ಅಭಿವೃದ್ಧಿಗಾಗಿ ಜಾಗೃತಿ; ಸಮಾಜಶಾಸ್ತ್ರೀಯ ಸಂಘ ಸ್ಥಾಪನೆ
ಕನ್ನಡಪ್ರಭ ವಾರ್ತೆ, ರಾಯಚೂರು, ಜು.18
ಸರ್ಕಾರ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಆದರೆ ಜನರಿಗೆ ಈ ಬಗೆಗಿನ ಮಾಹಿತಿ ಕೊರತೆಯಿಂದ ಪ್ರಗತಿ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಮಾಜದ ಪ್ರಗತಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಸಮಾಜಶಾಸ್ತ್ರೀಯ ಸಂಘ ಸ್ಥಾಪಿಸಲಾಗಿದೆ. ಸಂಘದ ಉದ್ಘಾಟನೆ ಜು. 20ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ ಕಳಸ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಶಾಸ್ತ್ರೀಯ ಸಂಘದ ಉದ್ಘಾಟನೆ ಸಮಾರಂಭ ಜು. 20ರಂದು ಬೆ.10.30ಕ್ಕೆ ನಡೆಯಲಿದ್ದು, ಗುಲ್ಬರ್ಗ ವಿವಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಎಸ್.ಎಲ್. ಹಿರೇಮಠ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ತಿಪ್ಪರಾಜು ಹವಾಲ್ದಾರ್, ಈಶ್ವರೀಯ ವಿವಿಯ ಸ್ಮಿತಾ ಅಕ್ಕನವರು, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಜಿಪಂ ಮಾಜಿ ಸದಸ್ಯ ಬಷೀರುದ್ದೀನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಸಂಘ ಸ್ಥಾಪನೆ ಉದ್ದೇಶ: ವಿದೇಶದಲ್ಲಿ ಸಮಾಜಶಾಸ್ತ್ರೀಯ ಸಂಘಗಳು ಸಾಕಷ್ಟು ಹೆಸರು ಮಾಡಿವೆ. ಸಮಾಜದ ಪ್ರಗತಿ ನಿಟ್ಟಿನಲ್ಲಿ ಅಲ್ಲಿನ ಸಂಘಗಳು ಸರ್ಕಾರದ ವಿವಿಧ ಪ್ರಗತಿಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಗ್ರಾಮೀಣ ಭಾಗದ ಪ್ರಗತಿಗೆ ತಮ್ಮದೇ ಆದ ರೀತಿಯಲ್ಲಿ ಶ್ರಮಿಸುತ್ತಿವೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಸಮಾಜ ಶಾಸ್ತ್ರೀಯ ಸಂಘವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಮಾಜದ ಕೆಳವರ್ಗದವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಿ ದೊರಕಿಸಿ ಕೊಡುವ ಕಾರ್ಯವನ್ನು ಮಾಡಲಿದೆ. ಸಮಾಜದಲ್ಲಿ ಮನೆ ಮಾಡಿರುವ ದೇವದಾಸಿ ಪದ್ಧತಿ, ಬಾಲಕಾರ್ಮಿಕ ಪದ್ಧತಿಯಂಥ ಅನಿಷ್ಟ ಆಚರಣೆಗಳಿಂದಾಗುವ ಅನಾಹುತಗಳು ಮತ್ತು ಅವುಗಳಿಗೆ ಪರಿಹಾರ ಹಾಗೂ ಇಂಥ ಆಚರಣೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜದ ಕೆಳವರ್ಗದವರ ಏಳಿಗೆಗೆ ಸಂಘ ಶ್ರಮಿಸಲಿದೆ ಎಂದು ತಿಳಿಸಿದರು.
ಸಮ್ಮೇಳನ ಆಯೋಜನೆ: ವಿದೇಶಗಳಲ್ಲಿ ಸಮಾಜಶಾಸ್ತ್ರೀಯ ಸಂಘದವರು ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವಿಶ್ವದ ಎಲ್ಲ ರಾಷ್ಟ್ರಗಳಲ್ಲಿರುವ ಸಂಘಗಳ ಸಮ್ಮೇಳನ ಆಯೋಜಿಸಲಾಗುತ್ತದೆ. ಆ ಮೂಲಕ ವಿಚಾರಗಳ ವಿನಿಮಯ ಮಾಡಿಕೊಳ್ಳಲಾಗುತ್ತದೆ. ಅದೇ ಮಾದರಿ ಭಾರತದಲ್ಲೂ ಎರಡು ವರ್ಷಗಳಿಗೊಮ್ಮೆ ದೇಶದಲ್ಲಿನ ಸಂಘಗಳ ಸಮ್ಮೇಳನ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಸಮ್ಮೇಳನ ಆಯೋಜಿಸುವ ಉದ್ದೇಶ ಸಂಘದ್ದಾಗಿದೆ. ಶೀಘ್ರದಲ್ಲಿಯೇ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಂಘದ ಘಟಕಗಳನ್ನು ತೆರೆದು ಸಮಾನ ಮನಸ್ಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಜತೆಗೂಡಿ ಗ್ರಾಮೀಣ ಭಾಗದಲ್ಲಿ ಸರ್ಕಾರದ ಯೋಜನೆಗಳ ಸಮಗ್ರ ಮಾಹಿತಿ ಒದಗಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಗ್ರಾಮವೊಂದನ್ನು ದತ್ತು ಪಡೆದು ಸಮಗ್ರ ಅಭಿವೃದ್ಧಿಗೊಳಿಸುವ ಚಿಂತನೆಯೂ ಸಂಘದ್ದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಅಯ್ಯಪ್ಪ ತುಕ್ಕಾಯಿ, ಜೆ.ಎಲ್. ಈರಣ್ಣ, ಅಮರೇಗೌಡ ಪಾಟೀಲ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

