ರಾಯಚೂರು

ಶುದ್ಧ ಕುಡಿಯುವ ನೀರು ಪೂರೈಕೆಗೆ ಕರವೇ ಮನವಿ

Published On :

ಕನ್ನಡಪ್ರಭ ವಾರ್ತೆ ,   ಲಿಂಗಸ್ಗೂರು ,   ಜೂ.17
ತಾಲೂಕಿನ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು.
ಗದಗ ಮಾದರಿಯಲ್ಲಿ ಶುದ್ಧ ಕೊಡಿ: ತಾಲೂಕಿನಲ್ಲಿ 111 ಹಳ್ಳಿಗಳಲ್ಲಿ ಅಶುದ್ಧ ನೀರು ದೊರೆಯುತ್ತಿರುವುದಾಗಿ ಇಲಾಖೆ ಒಪ್ಪಿಕೊಂಡಿದೆ. ಬಹುತೇಕ ಗ್ರಾಮಗಳ ಜನತೆ ಆರ್ಸೆನಿಕ್ ವಿಷಪೂರಿತ, ಲವಣಾಂಶ ಮತ್ತು ಕಬ್ಬಿಣಾಂಶವುಳ್ಳ ಅಶುದ್ಧ ನೀರು ಸೇವನೆಯಿಂದ ಅನೇಕ ರೋಗಗಳಿಂದ ಬಳಲುವಂತಾಗಿದೆ. ಶುದ್ಧ ಕುಡಿಯುವ ಹಾಗೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೆ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ಕರವೇ ಕಾರ್ಯಕರ್ತರು ಅಶುದ್ಧ ನೀರನ್ನು ಸಚಿವರಿಗೆ ತೋರಿಸುವ ಮೂಲಕ ತಾಲೂಕಿಗೆ ಗದಗ ಮಾದರಿಯಲ್ಲಿ ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಿ ಬಡ ಜನತೆಯ ಬವಣೆ ನೀಗಿಸಬೇಕೆಂದು ಒತ್ತಾಯಿಸಿದರು.
ಅಧಿಕಾರಿಗಳು ವಿಫಲ: ಹೊನ್ನಳ್ಳಿ ಬಳಿಯ ರಾಜೀವಗಾಂಧಿ ಗ್ರಾಮೀಣ ಕುಡಿಯುವ ನೀರು ಯೋಜನೆಯಿಂದ 7 ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು, ಮಸ್ಕಿ ವಿಧಾನಸಭಾ ಕ್ಷೇತ್ರದ ಸರ್ಜಾಪುರ ಗ್ರಾಮದ ಜನತೆ ಕಳೆದ ಹಲವು ದಶಕಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಾ ಬಂದಿದ್ದಾರೆ. ಮಳೆಯ ನೀರನ್ನು ಕೆರೆಯಲ್ಲಿ ಸಂಗ್ರಹಿಸಿ ಸೇವಿಸುತ್ತಾ ಬರುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ಶಾಲಾ ಮಕ್ಕಳು ಸೇರಿದಂತೆ ಜನತೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೂಡಲೇ ಈ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಸಚಿವ ಎಚ್.ಕೆ. ಪಾಟೀಲ್ ಅವರು, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಪಂ ಉಳಿದ ಅಧಿಕಾರಿಗಳನ್ನು ಕರೆದು, ನಾನು ಬೆಂಗಳೂರಿಗೆ ತೆರಳುವ ಮುನ್ನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಲ್ಲಿಸಿದ ಮನವಿ ಪ್ರಕಾರ ಸಂಬಂಧಿಸಿದ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ತಮ್ಮ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಕರವೇ ತಾಲೂಕು ಅಧ್ಯಕ್ಷ ಜಿಲಾನಿಪಾಶಾ, ಕಾರ್ಯಕರ್ತರಾದ ಅಜೀಜ್ ಪಾಶಾ, ಶಿವರಾಜ ನಾಯಕ, ಆಂಜನೇಯ ಭಂಡಾರಿ, ಸದ್ದಾಂ ಹುಸೇನ್, ರಾಘು ಭಜಂತ್ರಿ, ಚಂದ್ರು ನಾಯಕ, ನಿತ್ಯಾನಂದ, ಚೇತನ ಗುತ್ತೇದಾರ, ಬಿ.ಎಸ್. ನಾಯಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.