ದೇವದುರ್ಗದಲ್ಲಿ ಅಭಿವೃದ್ಧಿ ಕಾರ್ಯ ವಿಳಂಬ; ಆರೋಪ
ರಾಯಚೂರು: ದೇವದುರ್ಗ ತಾಲೂಕಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ 300 ಕೋಟಿಗೂ ಹೆಚ್ಚಿನ ಕಾಮಗಾರಿಗಳನ್ನು ಆರಂಭಿಸುವಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಶಿವನಗೌಡ ನಾಯಕ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ದೇವದುರ್ಗದಲ್ಲಿ ಸಾಕಷ್ಟು ಅಭಿವೃದ್ಧಿ ಕೈಗೊಂಡಿದ್ದು, ಬಿಜೆಪಿ ಸರ್ಕಾರದ ಅವಧಿಯ ಕೊನೆಗೆ ಮಂಜೂರಾಗಿದ್ದ 300 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಕಾಮಗಾರಿ ಆರಂಭಿಸಲು ಆಡಳಿತ ನಿರ್ಲಕ್ಷ್ಯ ತೋರಿದೆ ಎಂದು ಟೀಕಿಸಿದರು.
ಯೋಜನೆ ವಿಳಂಬ: 136 ಕೋಟಿ ವೆಚ್ಚದಲ್ಲಿ ದೇವದುರ್ಗ-ಹತ್ತಿಗುಡೂರು ರಸ್ತೆ ಅಭಿವೃದ್ಧಿ ಕಾಮಗಾರಿ ಈಗಲೂ ಆರಂಭವಾಗಿಲ್ಲ. ಮಹಾ ರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಸರ್ಕಾರ ಕಾಮಗಾರಿ ಆರಂಭಿಸಲು ನಿರಾಸಕ್ತಿ ತೋರಿದೆ ಎಂದು ಆರೋಪಿಸಿದರು.
ಅದೇ ರೀತಿ 250 ಕೋಟಿ ವೆಚ್ಚದಲ್ಲಿ ದೇವದುರ್ಗ ತಾಲೂಕಿನ ಗ್ರಾಮೀಣ ಭಾಗದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಟೆಂಡರ್ ಮುಗಿದಿದ್ದರೂ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಂಡಿಲ್ಲ. ಇದರಿಂದ ಯೋಜನೆಯ ಲಾಭ ಜನತೆಗೆ ದೊರೆಯುತ್ತಿಲ್ಲ ಎಂದ ಅವರು, 46 ಕೋಟಿ ವೆಚ್ಚದಲ್ಲಿ ದೇವದುರ್ಗ ಪಟ್ಟಣಕ್ಕೆ ನಿರಂತರ ಕುಡಿಯುವ ನೀರೊದಗಿಸುವ ಯೋಜನೆಯೂ ವಿಳಂಬವಾಗಿದೆ ಎಂದು ದೂರಿದರು.
ಐಐಟಿ ಸ್ಥಾಪನೆಗೆ ಕೇಂದ್ರಕ್ಕೆ ಪತ್ರ: ಭೂಸೇನಾ ನಿಗಮದ ಉಪವಿಭಾಗದ ಆರಂಭವೂ ವಿಳಂಬವಾಗಿದೆ ಎಂದ ಅವರು, ದೇವದುರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ಹಿಂದೆ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಅವರ ಅವಧಿಯಲ್ಲಿ ಸಂಪುಟದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅದರ ಜಾರಿಗೆ ಪ್ರಸಕ್ತ ಸರ್ಕಾರ ಬದ್ಧತೆ ಪ್ರದರ್ಶಿಸಬೇಕಿದೆ ಎಂದು ಆಗ್ರಹಿಸಿದರು.
ಐಐಟಿ ಸ್ಥಾಪನೆಗೆ ಈಗಾಗಲೇ ರಾಜ್ಯ ಸಂಪುಟ ಸಭೆಯಲ್ಲಿ ಅನುಮೋದನೆ ಸಲ್ಲಿಸಿ ಕೇಂದ್ರಕ್ಕೆ ಪತ್ರ ಕಳಿಸಲಾಗಿದೆ. ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಐಐಟಿ ಸ್ಥಾಪನೆಯ ವಿಚಾರದಲ್ಲಿ ಬಿಜೆಪಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಬದಲಿಸುವ ಗೋಜಿಗೆ ಹೋಗುವ ಸಾಧ್ಯತೆಯಿಲ್ಲ ಎಂದು ತಿಳಿಸಿದರು.
