ರಾಯಚೂರು

ಚುನಾವಣೆ ಪ್ರಣಾಳಿಕೆ ಬಜೆಟ್: ಧರಂ

Published On :

ಲಿಂಗಸ್ಗೂರು: ರಾಜ್ಯದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಶುಕ್ರವಾರ ಮಂಡಿಸಿದ ಬಜೆಟ್ ಬರುವ ವಿಧಾನಸಭೆ ಚುನಾವಣೆ ಪ್ರಣಾಳಿಕೆ ಆಶ್ವಾಸನೆಯ ಭರಪೂರ ಬಜೆಟ್ ಆಗಿದೆ ಎಂದು ಸಂಸದ ಧರಂ ಸಿಂಗ್ ಹೇಳಿದರು.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ ಮಾರ್ಚ್ ಅಂತ್ಯದವರೆಗೆ ಮುಂದುವರಿಯಲಿದ್ದು, ಜಗದೀಶ ಶೆಟ್ಟರ್ ಮಂಡಿಸಿದ ಬಜೆಟ್ ಬರುವ ಏಪ್ರಿಲ್‌ನಿಂದ ಜಾರಿಯಾಗಲಿದೆ. ಅಷ್ಟರಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದು, ಹೀಗಾಗಿ ಪ್ರಸ್ತುತ ಬಜೆಟ್ ಚುನಾವಣೆ ದೃಷ್ಟಿಕೋನದ ಕಾರ್ಯಗತವಾಗದ ಬಜೆಟ್ ಎಂದರು.
ಬರಗಾಲ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ ಬೇಸಿಗೆ ಸಮೀಪಿಸುತ್ತಿದ್ದು ಕುಡಿವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬದಲು ಪರಸ್ಪರ ಕಚ್ಚಾಟದಲ್ಲಿ ತೊಡಗಿ ಅಭಿವೃದ್ಧಿ ಕಡೆಗಣಿಸಲಾಗಿದೆ. ಬರುವ ಚುನಾವಣೆಯಲ್ಲಿ ಜನತೆ ಉತ್ತರ ನೀಡಲಿದ್ದಾರೆಂದು ತಿಳಿಸಿದರು.  ಹಿಂದುಳಿದ ಹೈದ್ರಾಬಾದ್ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕಳೆದ 40 ವರ್ಷಗಳ ಹೋರಾಟದ ಫಲವಾಗಿ 371ನೇ ಕಲಂ ತಿದ್ದುಪಡಿ ಜಾರಿಯಾಗಿದೆ. ಈ ಭಾಗದ ಅಭಿವೃದ್ಧಿ ಕಾರ್ಯಗಳಿಗೆ ತಕ್ಕಂತೆ ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ. ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ಹೈಕ ಭಾಗದ ರಸ್ತೆ ಸುಧಾರಣೆ ಮತ್ತು ಗದಗ-ವಾಡಿ, ಕುಡಚಿ-ಬಾಗಲಕೋಟ ಸೇರಿದಂತೆ ರೇಲ್ವೆ ಮಾರ್ಗಗಳ ನಿರ್ಮಾಣಕ್ಕೆ ಅನುದಾನ ಮೀಸಲಿರಿಸಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಯಾವೊಂದು ವರ್ಗದ ಮುಖಂಡರ ನಾಯಕತ್ವದಲ್ಲಿ ಇದುವರೆಗೆ ಚುನಾವಣೆ ಎದುರಿಸಿಲ್ಲ.
  ಪಕ್ಷದ ಹಿತದೃಷ್ಟಿಯಿಂದ ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಫೆ.16-17 ರಂದು ಪಕ್ಷದ ಚುನಾವಣೆ ಸಮಿತಿ ಸಭೆ ನಡೆಸಲಿದೆ. ಅಂದು ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಸ್ಪಷ್ಟಪಡಿಸಿದರು.
ಎಚ್ಚರಿಕೆ: ಲಿಂಗಸ್ಗೂರು ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ವರಿಷ್ಠರು ತಮಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಕೆಲವರು ಕ್ಷೇತ್ರದ ಪ್ರಚಾರದಲ್ಲಿ ತೊಡಗಿರುವುದಾಗಿ ತಿಳಿದು ಬಂದಿದ್ದು, ಜಿಲ್ಲಾ ಮತ್ತು ತಾಲೂಕು ಸಮಿತಿ ಅಂತಹ ವ್ಯಕ್ತಿಗಳ ವಿರುದ್ಧ ದೂರು ನೀಡಿದರೆ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ, ಜಿಪಂ ಮಾಜಿ ಉಪಾಧ್ಯಕ್ಷ ಪಾಮಯ್ಯ ಮುರಾರಿ, ಬಸವರಾಜ ಗುತ್ತೇದಾರ, ಎಂ.ಡಿ.ಸಾಧಿಕ ಅಲಿ ಮುದಗಲ್, ಶರಣಯ್ಯ ಗೊರೇಬಾಳ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.