ಬಡ ಜನತೆಗೆ ಸೌಲಭ್ಯ ಕಲ್ಪಿಸಲು ಪ್ರಯತ್ನ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.7
ಬಡ ಜನತೆಯ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡುವುದರ ಜೊತೆಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಎಲ್ಲರಿಗೂ ತಲುಪುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹುಡಾ ಗ್ರಾಮದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಜನರು ತಮ್ಮ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತರಬೇಕು. ಪಿಡಿಒಗಳು ಸಹ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಮುಂದಾಗಬೇಕು. ಮೂಲ ಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆ, ಚರಂಡಿ, ಶೌಚಾಯದಂತಹ ಸೌಲಭ್ಯಗಳು ಗ್ರಾಮೀಣ ಜನರಿಗೆ ದೊರೆಯಬೇಕಿದೆ ಎಂದರು.
ಕಾರ್ಯ ನಿರ್ವಹಣೆಯಲ್ಲಿ ವಿಫಲ: ಹುಡಾ ಗ್ರಾಮದಲ್ಲಿ 110 ಎಚ್ಪಿ ವಿದ್ಯುತ್ ಪರಿವರ್ತಕ ದುರಸ್ತಿಯಾಗಿ ತಿಂಗಳುಗಳು ಗತಿಸಿವೆ. ಈ ಕುರಿತಂತೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜನತೆ ಕತ್ತಲಲ್ಲಿಯೇ ಜೀವನ ಸಾಗಿಸುವಂತಾಗಿದೆ. ತೋಟಗಾರಿಕೆ ಇಲಾಖೆಯಿಂದ ಯಾವುದೇ ಸೌಲಭ್ಯಗಳು ದೊರೆಯದಾಗಿವೆ. ಹಗಲು ಹೊತ್ತು ಬೀದಿದೀಪಗಳು ಉರಿಯುತ್ತಿದ್ದು, ಕೇಳುವವರೇ ಇಲ್ಲದಂತಾಗಿದೆ.
ರೈತ ಸಂಪರ್ಕ ಕೇಂದ್ರ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಈ ಬಗ್ಗೆ ಗಮನಹರಿಸಬೇಕು. ಗೊಬ್ಬರಕಲ್ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಕಿಟಕಿ, ಬಾಗಿಲುಗಳು ಇಲ್ಲವಾಗಿದೆ. ಹುಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಚರಂಡಿಗಳ ಹೂಳು ತೆಗೆಯಲು ಸೂಚಿಸಬೇಕು ಎಂದು ಗ್ರಾಮಸ್ಥರು ತಹಸೀಲ್ದಾರರಿಗೆ ಮನವಿ ಮಾಡಿದರು.
ಭರವಸೆ: ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಹಸೀಲ್ದಾರರು, ಎಲ್ಲ ವಿಷಯಗಳ ಕುರಿತಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ನಂತರ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಿಗೆ ಪತ್ರ ನೀಡಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ತಳವಾರ, ಎಪಿಎಂಸಿ ಸಹ ಕಾರ್ಯದರ್ಶಿ ನರಸಿಂಹರೆಡ್ಡಿ, ಕೃಷಿ ಇಲಾಖೆ, ಜೆಸ್ಕಾಂ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

