ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ
ರಾಯಚೂರು: ಜಿಲ್ಲೆಯ 5 ತಾಲೂಕುಗಳಲ್ಲಿ ತೊಗರಿ ಖರೀದಿ ಕೇಂದ್ರ ತೆರೆದು ರೈತರಿಂದ ತೊಗರಿ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿದರು.
ನಗರಕ್ಕೆ ಆಗಮಿಸಿದ್ದ ಸಚಿವರಿಗೆ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ ಮತ್ತಿತರರು ಮನವಿ ಸಲ್ಲಿಸಿ, ಹೈ.ಕ. ಭಾಗದ ಯಾದಗಿರಿ, ಗುಲ್ಬರ್ಗ ಮತ್ತು ಬೀದಕ್ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರದಿಂದ ಡಿ. 26ರಂದು ತೊಗರಿ ಖರೀದಿ ಕೇಂದ್ರ ತೆರೆಯಲಾಗಿದೆ. ಆದರೆ ಜಿಲ್ಲೆಯಲ್ಲಿ ಇದುವರೆಗೆ ಖರೀದಿ ಆರಂಭಿಸಿಲ್ಲ ಎಂದು ದೂರಿದರು.
ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯುವ ನಿಟ್ಟಿನಲ್ಲಿ ಸರ್ಕಾರ ನಿರ್ಲಕ್ಷಿಸಿದೆ. 2011- 12ರಲ್ಲಿಯೂ ತೊಗರಿ ಖರೀದಿ ಕೇಂದ್ರ ತೆರೆಯುವಲ್ಲಿ ಆಗಿನ ಸರ್ಕಾರ ಅಸಡ್ಡೆ ತೋರಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಬೆಂಬಲ ಬೆಲೆ 5 ಸಾವಿರಕ್ಕೆ ಪ್ರತಿ ಕ್ವಿಂಟಲ್ನಂತೆ ಬೆಳೆ ಖರೀದಿಸಲು ಈಗಾಗಲೇ ಉಳಿದ ಜಿಲ್ಲೆಗಳಲ್ಲಿ ಚಾಲನೆ ನೀಡಿದ್ದು, ರಾಯಚೂರು ಜಿಲ್ಲೆಯಲ್ಲಿ ಇದುವರೆಗೆ ಖರೀದಿಗೆ ಮುಂದಾಗಿಲ್ಲ ಎಂದು ದೂರಿದರು.
ಜಿಲ್ಲೆಯಲ್ಲಿ ಒಟ್ಟು 46 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ತೊಗರಿ ಬೆಳೆದಿದ್ದು ಮಾರುಕಟ್ಟೆಯಲ್ಲಿ ಸಮರ್ಪಕ ಬೆಲೆಯೂ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯ ಸರ್ಕಾರ ಜಿಲ್ಲೆಯ ಎಲ್ಲ 5 ತಾಲೂಕುಗಳಲ್ಲಿ ತೊಗರಿ ಬೆಳೆಯನ್ನು ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ರೈತ ಸಂಘಧ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ಜಿಲ್ಲಾ ಗೌರವಾಧ್ಯಕ್ಷ ದೊಡ್ಡಬಸನಗೌಡ ಬಲ್ಲಟಗಿ, ಹುಲಿಗೆಪ್ಪ ಜಾಲಿಬೆಂಚಿ, ವೀರನಗೌಡ, ನರಸಿಂಹರಾವ್ ಕುಲಕರ್ಣಿ, ವೀರೇಶಗೌಡ ಕಡಗಂದೊಡ್ಡಿ, ಚಂದಾಸಾಬ್ ಕಡಗಂದೊಡ್ಡಿ, ಸೂಗೂರೆಡ್ಡಿ, ಭೀಮಯ್ಯ ಜಾಲಿಬೆಂಚಿ ಸೇರಿ ಅನೇಕರಿದ್ದರು.
ಬೆಲೆ ಕಡೆಗಣನೆ
ಲಿಂಗಸ್ಗೂರು: ಸರ್ಕಾರ ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿಸುವಲ್ಲಿ ರಾಯಚೂರು ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಆರೋಪಿಸಿದರು. ರಾಯಚೂರು ಜಿಲ್ಲೆಯಲ್ಲಿ ಸುಮಾರು 46 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇ.40ರಷ್ಟು ತೊಗರಿ ಬಿತ್ತನೆ ಮಾಡಿದ್ದು, ಸರ್ಕಾರ ರಾಯಚೂರು ಜಿಲ್ಲೆಯನ್ನು ಕಡೆಗಣಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

