ಅಭಿವೃದ್ಧಿ ಹೆಸರಿನಲ್ಲಿ ಪರಿಸರಕ್ಕೆ ಹಾನಿ
ಕನ್ನಡಪ್ರಭ ವಾರ್ತೆ, ರಾಯಚೂರು, ಜು.9
ನಾಡಿನ ಅಭಿವೃದ್ಧಿಯತ್ತ ಗಮನಹರಿಸಿದ ಎಲ್ಲರೂ ಪರಿಸರಕ್ಕೆ ಅಪಾರ ಹಾನಿ ಉಂಟು ಮಾಡಿದ್ದೇವೆ. ಕಾಡು ಬೆಳೆಸುವುದು ಮರೆತು ಪರಿಸರದಲ್ಲಿ ಅಸಮತೋಲನೆಗೆ ದಾರಿಯಾಗಿದೆ ಎಂದು ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಸಂಯೋಜಕ ಜಿ. ಬಸವರಾಜ್ ಹೇಳಿದರು.
ನಗರದಲ್ಲಿ ಮಂಗಳವಾರ ಐಎಂಎ ಹಾಲ್ನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕಾರ್ಯಾಗಾರದಲ್ಲಿ ಮಾತನಾಡಿ, ಹೆಚ್ಚುತ್ತಿರುವ ನಗರೀಕರಣ ಮತ್ತು ಕೈಗಾರಿಕೆಗಳಿಂದಾಗಿ ಪರಿಸರ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
90 ವಿಭಾಗಗಳಲ್ಲಿ ತ್ಯಾಜ್ಯ ನಿರ್ವಹಣೆ: ವೈದ್ಯಕೀಯ ಕ್ಷೇತ್ರದ ತ್ಯಾಜ್ಯಗಳ ವಿಲೇವಾರಿಗೆ ತಮ್ಮ ಸಂಸ್ಥೆಯು ನಿರ್ಧರಿಸಿದ್ದು, ಈಗಾಗಲೇ ನಗರ ಪ್ರದೇಶಗಳಲ್ಲಿ ಈ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆಳವಾದ ಅಧ್ಯಯನ ನಡೆಸಿ ಪರಿಸರ ಸಂರಕ್ಷಿಸುವ ಕೆಲಸ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿರುವ ಸುಮಾರು 90 ವಿಭಾಗಗಳಲ್ಲಿ ಆಧುನಿಕ ತ್ಯಾಜ್ಯ ನಿರ್ವಹಣೆ ನಿಟ್ಟಿನಲ್ಲಿ ಎಲ್ಲರಿಗೆ ತರಬೇತಿ ನೀಡಿ ಮಾರ್ಗದರ್ಶನ ಮಾಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯ ಸಾಧನೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವೆಂಕಟೇಶ ನಾಯಕ, ವೈದ್ಯರು ಮತ್ತು ಇಲಾಖೆ ಸಿಬ್ಬಂದಿ ಕರ್ತವ್ಯ ವಿಚಾರದಲ್ಲಿ ಕಾಲಹರಣ ಮಾಡದೇ ಸಾಮಾಜಿಕ ಕಳಕಳಿ ಇರುವಂತಹ ಕೆಲಸಗಳಲ್ಲಿ ತೊಡಗಬೇಕಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆ ಸಾಧನೆ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕೆಂದು ಹೇಳಿದರು.
ಇದಕ್ಕೂ ಮೊದಲು ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರವನ್ನು ಐಎಂಎ ಜಿಲ್ಲಾಧ್ಯಕ್ಷ ಡಾ. ಸಿ.ಎನ್. ಕುಲಕರ್ಣಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ದಿನೇಶ, ಐಎಂಎ ಕಾರ್ಯದರ್ಶಿ ಡಾ. ರಾಜೇಶ್ ಕಕ್ಕೇರಿ, ಡಾ. ಅಬ್ದುಲ್ ಖಲೀಲ್, ಡಾ. ನಾಗರಾಜ್ ಸೇರಿ ಮತ್ತಿತರರು ಇದ್ದರು.
ವಿವಿಧೆಡೆಯಿಂದ ಆಗಮಿಸಿದ್ದ ವೈದ್ಯರು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿನ ಸಿಬ್ಬಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

