ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ರಾಯಚೂರು: ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದ ನಂತರ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಸಿಂಧನೂರು ತಾಲೂಕು ತುರ್ವಿಹಾಳ ನಾಡ ಕಚೇರಿ ಗುಮಾಸ್ತರಾಗಿದ್ದ ಎಸ್. ತಿಪ್ಪರಾಜು ಎಂದು ಗುರುತಿಸಲಾಗಿದೆ. ಈತ 2008ರಲ್ಲಿ ವ್ಯಕ್ತಿಯೊಬ್ಬರಿಂದ 900 ರು. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ. ನಂತರದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಪರಾರಿಯಾಗಿದ್ದ.
ಈತನ ಬಂಧನಕ್ಕಾಗಿ ರಾಯಚೂರು ಲೋಕಾಯುಕ್ತ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಹುಬ್ಬಳ್ಳಿ, ಬಳ್ಳಾರಿ, ಆದೋನಿ, ವಿಶಾಖಪಟ್ಟಣಗಳಲ್ಲಿ ಅಲೆದಾಡಿದ ಆರೋಪಿ ರಾಯಚೂರಿಗೆ ಬಂದಿರುವ ಸುಳಿವಿನ ಮಾಹಿತಿ ಪಡೆದ ಲೋಕಾಯುಕ್ತರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಬಿ. ಪಾಟೀಲ್ ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ
ಸಿಂಧನೂರು: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಟ್ಕಾ ನಿಷೇಧ ಮಾಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದು, ಬಡವರ ಆರ್ಥಿಕ ಹಿನ್ನಡೆಗೆ ಕಾರಣವಾಗಿರುವ ಮದ್ಯವನ್ನು ಸಹ ನಿಷೇಧಿಸುವಂತೆ ವಾಲ್ಮೀಕಿ ಸಮಾಜದ ಮುಖಂಡ ನಾಮದೇವಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುಟ್ಕಾ ತಿನ್ನುವುದು ಮತ್ತು ಸಾರಾಯಿ ಕುಡಿತದಿಂದ ಅನೇಕ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜೀವನದಲ್ಲಿ ನೆಮ್ಮದಿ ಹಾಳಾಗಿದೆ. ಎಷ್ಟೋ ಮಹಿಳೆಯರು ತಮ್ಮ ಗಂಡಂದಿರು ಮದ್ಯವ್ಯಸನಿಗಳಾಗಿರುವುದರಿಂದ ದೌರ್ಜನ್ಯಕ್ಕೆ ಒಳಗಾಗಿದ್ದು ಸಂಸಾರಿಕ ಜೀವನ ನಡೆಸಲು ದುಸ್ತರವಾಗಿದೆ. ಎಷ್ಟೋ ಸಂಸಾರಗಳು ಇಂದು ಬೀದಿಗೆ ಬಂದಿವೆ. ಎಷ್ಟೋ ಜನರು ಕುಡಿತದ ಚಟದಿಂದ ಸಾವಿಗೀಡಾಗಿದ್ದಾರೆ. ಹೀಗಾಗಿ ಗುಟ್ಕಾದಂತೆ ಮದ್ಯವನ್ನು ಸಹ ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

