ರಾಯಚೂರು

ಜಿಲ್ಲಾಧಿಕಾರಿಗೆ ಮುತ್ತಿಗೆ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಜು.1
ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳ ಉದ್ಯಾನವನ ಸೇರಿದಂತೆ ನಾಗರಿಕ ಸೌಲಭ್ಯಕ್ಕೆ ಮೀಸಲಿರುವ ಜಾಗ ಒತ್ತುವರಿ ಮಾಡಿಕೊಂಡಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.
ಪಟ್ಟಣದ ಕರಡಕಲ್ ಕೆರೆ, ರಸ್ತೆ ತೆರವು ಕಾರ್ಯ ಹಾಗೂ ವಿವಿಧ ಪ್ರಗತಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ ಅವರು ವೀಕ್ಷಿಸಲು ಆಗಮಿಸಿದ ಸಂದರ್ಭದಲ್ಲಿ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು, ಬಡಾವಣೆಗಳಲ್ಲಿ ಮೀಸಲಿಟ್ಟ ನಾಗರಿಕ ಸೌಲಭ್ಯ ಜಾಗಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು ಅಲ್ಲದೆ ಮಾರಾಟ ಮಾಡಿದ್ದಾರೆ. ಇದರಿಂದ ಉದ್ಯಾನವನ ಹಾಗೂ ಇನ್ನಿತರೆ ಸೌಲಭ್ಯ ಕಲ್ಪಿಸಲು ಜಾಗಗಳ ಕೊರತೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ನಿರ್ಲಕ್ಷ್ಯ: ಪುರಸಭೆ ಆಡಳಿತ ಮಂಡಳಿ ಸರ್ಕಾರಿ ಜಾಗಗಳನ್ನು ಕಾಯ್ದುಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದು, ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಒತ್ತುವರಿಗೊಂಡ ಜಾಗಗಳನ್ನು ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
ಅಲ್ಲದೆ ನಗರದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಖ್ಯರಸ್ತೆಗಳ ಅಗಲೀಕರಣ ಕಾರ್ಯಕ್ಕೆ ಮುಂದಾಗಿದ್ದು, ಒತ್ತುವರಿ ತೆರವು ಕಾರ್ಯ ಅಪೂರ್ಣಗೊಳಿಸಲಾಗಿದೆ. ಪ್ರಭಾವಿ ವ್ಯಕ್ತಿಗಳು ನಿರ್ಮಿಸಿದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ತೀವ್ರ ಅಡ್ಡಿಯುಂಟು ಮಾಡಿದೆ. ಕೂಡಲೆ ಈ ಬಗ್ಗೆಯೂ ಪರಿಶೀಲನೆ ನಡೆಸಿ ತೆರವು ಕಾರ್ಯ ಪೂರ್ಣಗೊಳಿಸಲು ಸೂಚಿಸಬೇಕೆಂದು ಒತ್ತಾಯಿಸಿದರು.
ಸಮಗ್ರ ವರದಿ ಸಲ್ಲಿಸಲು ಸೂಚನೆ: ದೂರು ಆಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ನಾಗರಿಕ ಸೌಲಭ್ಯಕ್ಕೆ ಮೀಸಲಿರುವ ಜಾಗಗಳ ಒತ್ತುವರಿ ಮತ್ತು ಅಕ್ರಮ ಕಟ್ಟಡಗಳ ತೆರವು ಕಾರ್ಯಗಳ ಕುರಿತು ಚರ್ಚಿಸಿ, ಪಟ್ಟಣದ ಎಲ್ಲ ಬಡಾವಣೆಗಳಲ್ಲಿ ಮೀಸಲಿರುವ ನಾಗರಿಕ ಸೌಲಭ್ಯ ಜಾಗಗಳ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.
ರಸ್ತೆ ಅಗಲೀಕರಣ ಕಾಮಗಾರಿ ಕುರಿತು ವಿಳಂಬ ಮಾಡದೆ ಅಕ್ರಮ ಕಟ್ಟಡಗಳ ತೆರವು ಕಾರ್ಯ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಮಹಾಂತೇಶ ಅವರಿದೆ ಆದೇಶ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಟಿ.ಯೋಗೇಶ, ತಹಸೀಲ್ದಾರ್ ಎನ್.ಬಿ. ಸಜ್ಜನ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.