ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ಡಾ. ಶರಣಪ್ರಕಾಶ
ರಾಯಚೂರು; ತಡೆರಹಿತ ವಿದ್ಯುತ್ ಸಂಪರ್ಕದ ಕಾಮಗಾರಿಯ ಅಕ್ರಮ ಮತ್ತು ನಕಲಿ ಇ-ಸ್ಟಾಂಪ್ ಬಳಕೆ ಕುರಿತ ಹಗರಣಗಳಿಗೆ ಸಂಬಂಧಿಸಿ ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಪಾರು ಮಾಡುವ ಪ್ರಶ್ನೆಯೇ ಇಲ್ಲ. ಸೂಕ್ತ ತನಿಖೆ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರಕ್ಕೆ ಸಮರ್ಪಕ ಕುಡಿವ ನೀರು ಪೂರೈಸುವ ಉದ್ದೇಶದಿಂದ ತಡೆರಹಿತ ವಿದ್ಯುತ್ ಪೂರೈಕೆ ಮಾರ್ಗ ಅಳವಡಿಕೆಯ ಕಾಮಗಾರಿಯಲ್ಲಿ ಅಕ್ರಮ ನಡೆದಿದ್ದು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಪೂರ್ತಿ ಹಣ ಪಾವತಿಸಿದ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು ಈ ಅಕ್ರಮದಲ್ಲಿ ಶಾಮೀಲಾಗಿರುವ ಯಾರಿಗೂ ಕ್ಷಮೆಯಿಲ್ಲ ಎಂದು ಎಚ್ಚರಿಸಿದರು.
ಈಗಾಗಲೇ ತನಿಖೆ ನಡೆದಿದೆ: ಅದೇ ರೀತಿ ಜಿಲ್ಲೆಯ ಸಿರವಾರ ಪಟ್ಟಣ ಸೇರಿದಂತೆ ವಿವಿಧೆಡೆ ನಕಲಿ ಇ-ಸ್ಟ್ಯಾಂಪ್ ಮಾರಾಟ ಜಾಲವಿರುವುದರ ಬಗ್ಗೆ ಈಗಾಗಲೇ ತನಿಖೆ ನಡೆದಿದೆ, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಜತೆಗೆ ಈ ಬಗ್ಗೆ ಚರ್ಚಿಸಿ ಅಗತ್ಯ ಬಿದ್ದಲ್ಲಿ ಸಿಐಡಿ ತನಿಖೆಗೆ ಶಿಫಾರಸು ಮಾಡಲಾಗುತ್ತದೆ ಎಂದು ಹೇಳಿದರು.
ಈಗಾಗಲೇ ತಡೆರಹಿತ ವಿದ್ಯುತ್ ಅಕ್ರಮಕ್ಕೆ ಸಂಬಂಧಿಸಿ ತಪ್ಪಿತಸ್ಥರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಅಕ್ರಮದ ಸಂಪೂರ್ಣ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ರವಾನಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದ ಅವರು, ಒಪೆಕ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಒದಗಿಸಲು ಇನ್ನೂ ಕಾಲಾವಕಾಶ ಬೇಕಾಗಲಿದೆ. ಜ.26ಕ್ಕೆ ನಗರದ ರಿಮ್ಸ್ ಬೋಧಕ ಆಸ್ಪತ್ರೆಯನ್ನು ಅದರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಯೋಜಿಸಲಾಗಿತ್ತು. ಆದರೆ ಆ ಕಾರ್ಯವೂ ವಿಳಂಬವಾಗಲಿದೆ ಎಂದು ತಿಳಿಸಿದರು.
9 ಕೋಟಿಯ ಕ್ರಿಯಾಯೋಜನೆ: ನಗರದ ಚತುಷ್ಪಥ ರಸ್ತೆ ಮಧ್ಯದಲ್ಲಿ ಕುಡಿವ ನೀರಿನ ಕೊಳವೆ ಮಾರ್ಗವಿದ್ದು, ಅದರಿಂದಾಗಿ ಪೈಪ್ ಒಡೆದು ನೀರು ಸೋರಿಕೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ 10 ಕಿಮೀ ಉದ್ದದ ಕೊಳವೆ ಮಾರ್ಗವನ್ನು ಸ್ಥಳಾಂತರಿಸಲು 9.50 ಕೋಟಿ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ನಗರಸಭೆಯಲ್ಲಿನ ಎಲ್ಲ ಹಣಕಾಸು ಲಭ್ಯತೆ ಮತ್ತು ಕಾಮಗಾರಿ ಕೈಗೊಂಡ ಬಗ್ಗೆ ಶೀಘ್ರದಲ್ಲಿಯೇ ಪ್ರತ್ಯೇಕ ಸಭೆ ಕರೆದು ಪ್ರಗತಿ ಪರಿಶೀಲಿಸಲಾಗುತ್ತದೆ. ನಗರಸಭೆಯಿಂದ ಕೈಗೊಂಡ ಅಭಿವೃದ್ಧಿ ಯೋಜನೆಗಳು, ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಧ ಮಾಜಿ ಶಾಸಕ ರಾಜಾ ರಾಯಪ್ಪ ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎ.ವಸಂತಕುಮಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

