ರಾಯಚೂರು

ವರ್ಷಾಂತ್ಯದಲ್ಲಿ ಗ್ರಾಮಗಳಿಗೆ ನೀರು ಶುದ್ಧೀಕರಣ ಘಟಕ

Published On :

ಕನ್ನಡಪ್ರಭ ವಾರ್ತೆ ,   ರಾಯಚೂರು ,   ಜೂ.17
ರಾಜ್ಯದಲ್ಲಿ ಎರಡು ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆಯಿರುವ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರೊದಗಿಸುವ ನಿಟ್ಟಿನಲ್ಲಿ ಪ್ರಸಕ್ತ ವರ್ಷಾಂತ್ಯದೊಳಗೆ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಹಾಗೆಯೇ ನದಿ ನೀರಿನ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ. ವಿವಿಧ ನೀರಾವರಿ ಯೋಜನೆಯಡಿ ಕಾಲುವೆಗಳಿಂದ ಸಮರ್ಪಕ ನೀರೊದಗಿಸಲು ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಮಾನವಿ ತಾಲೂಕಿನ ಕವಿತಾಳ ಬಳಿ ಕುಡಿಯುವ ನೀರಿನ ಕೆರೆಯ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಸೆನಿಕ್ ಯುಕ್ತ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಬಗ್ಗೆ ಸರ್ಕಾರ, ಜಿಲ್ಲಾಡಳಿತ, ಸಮೂಹ ಸಂಸ್ಥೆ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿ ಮಾಹಿತಿಯಿದೆ. ಆದರೆ ಆ ಮಾಹಿತಿಗೆ ತಾಳೆಯಾಗುತ್ತಿಲ್ಲ. ಆ ಮಾಹಿತಿಯ ಆಧಾರದಲ್ಲಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು ತಪ್ಪಾಗುತ್ತದೆ ಎಂಬ ಆಂತಕದಿಂದಲೇ ತಾವು ವಾಸ್ತವ ಸ್ಥಿತಿಯನ್ನು ಅರಿಯುವ ಉದ್ದೇಶದಿಂದ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.
ಜನಾರೋಗ್ಯ ಕಾಪಾಡುವ ಉದ್ದೇಶ: ಶುದ್ಧ ಕುಡಿಯುವ ನೀರೊದಗಿಸುವ ಮೂಲಕ ಜನಾರೋಗ್ಯ ಕಾಪಾಡುವುದು ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶವಾಗಿದೆ. ಈ ನಿಟ್ಚಿನಲ್ಲಿ ನದಿ ನೀರಿನ ಬಳಕೆ ಹಾಗೂ ಕೆರೆಗಳ ನಿರ್ಮಾಣದ ಮೂಲಕ ನೀರು ಸಂಗ್ರಹಿಸಿ ಕುಡಿಯುವ ನೀರೊದಗಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಇಂಥ ಕಾಮಗಾರಿಗಳಿಗೆ ಚುರುಕು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಭೂ ಸೇನಾ ನಿಗಮದವರು ವಿವಿಧೆಡೆ ವಹಿಸಿಕೊಂಡ ಕುಡಿಯುವ ನೀರಿನ ಕೆರೆ ನಿರ್ಮಾಣ ಕಾಮಗಾರಿ ನಿರ್ಮಾಣ ವಿಳಂಬವಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಆದೇಶಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಪ್ರತಾಪಗೌಡ ಪಾಟೀಲ್, ಹಂಪಯ್ಯ ನಾಯಕ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.