ರಾಯಚೂರು

ಹಳೇ ಬಸ್ ನಿಲ್ದಾಣ ಸ್ವಚ್ಛತೆಗೆ ಒತ್ತಾಯ

Published On :

ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.12
ನಗರದ ನೂತನ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿ ನಾಲ್ಕು ವರ್ಷಗಳಾದರೂ ಪೂರ್ಣಗೊಂಡಿಲ್ಲ. ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದೂ ಗೊತ್ತಿಲ್ಲ. ಆದ್ದರಿಂದ ಇದ್ದ ಹಳೇ ಬಸ್ ನಿಲ್ದಾಣವನ್ನೇ ಸ್ವಚ್ಛಗೊಳಿಸುವಂತೆ ಜೈ ಕನ್ನಡ ರಕ್ಷಣಾ ವೇದಿಕೆಯು ಬಸ್ ಡಿಪೋ ಮ್ಯಾನೇಜರ್ ಕರೇಗೌಡರಿಗೆ ಒತ್ತಾಯಿಸಿದರು.
ಈ ಕುರಿತು ಬುಧವಾರ ಮನವಿ ಪತ್ರ ಸಲ್ಲಿಸಿದ ಸಂಘಟನೆ ತಾಲೂಕಾಧ್ಯಕ್ಷ ವೀರೇಶ ಭಾವಿಮನಿ, ಬಸ್ ನಿಲ್ದಾಣದಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲದೆ ಇಲ್ಲಿಗೆ ದಿನನಿತ್ಯ ಬರುವ ಪ್ರಯಾಣಿಕರು ಹಾಗೂ ಹೆಣ್ಣುಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಇದರ ಬಗ್ಗೆ ಈಗಾಗಲೇ ಅನೇಕ ಬಾರಿ ಮನವಿ ಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ನಿರ್ಲಕ್ಷ್ಯ- ಆರೋಪ: ನೀವು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣದಿಂದಲೇ ಈಗಿರುವ ಬಸ್‌ನಿಲ್ದಾಣ ಕೊಳಕಾಗಿದೆ. ಹೊಸದಾಗಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣವು ಯಾವ ಕಾಲಕ್ಕೆ ಸಂಪೂರ್ಣಗೊಳ್ಳುತ್ತದೆ ಎಂಬುದು ಗೊತ್ತಿಲ್ಲ. ಆದ್ದರಿಂದ ಈಗಿರುವ ನಿಲ್ದಾಣವನ್ನು ಸ್ವಚ್ಛಗೊಳಿಸಬೇಕು. ಹೆಣ್ಣು ಮಕ್ಕಳಿಗೆ ಕುಳಿತುಕೊಳ್ಳಲು ಪ್ರತ್ಯೇಕ ವ್ಯವಸ್ಥೆಯನ್ನು ಸದ್ಯವಿರುವ ನಿಲ್ದಾಣದಲ್ಲಿ ನಿರ್ಮಾಣ ಮಾಡಬೇಕು.
ಶೌಚಾಲಯವನ್ನು ಸ್ವಚ್ಛಗೊಳಿಸಬೇಕು. ಉತ್ತಮವಾದ ಲೈಟ್‌ಗಳನ್ನು ಬಳಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು. ಮಳೆ ಬಂದಾಗ ನಿಲ್ದಾಣದಲ್ಲಿ ಕಾಲಿಡಲೂ ಆಗದ ಪರಿಸ್ಥಿತಿಯಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ವಿಚಾರಣೆ ಕೌಂಟರ್‌ನಲ್ಲಿ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡಬೇಕೆಂದು ಒತ್ತಾಯಿಸಿದರು.
ಹೋರಾಟದ ಎಚ್ಚರಿಕೆ: ಒಂದು ವೇಳೆ ಇದರ ಬಗ್ಗೆ ಪುನಾ ನಿರ್ಲಕ್ಷ್ಯ ತೋರಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಉಪಾಧ್ಯಕ್ಷ ಮಲ್ಲಿಕಾರ್ಜುನ, ಸಂಘಟನಾ ಕಾರ್ಯದರ್ಶಿ ಹನುಮಂತ, ಪ್ರಧಾನ ಕಾರ್ಯದರ್ಶಿ ನಾಗರಾಜ, ಕುನ್ನಟಗಿ ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಹೂಗಾರ, ಟಿಪ್ಪುಸುಲ್ತಾನ, ಶರೀಪ್, ನರಸಿಂಹ, ಆಸೀಫ್, ಮುನ್ನಾ, ಸೈಯದ್, ಅಮರೇಶ, ಮೌಲಾಸಾಬ, ಆಲಂಬಾಷಾ ಮತ್ತಿತರರು ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.