎಲ್ಲ ಗ್ರಾಪಂ ನೌಕರರು ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷ ಮಲ್ಲಪ್ಪ ಹೂಗಾರ್, ಉಪಾಧ್ಯಕ್ಷ ಕೆ. ನಾರಾಯಣ, ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ ಜಂಬಲದಿನ್ನಿ ಸೇರಿ ಇನ್ನಿತರರು ಒತ್ತಾಯಿಸಿದ್ದಾರೆ.
ಆಗ್ರಹ: ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಅವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸದಿದ್ದರೆ ಹೋರಾಟ ನಡೆಸುವುದಾಗಿ ಕುರುಬ ಸಮಾಜದ ಮುಖಂಡ ರಾಮು ಎಚ್ಚರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ವರ್ಗಾವಣೆಗೆ ತಡೆಯಾಜ್ಞೆ ನೀಡಿದ್ದರೂ ಸರ್ಕಾರ ಮುಕ್ಕಣ್ಣ ಕರಿಗಾರ್ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಸರ್ಕಾರದ ಕ್ರಮ ನ್ಯಾಯಾಂಗ ನಿಂದನೆಯಾಗಿದ್ದು, ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಟೀಕಿಸಿದ್ದಾರೆ.
ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಅವರು ಕೇವಲ 4 ತಿಂಗಳ ಹಿಂದಷ್ಟೇ ಕೆಎಟಿ ಆದೇಶದ ಹಿನ್ನೆಲೆ ಅಧಿಕಾರ ವಹಿಸಿಕೊಂಡಿದ್ದು, ಅವರನ್ನು ಪುನಃ ಸದ್ಯದ ಹುದ್ದೆಯಲ್ಲಿಯೇ ಮುಂದುವರಿಸದಿದ್ದಲ್ಲಿ ಹಿಂದುಳಿದ ವರ್ಗಗಳ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಕೈಗೊಳ್ಳುತ್ತಿರುವ ಕ್ರಮದ ವಿರುದ್ಧ ಕುರುಬ ಸಮಾಜದಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನೌಕರರ ಸಂಘದ ಒತ್ತಾಯ: ದಕ್ಷ ಹಾಗೂ ಕ್ರಿಯಾಶೀಲ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಅಧಿಕಾರಿ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಅವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಅವರು, ರಾಜ್ಯ ಸರ್ಕಾರ ಕೆಎಟಿ ತಡೆಯಾಜ್ಞೆಯಿದ್ದಾಗ್ಯೂ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಅವರನ್ನು ವರ್ಗಾವಣೆ ಮಾಡಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.