ಖಾಸಗಿ ವಿವಿಗಳ ಮೇಲೆ ಸರ್ಕಾರದ ನಿಯಂತ್ರಣ
ರಾಯಚೂರು: ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗದ ಅವಕಾಶ ಹೆಚ್ಚಳ ಹಿನ್ನೆಲೆಯಲ್ಲಿ ಖಾಸಗಿ ವಿವಿಗಳಿಗೆ ಸರ್ಕಾರ ಅವಕಾಶ ನೀಡಿದ್ದು, ಅವುಗಳ ಮೇಲೆ ನಿಯಂತ್ರಣವನ್ನೂ ಹೇರಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಉಂಟು ಮಾಡಿದೆ. ಪದವಿ, ಎಂಜಿನಿಯರಿಂಗ್, ವೈದ್ಯಕೀಯ, ಪಾಲಿಟೆಕ್ನಿಕ್ ಸೇರಿದಂತೆ ಸರ್ಕಾರದ ಅನೇಕ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಮೂಲಕ ಎಲ್ಲರಿಗೆ ಅನುಕೂಲ ಕಲ್ಪಿಸಿದೆ ಎಂದರು.
ಬೋಧನಾ ಪದ್ಧತಿ ಬದಲಾಗಲಿ: ವಿದ್ಯಾರ್ಥಿಗಳನ್ನು ಮಾನವ ಸಂಪನ್ಮೂಲವಾಗಿ ರೂಪಿಸುವ ನಿಟ್ಟಿನಲ್ಲಿ ಇಂದಿನ ಅಗತ್ಯತೆಗಳಿಗೆ ತಕ್ಕಂತೆ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆ ಅವಶ್ಯ. ಶಿಕ್ಷಕರೂ ಆಧುನಿಕ ಬೋಧನಾ ಪದ್ಧತಿಗೆ ಬದಲಾಗಬೇಕಿದೆ. ಸದ್ಯ ರಾಜ್ಯದ ವಿವಿಧೆಡೆಯ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಳೆದೊಂದು ವರ್ಷದಿಂದ ಕಾರ್ಯನಿರ್ವಹಿಸಿದವರ ಸೇವೆ ಕಾಯಂಗೆ ಯೋಜಿಸಿದ್ದು, ಮೆರಿಟ್, ಮೀಸಲಾತಿ ಆಧಾರದಲ್ಲಿ ಈ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಿದರು.
ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಪ್ರಸ್ತಾವನೆ; ವಿವಿಧ ಕಾಲೇಜುಗಳಲ್ಲಿನ ಉಪನ್ಯಾಸಕರ 270 ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಹೇಳಿದ ಅವರು, ಶೀಘ್ರದಲ್ಲಿಯೇ 873 ಉಪನ್ಯಾಸಕರ ನೇಮಕಾತಿಗೆ ಸರ್ಕಾರಿ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಉಪನ್ಯಾಸಕರ ನೇಮಕಾತಿ ವೇಳೆ ಯುಜಿಸಿ ಮಾನದಂಡಗಳನ್ನು ಅನುಸರಿಸಲಾಗುತ್ತದೆ. ನೆರೆಯ ರಾಜ್ಯಗಳ ವಿವಿಗಳಿಂದ ಅಧ್ಯಯನ ಮಾಡದೇ ಎಂ.ಫಿಲ್ ಪದವಿ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಎಂ.ಫಿಲ್ ಪಡೆದವರನ್ನು ಪರಿಗಣಿಸುತ್ತಿಲ್ಲ ಎಂದು ತಿಳಿಸಿದರು.
ಅಧಿಕಾರಿಗಳ ಮೇಲ್ವಿಚಾರಣಾ ಸಮಿತಿ: ರಾಜ್ಯ ಸರ್ಕಾರ ರಾಜ್ಯದಲ್ಲಿ 15 ಖಾಸಗಿ ವಿವಿಗಳ ಆರಂಭಕ್ಕೆ ಒಪ್ಪಿಗೆ ನೀಡಿದ್ದು, ಖಾಸಗಿ ವಿವಿಗಳಲ್ಲಿ ಶಾಸಕರನ್ನು ಆಡಳಿತ ಮಂಡಳಿಗೆ ನೇಮಿಸುವ ವಿಚಾರ ಸರ್ಕಾರಕ್ಕಿಲ್ಲ. ಆದರೆ ಉನ್ನತ ಶಿಕ್ಷಣ ಇಲಾಖೆ ಮೇಲಧಿಕಾರಿಗಳಿರುವ ಮೇಲ್ವಿಚಾರಣಾ ಸಮಿತಿಯು ವಿವಿ ಮೇಲೆ ನಿಗಾಯಿರಿಸಿ ಅಕ್ರಮ ನಡೆಯದಂತೆ ಎಚ್ಚರ ವಹಿಸಲಿದೆ. ಶೇ. 40ರಷ್ಟು ಸೀಟುಗಳನ್ನು ಸರ್ಕಾರದ ಸೀಟುಗಳಾಗಿ ನಿಗದಿ ಮಾಡಲಾಗಿದೆ ಎಂದು ಹೇಳಿದರು.
ಹೈ.ಕ. ಭಾಗಕ್ಕೆ 371ನೇ ಕಲಂ ಅಡಿ ವಿಶೇಷ ಸ್ಥಾನಮಾನ ದೊರೆತಿದ್ದು ಸಂತಸ ತಂದಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯಿಂದ ದೊರೆಯಬೇಕಾದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಒದಗಿಸಲಾಗುತ್ತದೆ. ಗುಣಮಟ್ಟದ ಶಿಕ್ಷಣ ನೀಡಿಕೆ ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.
ನೇಮಕಾತಿಯಲ್ಲಿ ಅಕ್ರಮ- ಕ್ರಮ ನಿಶ್ಚಿತ: ಶಿಕ್ಷಕರೂ ಸಹ ಕಾಲಕ್ಕೆ ತಕ್ಕಂತೆ ಬೋಧನೆ ಮತ್ತಿತರೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಪರಿವರ್ತನೆ ಮಾಡಿಕೊಳ್ಳಬೇಕಿದೆ. ಅನುದಾನಿತ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶಿಕ್ಷರ ನೇಮಕಾತಿಯಲ್ಲಿ ಅಕ್ರಮಗಳ ಬಗ್ಗೆ ದೂರುಗಳು ಕೇಳಿಬಂದಿವೆ. ಸರ್ಕಾರ ನೇಮಕಾತಿಗೆ ಸೂಚಿಸಿದ ನಿಯಮಾವಳಿ ಅನುಸರಿಸದ ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಅಮರೇಶ್ ಹೊಸಮನಿ, ಎಪಿಎಂಸಿ ಅಧ್ಯಕ್ಷ ಆರ್. ತಿಮ್ಮಯ್ಯ, ಬಂಡೇಶ್ ವಲ್ಕಂದಿನ್ನಿ ಸೇರಿದಂತೆ ಅನೇಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

