ಮಿನಿ ಚುನಾವಣೆ ಪೂರಕ ಪರೀಕ್ಷೆ: ಸಚಿವ ಲಿಂಬಾವಳಿ
ರಾಯಚೂರು: ರಾಜ್ಯಾದ್ಯಂತ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆ ಬರುವ ವಿಧಾನಸಭೆ ಚುನಾವಣೆಗೆ ಪೂರಕ ಪರೀಕ್ಷೆಯಾಗಲಿದೆ ಎಂದು ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ನಾಯಕರ ಸೂಚನೆ ಮೇರೆಗೆ ಜಿಲ್ಲೆಗೆ ಆಗಮಿಸಿದ್ದು, ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲೆಯ ಮುಖಂಡರಲ್ಲಿ ಒಮ್ಮತ ಅಭಿಪ್ರಾಯ ಮೂಡಿಸಿ ಎಲ್ಲರು ಯಾವ ರೀತಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕೆಂಬ ಕುರಿತು ಚರ್ಚಿಸಲಾಗಿದೆ. ಇದಕ್ಕೆ ಎಲ್ಲ ಮುಖಂಡರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮತದಾರರ ಅಭಿಪ್ರಾಯ ತಿಳಿಯುವ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆಗೆ ಹಾಗೂ ಸಮರ್ಪಕವಾಗಿ ಎದರಿಸಲು ಪೂರಕ ಪರೀಕ್ಷೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ಉಂಡ ಮನೆಗೆ ದ್ರೋಹ: ರಾಜ್ಯದ ಅರಣ್ಯ ಸಚಿವ ಸಿ.ಪಿ. ಯೋಗೇಶ್ವರ ಹಾಗೂ ಸಣ್ಣ ಕೈಗಾರಿಕೆ ಸಚಿವ ರಾಜುಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ ಉಂಡ ಮನೆಯ ಜಂತಿ ಎಣಿಸುವ ಕೆಲಸ ಮಾಡಿದ್ದಾರೆ. ಕಳೆದ ನಾಲ್ಕೂವರೆ ವರ್ಷ ಅಧಿಕಾರ ಅನುಭವಿಸಿ ಈಗ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಅವರು, ಬೇರೆ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆಂದು ತಿಳಿದು ಬಂದಿದೆ. ಮುಂಬರುವ ದಿನಗಳಲ್ಲಿ ಪಕ್ಷ ತೊರೆದಿದ್ದಕ್ಕಾಗಿ ಪಶ್ಚಾತ್ತಾಪ ಪಡಲಿದ್ದಾರೆ. ಇವರ ರಾಜಿನಾಮೆಯಿಂದ ಪಕ್ಷಕ್ಕೆ ಯಾವುದೇ ತೊಂದರೆಯಿಲ್ಲವೆಂದು ಅವರು ಸ್ಪಷ್ಟಪಡಿಸಿದರು.
ಒಗ್ಗಟ್ಟಿಂದ ಚುನಾವಣೆ ಎದುರಿಸುವೆವು: ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ಬರುವ ವಿಧಾನಸಭೆ ಚುನಾವಣೆ ಎದುರಿಸಲಾಗುವುದು. ಮಾಜಿ ಮುಖ್ಯಮಂತ್ರಿ ಸದಾನಂದಗೌಡರು ಪಕ್ಷದಲ್ಲಿನ ಹಳಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ಹೈಕಮಾಂಡ್ ನಾಯಕರಲ್ಲಿ ಮನವಿ ಮಾಡಿದ್ದಾರೆ ವಿನಃ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಮುಂಬರುವ ದಿನಗಳಲ್ಲಿ ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿದ್ದರೆ ಅದನ್ನು ಸರಿಪಡಿಸಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕ, ವಿಧಾನಪರಿಷತ್ ಟದಸ್ಯ ಅಮರನಾಥ ಪಾಟೀಲ, ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷ ಅಶೋಕ ಗಸ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

