ಅಕ್ರಮ ಗಣಿ: ಕೇಸ್ಗೆ ಆಗ್ರಹಿಸಿ ಧರಣಿ
ಕನ್ನಡಪ್ರಭ ವಾರ್ತೆ ರಾಯಚೂರು ಜು.5
ಮಾನವಿ ಪಟ್ಟಣದ ಹೊರವಲಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಸೂಚಿಸಿದ ಜಿಲ್ಲಾಧಿಕಾರಿಗಳ ಆದೇಶ ಪಾಲಿಸುವಲ್ಲಿ ವಿಫಲರಾದ ತಹಸೀಲ್ದಾರ್ ಮತ್ತು ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ, ಮಾನವಿ ಪಟ್ಟಣದ ಹೊರವಲಯದಲ್ಲಿ ಕಳೆದ ಅನೇಕ ವರ್ಷದಿಂದ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಲ್ಲು ಗಣಿಗಾರಿಕೆಯಲ್ಲಿ ಗುತ್ತಿಗೆದಾರರಾದ ಎಂ. ಈರಣ್ಣ ಮತ್ತಿತರೆ 13 ಜನ ಶಾಮೀಲಾಗಿದ್ದಾರೆಂದು ಆರೋಪಿಸಿದರು.
ವಂಚನೆ: ಸರ್ಕಾರಿ ಜಮೀನು ಅಕ್ರಮವಾಗಿ ಸ್ವಾಧೀನ ಪಡಿಸಿಕೊಂಡು ಅಲ್ಲಿಯೇ ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಸಲಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರು. ವಂಚನೆಯಾಗಿದೆ. 2013ರ ಜ. 8ರಂದು ತಹಸೀಲ್ದಾರ್, ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು, ನಡೆಸಿದ ಜಂಟಿ ತನಿಖೆ ವರದಿ ಸಲ್ಲಿಸಲಾಗಿದೆ. ತಹಸೀಲ್ದಾರರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಅಕ್ರಮ ಕಲ್ಲಿನ ಗಣಿಗಾರಿಕೆ ಬಗ್ಗೆ ಸಾಕಷ್ಟು ಪುರಾವೆಗಳಿರುವುದು ಪತ್ತೆಯಾಗಿದೆ. ಆದರೆ ವರದಿ ಸಲ್ಲಿಕೆಯಾಗಿ ಆರು ತಿಂಗಳೇ ಕಳೆದರೂ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಕರ್ನಾಟಕ ರೈತ ಸಂಘವು ಪುನಾ ಧರಣಿ ಸತ್ಯಾಗ್ರಹ ನಡೆಸಿದ್ದರಿಂದ ಜಿಲ್ಲಾಧಿಕಾರಿಗಳು ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪರಿಶೀಲನೆ ವೇಳೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕಲ್ಲಿನ ಗಣಿಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಈ ವೇಳೆ ಜಿಲ್ಲಾಧಿಕಾರಿಗಳು ಮಾನವಿ ತಹಸೀಲ್ದಾರರಿಗೆ ಈ ಬಗ್ಗೆ ಗಣಿಗಾರಿಕೆಯಲ್ಲಿ ತೊಡಗಿರುವ ಗುತ್ತಿಗೆದಾರರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ್ದರು ಎಂದು ತಿಳಿಸಿದರು.
ಕೇಸ್ ದಾಖಲಿಸಿಲ್ಲ: ಆದರೆ ಮಾನವಿ ತಹಸೀಲ್ದಾರರು ರಾಜಕೀಯ ಪ್ರಭಾವಕ್ಕೆ ಸಿಲುಕಿ ಇದುವರೆಗೆ ಕೇಸ್ ದಾಖಲಿಸಿಲ್ಲ. ಜಿಲ್ಲಾಧಿಕಾರಿಗಳು ಆದೇಶ ನೀಡಿ 15 ದಿನಗಳೇ ಕಳೆದರೂ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು, ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿರುವ ಎಂ. ಈರಣ್ಣ ಮತ್ತಿತರೆ 13 ಜನರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಕರ್ತವ್ಯ ಲೋಪ ಎಸಗಿದ ಮಾನವಿ ತಹಸೀಲ್ದಾರ್ ಪುಟ್ಟನರಸಯ್ಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಸಿಕಂದರ್ ಪಾಷಾ ಅವರನ್ನು ಅಮಾನತುಗೊಳಿಸಬೇಕು. ಜಿಲ್ಲಾಧಿಕಾರಿಗಳ ಆದೇಶದಂತೆ ಕೂಡಲೇ ಅಕ್ರಮ ಗಣಿಗಾರಿಕೆ ನಡೆಸಿರುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಅವರು, ಈ ಬಗ್ಗೆ ಶೀಘ್ರದಲ್ಲೇ ಸ್ವತಃ ಮಾನವಿಗೆ ತೆರಳಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ, ರಾಜಶೇಖರ್, ಮುದುಕಪ್ಪ ನಾಯಕ, ನಾಗಲಿಂಗ ಸ್ವಾಮಿ, ಚಿನ್ನಪ್ಪ ಕೊಟ್ರಕಿ, ಅಶೋಕ ನಿಲೋಗಲ್, ಬಸವರಾಜ ಕವಿತಾಳ, ಎಚ್.ಹನುಮಂತ ಆದಿ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

