ನಾಳೆಯಿಂದ ಕಾನೂನು ರಥ ಸಂಚಾರ
ಕನ್ನಡಪ್ರಭ ವಾರ್ತೆ, ರಾಯಚೂರು, ಜೂ.4
ಕಾನೂನು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆರಂಭಿಸಿರುವ ಕಾನೂನು ರಥವು ಜಿಲ್ಲೆಯಲ್ಲಿ ಈಗಾಗಲೇ ಪ್ರವಾಸ ಕೈಗೊಂಡಿದ್ದು, ಜೂ. 6, 7 ಮತ್ತು 8ರಂದು ವಿವಿಧೆಡೆ ಸಂಚರಿಸಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಜನರಲ್ಲಿ ಕಾನೂನಿನ ಅರಿವಿನ ಕೊರತೆಯಿದೆ. ಈ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ಕಾನೂನಿನ ಸವಲತ್ತುಗಳನ್ನು ಕೊಂಡೊಯ್ದು ಸಮಸ್ಯೆ ಪರಿಹರಿಸುವ ಕಾರ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೈಗೊಳ್ಳಲಾಗುತ್ತಿದೆ. ಅದರಂಗವಾಗಿ ಕಾನೂನು ರಥ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದರು.
ಸ್ಥಳದಲ್ಲೇ ಪರಿಹಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರಥ ಸಂಚರಿಸುವ ವೇಳೆ ಆಯಾ ಭಾಗದಲ್ಲಿನ ವಿವಿಧ ಪ್ರಕರಣಗಳನ್ನು ಅಲ್ಲಿಯೇ ಪರಿಹರಿಸಲು ಪ್ರಯತ್ನಿಸಲಾಗುತ್ತದೆ ಎಂದ ಅವರು, ಕಾನೂನು ರಥ ಸಂಚರಿಸುವ ವೇಳೆ ಆಯೋಜಿಸುವ ಕಾರ್ಯಕ್ರಮಗಳಲ್ಲಿ ವೈದ್ಯರು, ಪೊಲೀಸ್ ಅಧಿಕಾರಿಗಳು ಹಾಗೂ ಆರ್ಟಿಒ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯ ಕೊರತೆಯಿಂದಲೇ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳು ಉದ್ಭವವಾಗುತ್ತಿದ್ದು, ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವೈದ್ಯರು ಸ್ವಚ್ಛತೆ ಕಾಪಾಡಿಕೊಳ್ಳುವುದರ ಮಹತ್ವದ ಬಗ್ಗೆ ಮಾತನಾಡಲಿದ್ದಾರೆ. ಪೊಲೀಸ್ ಅಧಿಕಾರಿಗಳು ಸಂಚಾರಿ ನಿಯಮಗಳ ಪಾಲನೆಯಿಂದ ಅಪಘಾತ ತಡೆಯುವ ಬಗ್ಗೆ ಮಾಹಿತಿ ನೀಡುವರು. ಅದೇ ರೀತಿ ವಾಹನಗಳ ಚಾಲನೆಗೆ ಚಾಲಕ ಹೊಂದಿರಬೇಕಾದ ಪ್ರಮಾಣ ಪತ್ರ ಮತ್ತು ಅದರ ಮಹತ್ವದ ಬಗ್ಗೆ ಸಾರಿಗೆ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ವಿವರಿಸಿದರು.
ಮನೆ ಬಾಗಿಲಿಗೆ ಡಿಎಲ್?: ಇದೇ ವೇಳೆ ಜನರ ಮನೆ ಬಾಗಿಲಿಗೆ ವಾಹನ ಚಾಲನಾ ಪರವಾನಗಿ ಪತ್ರ ವಿತರಣೆಯ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆಯೂ ಚಿಂತನೆ ನಡೆಸಿದ್ದು, ಗ್ರಾಮೀಣ ಭಾಗದಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸುವ ಮೂಲಕ ಚಾಲನಾ ಪತ್ರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಯೋಚನೆಯಿದೆ ಎಂದು ಹೇಳಿದರು.
ಜಿಲ್ಲಾ ಕಾರಾಗೃಹಕ್ಕೆ ಶೀಘ್ರದಲ್ಲಿಯೇ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸುವುದಾಗಿ ತಿಳಿಸಿದ ಅವರು, ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳುವ ಅವಶ್ಯಕತೆಯಿದೆ. ಮಾನವೀಯತೆ ದೃಷ್ಟಿಯಿಂದ ಅವರನ್ನು ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಾರ್ಪಾಟು ಮಾಡುವ ಇರಾದೆ ವ್ಯಕ್ತಪಡಿಸಿದರು.
ತ್ವರಿತ ವಿಲೇವಾರಿಗೆ ಸೂಚನೆ: ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಈಗಾಗಲೇ ವಿವಿಧ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ. ಆ ಮೂಲಕ ಪ್ರಕರಣಗಳ ಇತ್ಯರ್ಥಗೊಳಿಸುವಿಕೆಗೆ ವೇಗ ನೀಡಲಾಗುತ್ತಿದೆ ಎಂದ ಅವರು, ಜಿಲ್ಲಾ ನ್ಯಾಯಾಲಯ ಕಟ್ಟಡಗಳ ಸಂಕೀರ್ಣ ನಿರ್ಮಾಣಕ್ಕೆ ಸದ್ಯದ ಜಿಲ್ಲಾ ಆಸ್ಪತ್ರೆಯ ಜಾಗ ನಿಗದಿಯಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