25ರಂದು ಬೆಂಗಳೂರು ಚಲೋ: ರಾಜ್ಯ ಸರ್ಕಾರ ಗ್ರಾಪಂ ಸದಸ್ಯರ ಸದಸ್ಯತ್ವ ಅನರ್ಹತೆಗೆ ಸಂಬಂಧಿಸಿ ಕಾಯಿದೆಯಲ್ಲಿ ತಿದ್ದುಪಡಿ ಮಾಡಲು ಮುಂದಾಗಿರುವುದನ್ನು ಬಿಜೆಪಿ ವಿರೋಧಿಸುತ್ತದೆ. ಸರ್ಕಾರದ ಈ ನಿರ್ಧಾರ ವಿರೋಧಿಸಿ ಜು.25ರಂದು ಬೆಂಗಳೂರು ಚಲೋ ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದ ಎಲ್ಲೆಡೆಯಿಂದ ಗ್ರಾಪಂ ಸದಸ್ಯರು ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಆರಂಭಿಸಿರುವ ಅನ್ನಭಾಗ್ಯ ಯೋಜನೆಯನ್ನು ಸ್ವಾಗತಿಸಿದ ಅವರು, ಯೋಜನೆಯ ಜಾರಿಗೆ ಅಕ್ಕಿ ಕೊರತೆ ನೀಗಿಸಲು ಎಪಿಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಸ್ಥಗಿತಗೊಳಿಸಿದ್ದು ಸರಿಯಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ನಿರಾಸಕ್ತಿ: ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ನಾಲ್ಕು ತಿಂಗಳು ಗತಿಸಿದರೂ ರಾಜ್ಯ ಸರ್ಕಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡದೇ ಮತದಾರರ ನಿರೀಕ್ಷೆಗೆ ತಣ್ಣೀರೆರಚಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಟ್ಟಿ ಪಟ್ಟಣದ ಅಭಿವೃದ್ಧಿಗೆ ಗಣಿ ಕಂಪನಿಯಿಂದ 100 ಕೋಟಿ ಅನುದಾನ ಒದಗಿಸಲು ನಿರ್ಣಯ ಕೈಗೊಂಡಿತ್ತು. ಕಾಂಗ್ರೆಸ್ ಸರ್ಕಾರ ಯಾವುದೇ ಆಸಕ್ತಿ ತೋರಿಲ್ಲ ಎಂದು ಟೀಕಿಸಿದರು.
ಪ್ರಸಕ್ತ ಸರ್ಕಾರ ತಾಲೂಕು ರಚನೆ ಕೈಬಿಟ್ಟಿರುವುದು ಸಮಂಜಸವಲ್ಲ ಎಂದು ಆರೋಪಿಸಿದ ಅವರು, ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ, ಒಪೆಕ್ ಆಸ್ಪತ್ರೆ ಆರಂಭ ಸೇರಿ ಅನೇಕ ವಿಚಾರಗಳಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬದ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದರು. ಶಾಸಕ ತಿಪ್ಪರಾಜು ಹವಾಲ್ದಾರ್, ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್, ಪ್ರಮುಖರಾದ ತ್ರಿವಿಕ್ರಮ್ ಜೋಷಿ, ಆರ್. ತಿಮ್ಮಯ್ಯ, ಬಂಡೇಶ್ ವಲ್ಕಂದಿನ್ನಿ, ನರಸಪ್ಪ ಯಕ್ಲಾಸಪುರ, ಮಹಾಲಿಂಗ, ಅಚ್ಯುತರೆಡ್ಡಿ ಮತ್ತಿತರರಿದ್ದರು.
ಬಿಎಸ್ವೈ ವಿಚಾರ: ವರಿಷ್ಠರೇ ಅಂತಿಮ
ರಾಯಚೂರು: ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿರುವ ಮಾಜಿ ಸಚಿವ ಶಿವನಗೌಡ ನಾಯಕ, ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದರು. ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ರಾಜ್ಯ ಮಟ್ಟದಲ್ಲಿ ಪಕ್ಷದ ನಾಯಕರು ಸಭೆ ಕರೆದು ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಹೈಕಮಾಂಡ್ ಗೆ ಈ ಬಗ್ಗೆ ಮಾಹಿತಿ ರವಾನಿಸಿದ್ದು, ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

