ಸದಾಶಿವ ವರದಿ ಜಾರಿಗೆ ಆಗ್ರಹ
ಕನ್ನಡಪ್ರಭ ವಾರ್ತೆ, ರಾಯಚೂರು, ಜು.8
ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಯಥಾವತ್ತು ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಕಳೆದ 17 ವರ್ಷಗಳಿಂದ ಒಳಮೀಸಲಾತಿಗೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯು ನಡೆಸಿದ ಹೋರಾಟದ ಫಲವಾಗಿ ಸದಾಶಿವ ಆಯೋಗವು 2012ರ ಜೂ. 14ರಂದು ತನ್ನ ವರದಿ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಆಗಿನ ರಾಜ್ಯ ಸರ್ಕಾರ ಅದರ ಜಾರಿಗೆ ಮುಂದಾಗಲಿಲ್ಲ ಎಂದು ಆರೋಪಿಸಿದರು.
ಸೌಲಭ್ಯ ಕಲ್ಪಿಸಲು ಒತ್ತಾಯ: ಸದ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಶೀಘ್ರವೇ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಅಂಗೀಕರಿಸಿ ಒಳಮೀಸಲಾತಿಗೆ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕವಾಗಿ ತೀರಾ ಅನ್ಯಾಯಕ್ಕೆ ಒಳಗಾದವರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು.
ಸಚಿವ ಸಂಪುಟದಲ್ಲಿ ಸಮ್ಮತಿ ಸೂಚಿಸಿ ಕೂಡಲೇ ಕೇಂದ್ರಕ್ಕೆ ಸದಾಶಿವ ಆಯೋಗದ ವರದಿ ಕಳುಹಿಸಿಕೊಡಬೇಕು. ಇದುವರೆಗೆ ಮೀಸಲಾತಿ ಸೌಲಭ್ಯ ಪಡೆದಿರುವ ಪರಿಶಿಷ್ಟ ಜಾತಿಗಳಾದ ಲಂಬಾಣಿ(ಬಂಜಾರಾ), ವಡ್ಡರು(ಭೋವಿ), ಕೊರಮ, ಕೊರಚ ಜಾತಿಯವರು ಮಾದಿಗರಿಗೆ ಅನ್ಯಾವಾಗುವಂತೆ ಮಾಡಿದ್ದಾರೆ. ಮಾದಿಗರಿಗೆ ಒಳಮೀಸಲಾತಿ ಕಲ್ಪಿಸದಂತೆ ಹುನ್ನಾರ ನಡೆಸಿದ್ದಾರೆಂದು ಆರೋಪಿಸಿದರು.
ಸ್ಪರ್ಷ ಜಾತಿಯವರನ್ನು ಕೈಬಿಡಿ: ಮಾದಿಗರಿಗೆ ಒಳಮೀಸಲಾತಿ ನೀಡಿಕೆಗೆ ವಿರೋಧಿಸುತ್ತಿರುವ ಸ್ಪರ್ಷ ಜಾತಿಗಳಾದ ಲಂಬಾಣಿ(ಬಂಜಾರ), ವಡ್ಡರು(ಭೋವಿ), ಕೊರಮ, ಕೊರಚ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಜಾತಿಯ ಪಟ್ಟಿಯಿಂದ ಕೈ ಬಿಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ತಾಲೂಕಿನ ಗಾಣದಾಳ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಕೂಡಲೇ ಗಡಿಪಾರು ಮಾಡಬೇಕು. ದಲಿತ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಸೂಕ್ತ ರಕ್ಷಣೆಯನ್ನು ಜಿಲ್ಲಾಡಳಿತ ಒದಗಿಸಬೇಕು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಜನಾಂಗದ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗೆ ಮಾಸಿಕ ಸಭೆ ಕರೆದು ಚರ್ಚಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಧರಣಿ ನಿರತರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ದೌರ್ಜನ್ಯ ತಡೆಗೆ ಆಗ್ರಹ: ಜಿಲ್ಲೆಯಲ್ಲಿ ಎಲ್ಲ ಪೊಲೀಸ್ ಠಾಣೆಗಳ ಹಿರಿಯ ಅಧಿಕಾರಿಗಳ ಸಭೆ ಕರೆದು ದಲಿತರ ಮೇಲಾಗುತ್ತಿರುವ ದೌರ್ಜನ್ಯ ತಡೆಗೆ ಅಗತ್ಯ ಸೂಚನೆ ನೀಡಬೇಕು. ದಲಿತರಿಗೆ ಸೂಕ್ತ ಬಿಗಿ ಭದ್ರತೆ ಒದಗಿಸಬೇಕೆಂದು ಹೋರಾಟಗಾರರು ಆಗ್ರಹಿಸಿದರು.
ಧರಣಿಯಲ್ಲಿ ದಂಡೋರಾ ಜಿಲ್ಲಾಧ್ಯಕ್ಷ ಬಿ.ನರಸಪ್ಪ ದಂಡೋರಾ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ರಾಘವೇಂದ್ರ ಬೋರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ವಿಜಯರಾಣಿ, ಮುಖಂಡರಾದ ಆನಂದ ಏಗನೂರು, ಭೀಮರಾಯ, ಶಿವರಾಜ ಗಂಟಿ, ಮಾನಪ್ಪ, ರಾಜಗೋಪಾಲ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

