ರಾಯಚೂರು

ಕುಡಿವ ನೀರಿನ ಸಮಸ್ಯೆ ಎದುರಾದೀತು ಜೋಕೆ!

Published On :

ಸಿಂಧನೂರು ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ನಾಡಗೌಡ ಎಚ್ಚರಿಕೆ
ಸಿಂಧನೂರು: ಬೇಸಿಗೆ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಕುಡಿವ ನೀರಿನ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಶಾಸಕ ವೆಂಕಟರಾವ್ ನಾಡಗೌಡ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿ, ಎನ್‌ಆರ್‌ಇಡಬ್ಲ್ಯೂಪಿ ಯೋಜನೆಯಡಿ ಕೈಗೊಂಡ ಕುಡಿವ ನೀರಿನ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸಬೇಕು. ಬೇಸಿಗೆಯಲ್ಲಿ ನೀರಿನ ಬವಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ನೀರಿನ ಕೆರೆ, ಬೋರ್‌ವೆಲ್‌ಗಳನ್ನು ಮಾರ್ಚ್ ಅಂತ್ಯದೊಳಗೆ ದುರಸ್ತಿಗೊಳಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾವುದೆಂದು ಎಚ್ಚರಿಸಿದರು.
ಸೂಕ್ತ ಯೋಜನೆ ರೂಪಿಸಿ: ತುಂಗಭದ್ರಾ ಡ್ಯಾಂನಲ್ಲಿ ಅಗತ್ಯ ಪ್ರಮಾಣದ ನೀರಿಲ್ಲದ ಕಾರಣ ಬೇಸಿಗೆ ದಿನಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಲಿದೆ. ಬೇಸಿಗೆಯನ್ನು ಸಮರ್ಥವಾಗಿ ಎದುರಿಸಿ ಜನರಿಗೆ ತೊಂದರೆಯಾಗದಂತೆ ನೀರಾವರಿ ಅಧಿಕಾರಿಗಳು ಯೋಜನೆಗಳನ್ನು ರೂಪಿಸಬೇಕು. ತಾಲೂಕಿನ ಮುಳ್ಳೂರು, ಮುಕ್ಕುಂದಾ, ಕೆಂಗಲ್, ವಲ್ಕಂದಿನ್ನಿ ಯದ್ದಲದೊಡ್ಡಿ ಗ್ರಾಮಗಳಲ್ಲಿ ಅಲ್ಪ ಪ್ರಮಾಣದ ನೀರಿದ್ದು ಉಪ್ಪಳ, ಬನ್ನಿಗನೂರು, ಮಂಡಿಕ್ಯಾಂಪ್, ರೌಡಕುಂದಾ, ಗೋನವಾರ ಗ್ರಾಮಗಳಲ್ಲಿ ನೀರಿನ ಬವಣೆ ಅಧಿಕವಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯ ಪರಿಹಾರಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಹೇಳಿದರು.
ಉಪಾಧ್ಯಕ್ಷರ ಆಕ್ರೋಶ: ಕೆಡಿಪಿ ಸಭೆಗೆ ಯಾವುದೇ ಆಹ್ವಾನ ನೀಡಿಲ್ಲವೆಂದು ತಾಪಂ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಇದರಿಂದ ಸದಸ್ಯರು ಜನರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ತಾಪಂ ಅಧಿಕಾರಿಗಳು ಸದಸ್ಯರನ್ನು ಈ ರೀತಿ ಕಡೆಗಣಿಸಿ ತಮ್ಮ ಇಷ್ಟದಂತೆ ಸಭೆ ನಡೆಸುತ್ತಿರುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ನಾಡಗೌಡ, ಒಂದೂವರೆ ಗಂಟೆ ವಿಳಂಬವಾಗಿ ಸಭೆಗೆ ಆಗಮಿಸಿದ್ದರಿಂದ ವಿವಿಧ ಇಲಾಖೆ ಅಧಿಕಾರಿಗಳು, ತಾಪಂ ಸದಸ್ಯರು ಕಾದು ಕಾದು ಸುಸ್ತಾದರು. ಸಭೆಯ ಬಗ್ಗೆ ಶಾಸಕರೇ ಈ ರೀತಿ ಉದಾಸೀನ ತಾಳಿದರೆ ಹೇಗೆ ಎಂದು ಪ್ರತಿಪಕ್ಷದ ಸದಸ್ಯರು ಗುನುಗಿದರು.
ಜಿಪಂ ಸದಸ್ಯರಾದ ಚಂದುಸಾಬ ಮುಳ್ಳೂರು, ಶಿವನಗೌಡ ಎಲೆಕೂಡ್ಲಗಿ, ಬಸಮ್ಮ ಕುಂಟೋಜಿ, ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಇಒ ಶರಣಬಸವರಾಜ ಕೆಸರಟ್ಟಿ, ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.