20ರಂದು ರಾಜ್ಯಾದ್ಯಂತ ಸಾರಿಗೆ ಸಂಚಾರ ಸ್ಥಗಿತ
ರಾಯಚೂರು: ಕೇಂದ್ರ ಸರ್ಕಾರ ದೇಶಾದ್ಯಂತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಒದಗಿಸುವ ಡೀಸೆಲ್ ಪ್ರತಿ ಲೀ.ಗೆ 12 ಹೆಚ್ಚಳ ಮಾಡಿದ್ದನ್ನು ಖಂಡಿಸಿ ಸಾರಿಗೆ ಸಂಸ್ಥೆಯ ನೌಕರರು ಫೆ. 20ರಂದು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಾರಿಗೆ ಸಂಸ್ಥೆಯ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಶೌಕತ್ ಅಲಿ ಅಲೂರ, ಕೇಂದ್ರ ಸರ್ಕಾರ ಸಾರ್ವಜನಿಕ ರಂಗದಲ್ಲಿನ ಸಾರಿಗೆ ಸಂಸ್ಥೆಗೆ ಡೀಸೆಲ್ ಒದಗಿಸಲು ಪ್ರತಿ ಲೀಟರ್‌ಗೆ 12 ಹೆಚ್ಚಳ ಮಾಡಿರುವುದರಿಂದ ರಾಜ್ಯದಲ್ಲಿನ ಸಾರಿಗೆ ಸಂಸ್ಥೆಯ ಎಲ್ಲ ನಿಗಮಗಳೂ ಸೇರಿ ವರ್ಷಕ್ಕೆ ಸುಮಾರು 550 ಕೋಟಿ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಖಾಸಗಿ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶ: ಖಾಸಗಿ ಸಾರಿಗೆ ಸಂಸ್ಥೆಗಳಿಗೆ ನೀಡಲಾಗುವ ಡಿಸೇಲ್‌ನಲ್ಲಿ ಯಾವುದೇ ರೀತಿಯ ದರ ಏರಿಕೆ ಮಾಡದ ಕೇಂದ್ರ ಸರ್ಕಾರವು, ಕೇವಲ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಗೆ ದರ ಏರಿಕೆ ಮಾಡಿರುವುದು ಸಂಸ್ಥೆಗಳನ್ನು ಮುಚ್ಚುವ ಹಾಗೂ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ಟೀಕಿಸಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಫೆ. 20ರಂದು ಕೇಂದ್ರ ಸರ್ಕಾರದ ಬೆಲೆಯೇರಿಕೆ ನಿರ್ಧಾರ ವಿರೋಧಿಸಿ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಸುಮಾರು 1.10 ಲಕ್ಷ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಕಾರ್ಮಿಕ ವಿರೋಧಿ ಸರ್ಕಾರ: ಕೇಂದ್ರ- ರಾಜ್ಯ ಸರ್ಕಾರಗಳು ತೈಲ ಬೆಲೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಕಾರ್ಮಿಕರ ಹಿತ ಕಾಯಲು ರಚಿಸಿದ ಕಾನೂನುಗಳ ಸಮರ್ಪಕ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತಾಳಿವೆ ಎಂದು ಆರೋಪಿಸಿದರು. ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಸ್ವಾಮ್ಯದ ಉದ್ದಿಮೆಗಳಲ್ಲಿನ ಬಂಡವಾಳ ಹಿಂತೆಗೆಯುವ ಮೂಲಕ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸಿ ಆರ್ಥಿಕ ಅಭದ್ರತೆಗೆ ದಾರಿ ಮಾಡಿಕೊಡುವ ಕಾರ್ಯಕ್ಕೆ ಸರ್ಕಾರಗಳು ಮುಂದಾಗಿವೆ. ಇದರಿಂದ ದೇಶದ ಆರ್ಥಿಕಾಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂದು ದೂರಿದರು.
ಎಲ್ಲರಿಗೂ ನಿವೃತ್ತಿ ವೇತನ ಅನ್ವಯಿಸಿ: ಕಾಯಂ ಸ್ವರೂಪದ ಕೆಲಸಗಳಿಗೆ ಗುತ್ತಿಗೆ ಮೇಲೆ ನೇಮಕಾತಿ ಸರಿಯಲ್ಲ. ನಿವೃತ್ತಿ ವೇತನವನ್ನು ಎಲ್ಲರಿಗೂ ಅನ್ವಯಿಸುವಂತೆ ನಿಗದಿ ಮಾಡಬೇಕು. ವೇತನ ಸೇರಿದಂತೆ ವಿವಿಧ ಸೌಲಭ್ಯ ಎಲ್ಲ ಕಾರ್ಮಿಕರಿಗೆ ದೊರೆಯುವಂತೆ ಆಗ್ರಹಿಸಿ ಫೆ. 20ರಂದು ರಾಜ್ಯವ್ಯಾಪಿ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಸಂಘಟನೆಯ ಪ್ರಮುಖರಾದ ಮುಜಿಬುರ್ ರೆಹಮಾನ್, ಶ್ರೀಶೈಲ ರೆಡ್ಡಿ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

