ನೀರು, ಒಳ ಚರಂಡಿಗೆ 22 ಕೋಟಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.2
ವಿಶ್ವ ಬ್ಯಾಂಕ್ ನೆರವಿನ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗೆ ಅಗತ್ಯವಾದ 22 ಕೋಟಿ ಹೆಚ್ಚುವರಿ ಅನುದಾನ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಂಧನೂರು ನಗರದ ಎಲ್ಲ 31 ವಾರ್ಡ್ಗಳಿಗೂ ಶುದ್ಧ ಕುಡಿಯುವ ನೀರಿನ ಸರಬರಾಜು, ಒಳಚರಂಡಿ ನಿರ್ಮಾಣಕ್ಕೆ ಅಗತ್ಯವಾಗಿದ್ದ 22 ಕೋಟಿಯನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಕಾಮಗಾರಿಯನ್ನು ಬೇಗ ಆರಂಭಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದರು.
ಯೋಜನೆ ನೆನೆಗುದಿಗೆ ಬಿದ್ದಿತ್ತು: ಈ ಮೊದಲು ಹಣ ಕಡಿಮೆ ಬೀಳುತ್ತದೆ ಎಂದು ನಗರದ ಅರ್ಧ ವಾರ್ಡ್ಗಳನ್ನು ಈ ಯೋಜನೆಯಿಂದ ಕೈಬಿಡಲಾಗಿತ್ತು. ಎರಡು ಬಾರಿ ಟೆಂಡರ್ ರದ್ದಾಗಿತ್ತು. ಇದರಿಂದಾಗಿ ಯೋಜನೆ ನೆನೆಗುದಿಗೆ ಬಿದ್ದಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಗರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬಾದರ್ಲಿ ಉತ್ತರಿಸಿದರು.
ಈ ಯೋಜನೆಗೆ ಸಂಬಂಧಿಸಿದಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜೂ.29ರಂದು ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ, ಪೌರಾಡಳಿತ ಸಚಿವರು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು, ಆರ್ಥಿಕ ಇಲಾಖೆಯ ಅಧಿಕಾರಿಗಳು ಸರ್ಕಾರದ ಕಾರ್ಯದರ್ಶಿಗಳು ಹಾಗೂ ಪೌರಾಡಳಿತ ಸಚಿವಾಲಯ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದರು.
ಕೇಂದ್ರ ಸಚಿವರಿಗೆ ಮನವಿ: ಶ್ರೀರಂಗಪಟ್ಟಣ- ಬೀದರ್ ರಸ್ತೆಯ ಹಿರಿಯೂರು- ಜೇವರ್ಗಿ 400 ಕಿಮೀ ರಾಜ್ಯ ಹೆದ್ದಾರಿಗೆ ಲಿಂಕ್ ರಸ್ತೆಯನ್ನು ಹಾಗೂ ಕುಷ್ಟಗಿಯಿಂದ ಶಕ್ತಿನಗರವರೆಗಿನ 300 ಕಿಮೀ ರಾಜ್ಯ ಹೆದ್ದಾರಿ 30ನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆರಿಸುವಂತೆ ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಶಾಸಕರು ಕೇಂದ್ರ ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ಮನವಿ ಮಾಡಿದ್ದಾಗಿ ತಿಳಿಸಿದರು.
ರೇಲ್ವೆ ಲೈನ್- ರೈತರಿಗೆ ಪರಿಹಾರ: ಗಿಣಿಗೇರಾ- ಮಹಿಬೂಬ್ ನಗರ ರೇಲ್ವೆ ಲೈನ್ ಕಾಮಗಾರಿ ಬಗ್ಗೆ ಈಗಾಗಲೇ ಗಿಣಿಗೇರಾದಿಂದ ಸಿಂಧನೂರವರೆಗೆ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ರೈತರಿಗೆ 81 ಕೋಟಿ ಪರಿಹಾರ ಹಣವನ್ನು ನೀಡಬೇಕಿದ್ದು, ಅನುದಾನವನ್ನು ಬಿಡುಗಡೆಗೊಳಿಸುವಂತೆ ಕೇಂದ್ರ ರೇಲ್ವೆ ಮಂತ್ರಿ ಮಲ್ಲಿಕಾರ್ಜುನ ಖರ್ಗೆಅವರಿಗೆ ಮನವಿ ಮಾಡಿದ್ದು, ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಸಿಂಧನೂರು- ರಾಯಚೂರು ವರೆಗಿನ ಭೂ ಸ್ವಾಧೀನಕ್ಕೆ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಲು ಮಂತ್ರಿಗಳು ಸೂಚಿಸಿದ್ದಾರೆ ಎಂದರು.
ನಾಗರಿಕರಿಗೆ ಶುದ್ಧ ನೀರು ಪೂರೈಕೆ: ನಗರದಲ್ಲಿ ಕುಡಿವ ನೀರಿನ ಸಮಸ್ಯೆ ಇರುವುದು ನಿಜ. ಆದರೆ ಜಿಲ್ಲಾಧಿಕಾರಿಗಳ ಅನುದಾನದಲ್ಲಿ 25 ಲಕ್ಷ ತಂದು ಕೇವಲ ನಾಲ್ಕೈದು ದಿನಗಳಲ್ಲಿ ಪೈಪ್ಲೈನ್ ಮೂಲಕ ಹಳ್ಳದ ನೀರನ್ನು ಕೆರೆಗೆ ಸರಬರಾಜು ಮಾಡಲಾಗುತ್ತಿದೆ. ನಂತರ ಶುದ್ಧೀಕರಿಸಿ ನೀರನ್ನು ಸಾರ್ವಜನಿಕರಿಗೆ ಪೂರೈಕೆ ಮಾಡಲಾಗುತ್ತಿದೆ. ಕಲುಷಿತ ನೀರನ್ನು ಕುಡಿಸುವ ಉದ್ದೇಶ ತಮಗಿಲ್ಲ. ಜೆಡಿಎಸ್ ಮುಖಂಡರ ಆರೋಪ ಸತ್ಯಕ್ಕೆ ದೂರವಾಗಿದೆ. ತಾವು ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

