ಸ್ಥಿರ ಸರ್ಕಾರದಿಂದ ಅಭಿವೃದ್ಧಿ ಸಾಧ್ಯ
ರಾಯಚೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಸ್ಥಿರ ಸರ್ಕಾರದಿಂದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ರಾಜ್ಯದ ಜನತೆ ಚಿಂತನೆ ನಡೆಸಲು ಇದು ಸೂಕ್ತ ಕಾಲ ಎಂದು ಜೆಡಿಎಸ್ ನಾಯಕ ಪಿ.ಜಿ.ಆರ್. ಸಿಂಧ್ಯಾ ಸಲಹೆ ನೀಡಿದರು.
ನಗರದಲ್ಲಿ ಶುಕ್ರವಾರ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಿರ ಮತ್ತು ಜನಪರ ಸರ್ಕಾರಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಮತದಾರರು ಈ ಬಗ್ಗೆ ಆಳವಾದ ಚಿಂತನೆ ನಡೆಸಿ ಮುಂದಿನ ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ ಎಂದು ಹೇಳಿದರು.
ರಾಷ್ಟ್ರೀಯ ಪಕ್ಷಗಳಿಂದ ಅಭಿವೃದ್ಧಿ ಸಾಧ್ಯ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ರಾಜ್ಯದ ಅಭಿವೃದ್ಧಿಯಾಗಿಲ್ಲ. ಜೆಡಿಎಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಜೆಡಿಎಸ್ ಜನಪರ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವಂತೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ರಾಜ್ಯ ಸರ್ಕಾರ ಈಗಷ್ಟೇ ನಿದ್ರೆಯಿಂದ ಎದ್ದಿದೆ. ತೊಗರಿ ಮತ್ತು ಬತ್ತ ಬೆಳೆಗಾರರು ತಾವು ಬೆಳೆದ ಎಲ್ಲ ಬೆಳೆಯನ್ನು ಮಾರಾಟ ಮಾಡಿದ ನಂತರ ಬೆಂಬಲ ಬೆಲೆಯನ್ನು ಪ್ರಕಟಿಸುವ ನಾಟಕವಾಡಿದೆ. ಇದೊಂದು ಚುನಾವಣೆ ತಂತ್ರವಷ್ಟೇ ಎಂದು ಲೇವಡಿ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನಪರವಾದ ನಿಲುವಿಲ್ಲ. ಕೇಂದ್ರ ಸರ್ಕಾರ ರಸಗೊಬ್ಬರದ ದರ ಏರಿಕೆ ಮೂಲಕ ಕೃಷಿ ಕ್ಷೇತ್ರದ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೆಚ್ಚಿಸಿದೆ. ಅದರಿಂದಾಗಿ ರೈತರು ಸಾಲ ಮಾಡಿಯೇ ಕೃಷಿಯಲ್ಲಿ ತೊಡಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ರೈತರ ಮೇಲೆ ಸಾಲದ ಹೊರೆ ಹೆಚ್ಚಳಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ನೇರ ಹೊಣೆ ಎಂದು ದೂರಿದರು.
ಸಮಾರಂಭದಲ್ಲಿ ಪ್ರಮುಖರಾದ ಚಿಕ್ಕಮಾದು, ಸಿ.ಎಚ್. ನೀರಾವರಿ, ಅಮರನಾಥ್ ಮಾತನಾಡಿದರು.
ಶಾಸಕ ವೆಂಕಟರಾವ್ ನಾಡಗೌಡ, ಜಿಲ್ಲಾಧ್ಯಕ್ಷ ಮಹಾಂತೇಶ್ ಪಾಟೀಲ್ ಅತ್ತನೂರು, ಕಾರ್ಯಾಧ್ಯಕ್ಷ ಯುಸೂಫ್ ಖಾನ್, ಮಾಜಿ ಸಚಿವ ಎಂ.ಎಸ್. ಪಾಟೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

